Karnataka By-election 2024: ಸಂಡೂರು, ಶಿಗ್ಗಾವಿ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ
Karnataka By-election 2024: ಈಗಾಗಲೇ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗೊದೆ. ಇದೀಗ ಈ ಪೈಕಿ ಸಂಡೂರು & ಶಿಗ್ಗಾವಿ ಕ್ಷೇತ್ರಗಳಿಗೆ ಬಿಜೆಪಿ ಅಭ್ಯೃರ್ಥಿಗಳನ್ನು ಘೋಷಣೆ ಮಾಡಿದೆ. ಹಾಗಾದರೆ ಯಾರನ್ನು ಯಾವ ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಉಪಚುನಾವಣೆ ಹಿನ್ನೆಲೆ ಬಿಜೆಪಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದು, ಶಿಗ್ಗಾವಿಯಿಂದ ಭರತ್ ಬೊಮ್ಮಾಯಿ ಅವರನ್ನು ಹಾಗೂ ಬಂಗಾರು ಹನುಮಂತುಗೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ. ಆದರೆ, ಚನ್ನಪಟ್ಟಣಕ್ಕೆ ಅಭ್ಯರ್ಥಿ ಹೆಸರನ್ನು ಇನ್ನೂ ಘೋಷಣೆ ಆಗಿಲ್ಲ. ಇನ್ನು ರಾಜ್ಯದ ಈ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ನವೆಂಬರ್ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ, ಈ ತುಕಾರಾಂ ರಾಜೀನಾಮೆಯಿಂದ ಸಂಡೂರು ಕ್ಷೇತ್ರ ತೆರವಾಗಿತ್ತು. ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕರಾಗಿದ್ದರು. ಅವರು ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ಆ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಆದರೆ, ಟಿಕೆಟ್ ಯಾರಿಗೆ ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ, ಇದೀಗ ಅವರ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದೆ. ಇನ್ನು ಬಿಜೆಪಿಯು ಬೊಮ್ಮಾಯಿ ಮಗನಿಗೆ ಟಿಕೆಟ್ ನೀಡಿ ಕುಟುಂಬ ರಾಜಕೀಯಕ್ಕೆ ಮತ್ತೆ ಮಣೆ ಹಾಕಿದೆ.
ಟಿಕೆಟ್ ವಿಚಾರವಾಗಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರುಗಳನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದು, ಅದಕ್ಕೂ ಮೊದಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬಳಿಕ ಶನಿವಾರ ದೆಹಲಿಯಲ್ಲಿ ಚರ್ಚೆ ನಡೆಸಿದ್ದ ಬಸವರಾಜ ಬೊಮ್ಮಾಯಿ ಅವರು ಭರತ್ ಬೊಮ್ಮಾಯಿಗೆ ಟಿಕೆಟ್ ಬೇಡವೆಂಬ ಅರ್ಥದಲ್ಲೇ ಹೇಳಿಕೆ ನೀಡಿದ್ದರು. ಆದರೆ ಇದೀಗ ಅವರಿಗೆ ಟಿಕೆಟ್ ನೀಡಲಾಗಿದೆ.












Click it and Unblock the Notifications