Karnataka By-Election: ಆರಂಭಿಕ ಹಂತದಲ್ಲಿ ಸಂಡೂರು ಅನ್ನಪೂರ್ಣ, ಚನ್ನಪಟ್ಟಣ ನಿಖಿಲ್ ಮುನ್ನಡೆ
ಕರ್ನಾಟಕದ ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಮೂರು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದೆ. ರಾಮನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದೆ. ಒಟ್ಟು 20 ಸುತ್ತಿನಲ್ಲಿ ಮತ ಎಣಿಕೆ ಕಾರ್ಯ ಕಾಲೇಜಿನ 3 ಹಾಲ್ನಲ್ಲಿ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವೆ ತೀವ್ರ ಜಿದ್ದಾಜಿದ್ದಿ ನಡೆದಿದ್ದು ಚನ್ನಪಟ್ಟಣ ಕ್ಷೇತ್ರದಲ್ಲಿ ಶೇಕಡಾ 88.81ರಷ್ಟು ಮತದಾನವಾಗಿತ್ತು. ಇನ್ನೂ ಇಂದು ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ಚನ್ನಪಟ್ಟಣ ನಿಖಿಲ್ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ.
ರಾಮನಗರದಲ್ಲಿ ಫಲಿತಾಂಶ ಹಿನ್ನೆಲೆಯಲ್ಲಿ ಇಡೀ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಭಾನುವಾರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಿಷೇಧಾಜ್ಞೆ ವೇಳೆ ಬಹಿರಂಗ ಸಭೆ, ಸಾರ್ವಜನಿಕ ಭಾಷಣ, ಸಂಭ್ರಮಾಚರಣೆ ಮಾಡದಂತೆ ರಾಮನಗರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಆದೇಶ ಹೊರಡಿಸಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಈ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರ ಹನುಮಂತು, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಎನ್. ಅಂಜಿನಪ್ಪ ಮತ್ತು ಪಕ್ಷೇತರ ಅಭ್ಯರ್ಥಿಗಳಾಗಿ ಟಿ.ಎಂ. ಮಾರುತಿ, ಟಿ. ಎರಿಸ್ವಾಮಿ, ಎನ್. ವೆಂಕಣ್ಣ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸಂಡೂರಿನಲ್ಲಿ ಮತ ಎಣಿಕೆ ಆರಂಭವಾಗಿದ್ದು ಸಂಜೆ ವೇಳೆಗೆ ಸ್ಪಷ್ಟ ಫಲಿತಾಂಶ ಹೊರಬೀಳಲಿದೆ.
ಆರಂಭಿಕ ಹಂತದಲ್ಲಿ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಹಂತದಲ್ಲಿ ಎನ್‌ಡಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹಿನ್ನಡೆ ಕಾಯ್ದುಕೊಂಡಿದ್ದಾರೆ. ಚನ್ನಪಟ್ಟಣದಲ್ಲಿ ಮತ ಎಣಿಕೆ ಆರಂಭವಾಗಿದ್ದು ಸಂಜೆ ವೇಳೆಗೆ ಸ್ಪಷ್ಟ ಫಲಿತಾಂಶ ಹೊರಬೀಳಲಿದೆ.
ಶಿಗ್ಗಾಂವಿ: ಭರತ್ ಬೊಮ್ಮಾಯಿ ಮುನ್ನಡೆ
ಶಿಗ್ಗಾಂವಿಯಲ್ಲಿ ಇವಿಎಂ ಮತ ಎಣಿಕೆ ಆರಂಭವಾಗಿದ್ದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಮುನ್ನಡೆ ಸಾಧಿಸಿದ್ದಾರೆ. ಮತಗಟ್ಟೆಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು ಸಂಜೆ ವೇಳೆಗೆ ಫಲಿತಾಂಶ ಹೊರಬೀಳಲಿದೆ.
ಬೆಳಿಗ್ಗೆ 10 ಗಂಟೆ 8ನೇ ಸುತ್ತಿನ ಮತ ಎಣಿಕೆಯಲ್ಲಿ ಭರ್ಜರಿ ಸಿಪಿ ಯೋಗೇಶ್ವರ್ ಮುನ್ನಡೆ
ಬೆಳಿಗ್ಗೆ 10 ಗಂಟೆ 8ನೇ ಸುತ್ತಿನ ಮತ ಎಣಿಕೆಯಲ್ಲಿ ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬರೋಬ್ಬರಿ 11,178 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಮುನ್ನಡೆ ಸಾಧಿಸಿದ್ದಾರೆ. ಇದು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಬಿಗ್ ಶಾಕ್ ಕೊಟ್ಟಿದೆ. ಆರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಕಾಯ್ದುಕೊಂಡಿದ್ದರು. ಬಳಿಕ ಹಾವು ಏಣಿ ಆಟ ಜೋರಾಗಿತ್ತು. ಇದೀಗ ಸಿಪಿ ಯೋಗೇಶ್ವರ್ ಭರ್ಜರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು ಚನ್ನಪಟ್ಟಣ ಅಖಾಡ ಭಾರೀ ಕುತೂಹಲ ಮೂಡಿಸಿದೆ.












Click it and Unblock the Notifications