Karnataka Cabinet Expansion: ಬ್ರಾಹ್ಮಣ, ಮಹಿಳೆಯರನ್ನು ಸೇರಿಸಿಕೊಳ್ಳದ ಡಿಕೆ ಶಿವಕುಮಾರ್, ಅಹಿಂದ ಶಾಸಕರಿಗೆ ಮಣೆ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ರಚನೆಯಾದ ಬಳಿಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಚರ್ಚೆ ಆರಂಭವಾಗಿದೆ. ಆಗಸ್ಟ್ 3 ರಂದು ರಾಜ್ಯಪಾಲರ ಸಮ್ಮುಖದಲ್ಲಿ 19 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಈ ಬಾರಿ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯದ ಯಾವುದೇ ಶಾಸಕರಿಗೆ ಸಚಿವ ಸ್ಥಾನ ದೊರಕಿಲ್ಲ ಎಂಬ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯದ ಯಾವುದೇ ಶಾಸಕರು ಸಚಿವರಾಗಿಲ್ಲ. ಈ ಮೂಲಕ ಬ್ರಾಹ್ಮಣ ಸಮುದಾಯಕ್ಕೆ ಪ್ರಾತಿನಿಧ್ಯ ಇಲ್ಲದಂತಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವಧಿಯಲ್ಲಿ ದಿನೇಶ್ ಗುಂಡೂರಾವ್ ಆರೋಗ್ಯ ಸಚಿವರಾಗಿದ್ದರು. ಆದರೆ, 30 ವರ್ಷಗಳ ಬಳಿಕ ಮೊದಲ ಬಾರಿಗೆ ಕರ್ನಾಟಕ ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಪ್ರಾತಿನಿಧ್ಯ ಇಲ್ಲದಂತಾಗಿದೆ.

1996ರ ನಂತರ ರಚನೆಯಾದ ಪ್ರತಿಯೊಂದು ರಾಜ್ಯ ಸಚಿವ ಸಂಪುಟದಲ್ಲಿಯೂ ಕನಿಷ್ಠ ಒಬ್ಬ ಬ್ರಾಹ್ಮಣ ಸಮುದಾಯದ ಸಚಿವರಿಗೆ ಸ್ಥಾನ ಸಿಕ್ಕಿತ್ತು. ಸಿದ್ದರಾಮಯ್ಯ ಸಂಪುಟದಲ್ಲಿಯೂ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನವನ್ನ ನೀಡಲಾಗಿತ್ತು. ಆದರೆ ಈ ಬಾರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯದ ಶಾಸಕರಿಗೆ ಮಂತ್ರಿ ಭಾಗ್ಯದ ಅವಕಾಶವನ್ನ ನೀಡಿಲ್ಲ.
ಕಾಂಗ್ರೆಸ್‌ನ ಪ್ರಮುಖ ಬ್ರಾಹ್ಮಣ ನಾಯಕರಾದ ಆರ್.ವಿ. ದೇಶಪಾಂಡೆ ಮತ್ತು ದಿನೇಶ್ ಗುಂಡೂರಾವ್ ಅವರಿಗೆ ಈ ಬಾರಿ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ಹಳಿಯಾಳ ಕ್ಷೇತ್ರದ ಸತತ ಒಂಬತ್ತು ಬಾರಿ ಶಾಸಕರಾಗಿರುವ ಆರ್.ವಿ. ದೇಶಪಾಂಡೆ ಅವರು ರಾಜ್ಯದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರು. ಕೈಗಾರಿಕಾ ಸಚಿವರಾಗಿ ಅತಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ್ದಾರೆ.
1994ರಿಂದ 2004ರವರೆಗೆ ಎಚ್.ಡಿ. ದೇವೇಗೌಡ, ಜೆ.ಎಚ್. ಪಟೇಲ್ ಹಾಗೂ ಎಸ್.ಎಂ. ಕೃಷ್ಣ ಅವರ ಸರ್ಕಾರಗಳಲ್ಲಿ ನಿರಂತರವಾಗಿ ಸಚಿವರಾಗಿದ್ದರು. ಬಳಿಕ 2015ರಿಂದ 2018ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿಯೂ ಸಚಿವರಾಗಿದ್ದರು. ಆದರೆ ಪ್ರಸ್ತುತ ವಿಧಾನಸಭಾ ಅವಧಿಯಲ್ಲಿ ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಅವರಿಗೆ ಅವಕಾಶ ದೊರೆತಿಲ್ಲ. ಹಲವು ಬಾರಿ ಸಚಿವರಾಗಿದ್ದ ಹಿರಿಯ ನಾಯಕರನ್ನು ಈ ಬಾರಿ ಸಂಪುಟಕ್ಕೆ ಸೇರಿಸದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದೆಡೆ, ಬೆಂಗಳೂರಿನ ಗಾಂಧಿನಗರ ಕ್ಷೇತ್ರದ ಆರು ಬಾರಿ ಶಾಸಕರಾಗಿರುವ ಹಾಗೂ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪುತ್ರ ದಿನೇಶ್ ಗುಂಡೂರಾವ್ ಅವರಿಗೂ ಸಚಿವ ಸ್ಥಾನ ಕೈತಪ್ಪಿದೆ. ಅವರು ಸಿದ್ದರಾಮಯ್ಯ ಅವರ ಮೊದಲ ಹಾಗೂ ಎರಡನೇ ಸಚಿವ ಸಂಪುಟಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, 2018ರಿಂದ 2020ರವರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಆದರೆ ಈ ಬಾರಿ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ದಿನೇಶ್ ಗುಂಡೂರಾವ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ಆ ನಿರೀಕ್ಷೆ ಹುಸಿಯಾಗಿದೆ.
ಸುಮಾರು ಮೂರು ದಶಕಗಳ ಬಳಿಕ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಪ್ರಾತಿನಿಧ್ಯ ಇಲ್ಲದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಹಿಂದಿನ ಹಲವು ಸರ್ಕಾರಗಳಲ್ಲಿ ಕನಿಷ್ಠ ಒಬ್ಬ ಬ್ರಾಹ್ಮಣ ಸಮುದಾಯದ ನಾಯಕ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ನ ಹಿರಿಯ ನಾಯಕರಾದ ಆರ್.ವಿ. ದೇಶಪಾಂಡೆ ಹಾಗೂ ದಿನೇಶ್ ಗುಂಡೂರಾವ್ ಅವರಿಗೂ ಅವಕಾಶ ದೊರಕಿಲ್ಲ.
ಇನ್ನೊಂದೆಡೆ, ಮಹಿಳಾ ಶಾಸಕರಿಗೂ ಸಚಿವ ಸ್ಥಾನ ಸಿಗದಿರುವುದು ಮಹಿಳಾ ಪ್ರತಿನಿಧಿತ್ವದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಿದ್ದರಾಮಯ್ಯ ಸಂಪುಟದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮಂತ್ರಿ ಸ್ಥಾನವನ್ನ ನೀಡಲಾಗಿತ್ತು. ಆ ಭಾರಿ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆ ಇತ್ತು. ಗಾಯತ್ರಿ ಶಾಂತೇಗೌಡ ಅವರಿಗೆ ಮಂತ್ರಿ ಭಾಗ್ಯ ದೊರಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಪ್ರಮಾಣ ವಚನ ಸ್ವೀಕರಿಸದಂತೆ ಸೂಚನೆ ನೀಡಲಾಗಿತ್ತು. ಹೀಗಾಗಿ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಒಬ್ಬ ಮಹಿಳೆಗೂ ಸಚಿವ ಸ್ಥಾನದ ಅವಕಾಶ ದೊರೆತಿಲ್ಲ.
ಡಿ ಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತರು) ಸಮುದಾಯಗಳಿಗೆ ಹೆಚ್ಚಿನ ಪ್ರಾತಿನಿಧ್ಯ ದೊರೆತಿರುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ತನ್ನ ಸಾಮಾಜಿಕ ನ್ಯಾಯದ ರಾಜಕೀಯ ಧೋರಣೆಗೆ ಅನುಗುಣವಾಗಿ ಅಹಿಂದ ವರ್ಗಗಳಿಗೆ ಆದ್ಯತೆ ನೀಡಿದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದಾರೆ. ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಮೂವರು ಮುಸ್ಲಿಂ ನಾಯಕರಿಗೆ ಮಂತ್ರಿ ಸ್ಥಾನ ದೊರಕಿದ್ದು, ಅದರಲ್ಲಿ ಬೆಂಗಳೂರಿನ ಇಬ್ಬರು ಮುಸ್ಲಿಂ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ.
ಇದೇ ವೇಳೆ, ಪಕ್ಷದ ಮೂಲಗಳ ಪ್ರಕಾರ ಸಚಿವ ಸ್ಥಾನ ಹಂಚಿಕೆಯಲ್ಲಿ ಸಾಮಾಜಿಕ ಸಮತೋಲನ, ಪ್ರಾದೇಶಿಕ ಸಮೀಕರಣ, ಆಡಳಿತದ ಅನುಭವ ಹಾಗೂ ಪಕ್ಷದ ಸಂಘಟನಾ ಕೆಲಸ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಲಾಗಿದೆ. ಹಿರಿಯ ನಾಯಕರಿಗೆ ಅವಕಾಶ ನೀಡದೇ ಹೊಸ ಮುಖಗಳಿಗೆ ಆದ್ಯತೆ ನೀಡುವ ನಿರ್ಧಾರವೂ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.


Click it and Unblock the Notifications
