Karnataka Budget 2023: ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಅನುದಾನ
ಕರ್ನಾಟಕ, ಜುಲೈ, 07: ಸಿಎಂ ಹಾಗೂ ಹಣಕಾಸು ಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು (ಜುಲೈ 07) 2023ನೇ ಸಾಲಿನ ರಾಜ್ಯ ಅಯವ್ಯಯ ಮಂಡನೆ ಮಾಡಿದ್ದಾರೆ. ಹಾಗಾದರೆ ಈ ಬಜೆಟ್‌ನಲ್ಲಿ ಜಲಸಂಪನ್ಮೂಲ ಇಲಾಖೆಗೆ ಏನು ಕೊಡುಗೆ ನೀಡಿದ್ದಾರೆ ಅನ್ನುವ ವಿವರವನ್ನು ಇಲ್ಲಿ ಗಮನಿಸಿ.
ರಾಜ್ಯದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಲ್ಲಿ 19 ಕೆರೆ ತುಂಬಿಸುವ ಯೋಜನೆಗಳನ್ನು 770 ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗುತ್ತಿದೆ. ಈ ಮೂಲಕ ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ 899 ಕೆರೆಗಳಿಗೆ ನೀರು ತುಂಬಿಸಲಾಗುವುದು.

ನಮ್ಮ ಸರ್ಕಾರದ ಅವಧಿಯಲ್ಲಿ ತೀವ್ರಗತಿಯಲ್ಲಿ ಪೂರ್ಣಗೊಳಿಸಲು ಚಾಲನೆಗೊಳಿಸಿದ್ದ 12,912 ಕೋಟಿ ರೂ. ಮೊತ್ತದ ಎತ್ತಿನ ಹೊಳೆ ಯೋಜನೆಯನ್ನು ಹಿಂದಿನ ಸರ್ಕಾರವು ಸಕಾಲದಲ್ಲಿ ಪೂರ್ಣಗೊಳಿಸಿರಲಿಲ್ಲ. ಆದ್ದರಿಂದ ದರ ಹೆಚ್ಚಳಗೊಂಡು ಈ ಯೋಜನೆಯು 23,252 ಕೋಟಿ ರೂ. ಮೊತ್ತಕ್ಕೆ ಪರಿಷ್ಕೃತಗೊಂಡಿದೆ. ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲು ಆದ್ಯತೆಯ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು.
ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ವಿವರವಾದ ಯೋಜನಾ ವರದಿ ಹಾಗೂ ಪರಿಸರ ತೀರುವಳಿ ಪ್ರಸ್ತಾವನೆಯನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಶೀಘ್ರವಾಗಿ ತೀರುವಳಿ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. Compensatory afforestationಗೆ ಅಗತ್ಯವಿರುವ ಭೂಮಿಯನ್ನು ಗುರುತಿಸಲಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಗಳನ್ನು ಜರುಗಿಸಲು ಆದ್ಯತೆ ಮೇರೆಗೆ ಕ್ರಮವಹಿಸಲಾಗುವುದು.
ಮಧ್ಯ ಕರ್ನಾಟಕದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯನ್ನು ಡಬಲ್ ಇಂಜಿನ್ ಎಂದು ಹೇಳಿಕೊಳ್ಳುವ ಸರ್ಕಾರವಿದ್ದಾಗ್ಯೂ, ರಾಷ್ಟ್ರೀಯ ಯೋಜನೆಯನ್ನಾಗಿ ಇಲ್ಲಿಯವರೆಗೂ ಅಧಿಕೃತವಾಗಿ ಅನುಮೋದಿಸಿರುವುದಿಲ್ಲ. ಕೇಂದ್ರ ಸರ್ಕಾರವು 2023-24ನೇ ಸಾಲಿನ ತನ್ನ ಆಯವ್ಯಯದಲ್ಲಿ 5,300 ಕೋಟಿ ರೂ.ಗಳ ಅನುದಾನವನ್ನು ಭದ್ರಾ ಯೋಜನೆಗೆ ಘೋಷಿಸಿದೆ. ಸದರಿ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಿ ಯೋಜನೆಯ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು.
ಮಹದಾಯಿ ನ್ಯಾಯಾಧಿಕರಣದಿಂದ ಕಳಸಾ ಮತ್ತು ಬಂಡೂರಿ ನಾಲಾ ತಿರುವು ಕುಡಿಯುವ ನೀರಿನ ಯೋಜನೆಗೆ ಹಂಚಿಕೆಯಾದ 3.90 ಟಿ.ಎಂ.ಸಿ. ನೀರಿನ ಬಳಕೆಗಾಗಿ ಈಗಾಗಲೇ ಕೇಂದ್ರ ಜಲ ಆಯೋಗದ ತೀರುವಳಿ ದೊರಕಿದೆ. ಅವಶ್ಯಕವಿರುವ ಅರಣ್ಯ ತೀರುವಳಿ ಪಡೆದು, ಕಾಮಗಾರಿಗಳಿಗೆ ಚಾಲನೆ ನೀಡಲು ಪ್ರಯತ್ನಿಸಲಾಗುವುದು.
ಕೇಂದ್ರ ಸರ್ಕಾರದ PMKSY-AIBP ಯೋಜನೆಯಡಿ 2021-26ನೇ ಅವಧಿಗೆ ಪರಿಗಣಿಸಲಾದ ಪಟ್ಟಿಯಲ್ಲಿ ರಾಜ್ಯದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 1 ಮತ್ತು 2ರ ವಿಸ್ತರಣೆ ಹಾಗೂ ಸನ್ನತಿ ಏತ ನೀರಾವರಿ ಯೋಜನೆಗಳನ್ನು ಗುರುತಿಸಲಾಗಿದೆ. ಸದರಿ ಯೋಜನೆಗಳಿಗೆ ಸಕ್ಷಮ ಪ್ರಾಧಿಕಾರಗಳ ತೀರುವಳಿ ಪಡೆದು, ಕೇಂದ್ರ ಸಹಾಯಧನ ಪಡೆಯಲು ಆದ್ಯತೆಯ ಕ್ರಮ ಜರುಗಿಸಲಾಗುವುದು.
ತುಂಗಭದ್ರಾ ಜಲಾಶಯದಲ್ಲಿ ಹೂಳಿನ ಸಂಗ್ರಹಣೆಯಿಂದ ಉಂಟಾಗಿರುವ ನೀರು ಸಂಗ್ರಹಣೆ ಸಾಮರ್ಥ್ಯದ ಕೊರತೆ ನಿವಾರಿಸಲು ಕೊಪ್ಪಳ ಜಿಲ್ಲೆಯ ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನೆಯನ್ನು ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಸಮಾಲೋಚಿಸಿ, ಸಹಮತಿಯೊಂದಿಗೆ ಯೋಜನೆ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗುವುದು.
ಕೃಷ್ಣಾ ನ್ಯಾಯಾಧಿಕರಣ-2ರ ತೀರ್ಪಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಹಂಚಿಕೆಯಾಗಿರುವ 130 ಟಿ.ಎಂ.ಸಿ ನೀರಿನ ಬಳಕೆಗಾಗಿ ಯೋಜನಾ ಕಾಮಗಾರಿಗಳ ಜೊತೆಗೆ ಭೂಸ್ವಾಧೀನತೆ ಹಾಗೂ ಪುನರ್ ವಸತಿ ಮತ್ತು ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಿ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು.
ನಮ್ಮ ಸರ್ಕಾರದ ಹಿಂದಿನ ಅವಧಿಯ ಅಂತ್ಯದಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ 5,655 ಕೋಟಿ ರೂ. ಮೊತ್ತದ ಬಾಕಿ ಕಾಮಗಾರಿಗಳಿದ್ದು, ನಿಕಟ ಪೂರ್ವ ಸರ್ಕಾರವು ತಮ್ಮ ಅವಧಿಯ ಅಂತ್ಯಕ್ಕೆ ಇದನ್ನು 12,729 ಕೋಟಿ ರೂ.ಗಳಿಗೆ ಹೆಚ್ಚಿಸಿದೆ. ಹಾಗೆಯೇ 2017-18ರಲ್ಲಿ 440 ಕೋಟಿ ರೂ.ಗಳ ಬಿಲ್ಲುಗಳು ಪಾವತಿಗೆ ಬಾಕಿಯಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ಇದು ಸುಮಾರು 2,000 ಕೋಟಿ ರೂ.ಗಳಿಗೆ ಏರಿದೆ. ಹಿಂದಿನ ಸರ್ಕಾರದ ಆರ್ಥಿಕ ಅಶಿಸ್ತಿನಿಂದಾಗಿ ಬಾಕಿ ಉಳಿದಿರುವ ಬಾಧ್ಯತೆಗಳ ನೈಜತೆಯನ್ನು ಪರಿಶೀಲಿಸಿ ಕ್ರಮವಹಿಸಲಾಗುವುದು.
ಇನ್ನು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕೈಗೆತ್ತಿಕೊಂಡಿದ್ದ ಕೆ.ಸಿ. ವ್ಯಾಲಿ ಮತ್ತು ಹೆಚ್.ಎನ್. ವ್ಯಾಲಿ ಯೋಜನೆಗಳಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಏತ ನೀರಾವರಿ ಯೋಜನೆಯ ಮೂಲಕ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿ ಈ ಜಿಲ್ಲೆಗಳ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಂಡು ರೈತರು ಸಂತಸಗೊಂಡಿದ್ದಾರೆ. ಪ್ರಸ್ತುತ ಎರಡನೇ ಹಂತದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 296 ಕೆರೆಗಳನ್ನು ತುಂಬಿಸುವ ಯೋಜನೆಯನ್ನು 529 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
ಕೆರೆಗಳ ಸುತ್ತ ಜೀವಪರಿಸರವನ್ನು ಉಳಿಸಿಕೊಂಡು, ಅವುಗಳ ಪುನರುಜ್ಜೀವನಗೊಳಿಸುವುದಕ್ಕಾಗಿ ಕೆರೆಗಳ ಬಳಕೆದಾರರ ಸಂಘಗಳನ್ನು ಬಲಿಷ್ಠಗೊಳಿಸಿ ಕೆರೆ ಅಭಿವೃದ್ಧಿಗೆ ಪಾಲುದಾರರನ್ನಾಗಿ ಮಾಡಿ ಜಲಬಳಕೆ ಮಾಡಲು ಅರ್ಥಪೂರ್ಣ ಕ್ರಿಯಾಯೋಜನೆ ಸಿದ್ಧಪಡಿಸಲಾಗುವುದು.
ಜಲಸಂಪನ್ಮೂಲ ಇಲಾಖೆಯಡಿ ಏಪ್ರಿಲ್ 1 2023ರವರೆಗೆ ಅನುಮೋದಿಸಲಾಗಿರುವ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ಒದಗಿಸುವ ಅವಶ್ಯಕತೆಯಿದೆ. ಈ ಯೋಜನೆಗಳ ವೆಚ್ಚವು ಕಾಮಗಾರಿ ಹಾಗೂ ಭೂಸ್ವಾಧೀನ ವೆಚ್ಚ ಹೆಚ್ಚಳದ ಕಾರಣ 25,000-40,000 ಕೋಟಿ ರೂಪಾಯಿಗಳಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಅಲ್ಲದೇ ಕಳೆದ 6 ತಿಂಗಳ ಅವಧಿಯಲ್ಲಿ 25,548 ಕೋಟಿ ರೂ. ಅಂದಾಜು ವೆಚ್ಚದ 1,274 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಚಾಲನೆ ನೀಡಲಾಗಿದೆ.
ಜಲಸಂಪನ್ಮೂಲ ಇಲಾಖೆಯ ಆಯವ್ಯಯ ಹಂಚಿಕೆ ವಾರ್ಷಿಕ ಸರಾಸರಿ 20,000 ಕೋಟಿ ರೂಪಾಯಿಗಳಷ್ಟಿದ್ದು, ಅನುಮೋದಿಸಿರುವ ಯೋಜನೆಗಳ ಅಂದಾಜು ಮೊತ್ತ ಇದರ ಐದು ಪಟ್ಟು ಹೆಚ್ಚಾಗಿರುವುದು ವಿತ್ತೀಯ ಶಿಸ್ತಿನ ಉಲ್ಲಂಘನೆಗೆ ಸ್ಪಷ್ಟ ನಿದರ್ಶನವಾಗಿದೆ. ಅಲ್ಲದೆ ಕಳೆದ ಆರು ತಿಂಗಳ ಅವಧಿಯಲ್ಲಿಯೇ ಇಲಾಖೆಯ ವಾರ್ಷಿಕ ಆಯವ್ಯಯ ಹಂಚಿಕೆಗಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಚಾಲನೆ ನೀಡಿರುವುದು ವಿತ್ತೀಯ ಅಶಿಸ್ತಿನ ಪರಮಾವಧಿಯಲ್ಲದೆ ಇನ್ನೇನು? ಹಿಂದಿನ ಸರ್ಕಾರದ ವಿವೇಚನಾರಹಿತ ಕ್ರಮಗಳಿಂದಾಗಿ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲದಂತಾಗಿದೆ.
ಜಲ ಸಂಪನ್ಮೂಲ ಇಲಾಖೆಯಡಿ ಮಂದಗತಿಯಲ್ಲಿ ಸಾಗುತ್ತಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗುತ್ತದೆ. ಜೊತೆಗೆ ಪ್ರಸಕ್ತ ಸಾಲಿನಲ್ಲಿ 940 ಕೋಟಿ ರೂಪಾಯಿ ಬಾಕಿ ಮೊತ್ತದ 10 ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ, ಸುಮಾರು 25,948 ಹೆಕ್ಟೇರ್ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗುವುದು.
ಪ್ರಸಕ್ತ ಸಾಲಿನಲ್ಲಿ ಕುಲಹಳ್ಳಿ-ಹನ್ನೂರು, ತಿಮ್ಮಾಪುರ, ಸಸಾಲಟ್ಟಿ-ಶಿವಲಿಂಗೇಶ್ವರ ಮತ್ತು ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಸುಮಾರು 39,134 ಹೆಕ್ಟೇರ್ ಅಚ್ಚುಕಟ್ಟು ಸ್ಥಿರೀಕರಣ ಮಾಡಲಾಗುವುದು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ











Click it and Unblock the Notifications