Karnataka Budget 2024; 3 ಲಕ್ಷಗಳ ಮನೆಗಳ ನಿರ್ಮಾಣದ ಗುರಿ
ಬೆಂಗಳೂರು, ಫೆಬ್ರವರಿ 16; ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಬಜೆಟ್ ಭಾಷಣದಲ್ಲಿ ಅವರು 2024-25ನೇ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದರು.
ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ, 'ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ' ಎಂದು ಘೋಷಣೆ ಮಾಡಿದರು. ನಮ್ಮ ಹಿಂದಿನ ಅವಧಿಯಲ್ಲಿ 14.54 ಲಕ್ಷ ಮನೆಗಳನ್ನು ನಿರ್ಮಿಸಲಾಗಿತ್ತು. 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ ಎಂದರು.

ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದ್ದು, 2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆಯನ್ನು ನಡೆಸಲಾಗುವುದು ಎಂದರು.
ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಎ.ಎಚ್.ಪಿ.) ಅಡಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಫಲಾನುಭವಿಗಳು ಬಡ ಕುಟುಂಬದವರಾಗಿದ್ದು, ತಮ್ಮ ಪಾಲಿನ ವಂತಿಗೆಯಾದ ಐದು ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೇ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು ತೀರ್ಮಾನಿಸಿದೆ. ಅದರಂತೆ ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಘೋಷಿಸಿದರು.
ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ. Asset Monetisation, ವಸತಿ ಸೆಸ್ ಮತ್ತು ವಿವಿಧ ಶಾಸನ ಬದ್ಧ ಶುಲ್ಕಗಳನ್ನು ವಿಧಿಸುವ ಮೂಲಕ ಸಂಪನ್ಮೂಲ ಕ್ರೊಢೀಕರಿಸಿ Karnataka Affordable Housing Fund ಅನ್ನು (KAHF) ಸ್ಥಾಪಿಸಲಾಗುವುದು ಎಂದರು.
ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್ ದರ ಪರಿಷ್ಕರಣೆ ಮಾಡುವುದು. ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲಾಗುವುದು. ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು ರಿಯಲ್ ಎಸ್ಟೇಟ್ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. 2023-24 ನೇ ಸಾಲಿನಲ್ಲಿ ಡೆವಲಪರ್‌ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.












Click it and Unblock the Notifications