Karnataka Budget 2024: ಬೆಂಗಳೂರಿಗೆ ಸಿದ್ದರಾಮಯ್ಯ ಭರ್ಜರಿ ಕೊಡುಗೆ; ಟನಲ್ ರೋಡ್, ಮೆಟ್ರೋ ಹೊಸ ಮಾರ್ಗ ಘೋಷಣೆ
ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 15 ನೇ ಬಜೆಟ್‌ನಲ್ಲಿ ರಾಜಧಾನಿ ಬೆಂಗಳೂರಿಗೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ಬ್ರಾಂಡ್ ಬೆಂಗಳೂರು ಪರಿಕಲ್ಪನೆ ಜಾರಿಗೊಳಿಸಿದ್ದು, ಬೆಂಗಳೂರಿಗೆ ಭರ್ಜರಿ ಕೊಡುಗೆಯನ್ನ ನೀಡಿದ್ದಾರೆ.
ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ಗಣನೀಯ ಸುಧಾರಣೆಗಳನ್ನು ತರಲು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ.

ಬಿ.ಬಿ.ಎಂ.ಪಿ ಯಲ್ಲಿ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲಗಳನ್ನು ಕ್ರೊಢೀಕರಿಸಲು ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳಲಿದೆ. 2023-24ನೇ ಸಾಲಿನಲ್ಲಿ 4,300 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಮುಖಾಂತರ ದಾಖಲೆಯ ತೆರಿಗೆ ಸಂಗ್ರಹ ಮಾಡುವತ್ತ ಮುನ್ನಡೆದಿದೆ. ಇದು 2022-23ನೇ ಸಾಲಿಗಿಂತ 1,000 ಕೋಟಿ ರೂ. ಗಳಷ್ಟು ಹೆಚ್ಚಾಗಿದೆ. 2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ ನಿರೀಕ್ಷೆ ಇದೆ.
ಪ್ರಸಕ್ತ ಸಾಲಿನಿಂದ ಪರಿಷ್ಕೃತ ಜಾಹೀರಾತು ನೀತಿ ಮತ್ತು Premium FAR ನೀತಿಯನ್ನು ಜಾರಿಗೆ ತರುವ ಮೂಲಕ ಹೆಚ್ಚುವರಿಯಾಗಿ 2,000 ಕೋಟಿ ರೂ.ಗಳಷ್ಟು ತೆರಿಗೆಯೇತರ ಸಂಪನ್ಮೂಲ ಸಂಗ್ರಹಿಸುವ ಗುರಿ ಹೊಂದಲಾಗಿದೆ.
ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ 2024-25ನೇ ಸಾಲಿನಿಂದ ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳನ್ನು ದೊರಕಿಸಲಾಗುವುದು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿಗಳನ್ನು 1,700 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಲಾಗಿದೆ. ಈ ಕಾಮಗಾರಿಗಳನ್ನು ಡಿಸೆಂಬರ್ 2025 ರೊಳಗೆ ಪೂರ್ಣಗೊಳಿಸಲಾಗುವುದು.ಭೂಮಿಯ ಅಲಭ್ಯತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳ ಕಾರಣ ಅಸ್ತಿತ್ವದಲ್ಲಿರುವ ರಸ್ತೆಗಳ ವಿಸ್ತರಣೆಯು ಅತ್ಯಂತ ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧರಿಸಿದೆ. ಈ ವರ್ಷ ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ಅನ್ನು ನಿರ್ಮಿಸಲಾಗುವುದು.
ನಾಲಾ ಬಫರ್ ವಲಯದೊಳಗೆ ನಾಲಾ ಬಫರ್ ಅನ್ನು ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಿಸುವ ಹೊಸ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಈಗಾಗಲೇ 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು.

ಸುಗಮ ಸಂಚಾರ-ಬ್ರಾಂಡ್ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿಕೊಳ್ಳಲಾಗಿದೆ. ಈ ಸಂಸ್ಥೆಯು ನೀಡುವ ವರದಿಯನ್ನು ಆಧರಿಸಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದರ ಜೊತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗುವಂತೆ ಪೆರಿಫೆರಲ್ ರಿಂಗ್ ರೋಡ್ ಅನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಯಿಸಲು ಉದ್ದೇಶಿಸಲಾಗಿದೆ.
ಈ ಯೋಜನೆಯಡಿ 73 ಕಿ.ಮೀ. ಉದ್ದದ ರಸ್ತೆಯನ್ನು 27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲು RFP ಕರೆಯಲಾಗಿದೆ. ಈ ಯೋಜನೆಯನ್ನು ಇದೇ ಸಾಲಿನಲ್ಲಿ ಪ್ರಾರಂಭ ಮಾಡಲು ಉದ್ದೇಶಿಸಿದೆ. ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸ್ಕೈ-ಡೆಕ್ (Sky-Deck) ನಿರ್ಮಾಣಕ್ಕಾಗಿ ನೂತನ ಪರಿಕಲ್ಪನೆ ಒದಗಿಸುವಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ವಾಸ್ತುವಿನ್ಯಾಸಗಾರರನ್ನು ಆಹ್ವಾನಿಸಿದೆ. ಇದರಿಂದ ನಗರದ ಒಳಗೆ ಆಕರ್ಷಕವಾದ ಪ್ರವಾಸಿ ತಾಣವನ್ನು ಸೃಜಿಸಿದಂತಾಗುತ್ತದೆ.
ನಗರಾಭಿವೃದ್ಧಿ ಇಲಾಖೆಯ ಅಂಗಸಂಸ್ಥೆಗಳಾದ BBMP, BMRCL, BWSSB, BDA ಗಳ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್ ಅನ್ನು Captive/Group Captive ಮೂಲಕ ಸ್ಥಾಪಿಸಲಾಗುವುದು.
ಆಸ್ತಿ ತೆರಿಗೆ ಮತ್ತು ಇನ್ನಿತರೆ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟಲು 3ಡಿ ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್ ಮತ್ತು ಮರು ಮೌಲ್ಯಮಾಪನವನ್ನು ಕೈಗೊಳ್ಳಲಾಗುವುದು. ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲು ಮಾಡಲು, ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸೇವೆಯನ್ನು ಪಡೆಯಲಾಗುವುದು.












Click it and Unblock the Notifications