ರಾಜ್ಯದ 195 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಿದೆ ಸಿದ್ದರಾಮಯ್ಯ ಸರ್ಕಾರ- ಮಾಹಿತಿ, ವಿವರ ತಿಳಿಯಿರಿ
ಬೆಂಗಳೂರು, ಸೆಪ್ಟೆಂಬರ್ 13: ರಾಜ್ಯದಲ್ಲಿ ಬರ ಪರಿಸ್ಥಿತಿ ಅವಲೋಕಿಸಲು ರಚಿಸಲಾಗಿದ್ದ ಸಚಿವ ಸಂಪುಟ ಉಪಸಮಿತಿಯು 195 ತಾಲೂಕುಗಳನ್ನು ಬರಪೀಡಿತವೆಂದು ಪರಿಗಣಿಸಿದೆ. ಇದನ್ನು ಸರಕಾರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಈ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರದಲ್ಲೇ ಒಪ್ಪಿಗೆ ನೀಡುವ ನಿರೀಕ್ಷೆಯಿದೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.

ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಶಿಫಾರಸು ಮಾಡಿ ಸಿಎಂಗೆ ಪ್ರಸ್ತಾವನೆ ಕಳುಹಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
'ಹಲವು ತಾಲ್ಲೂಕುಗಳಲ್ಲಿ ಬೆಳೆಗಳ ಸಮೀಕ್ಷೆಯ ನಂತರ ನಮಗೆ ವರದಿ ಬಂದಿದೆ. 161 ತಾಲೂಕುಗಳಲ್ಲಿ ಭೀಕರ ಬರ ಪರಿಸ್ಥಿತಿಯಿದ್ದು, ಇನ್ನು 34 ತಾಲೂಕುಗಳಲ್ಲಿ ಸಾಧಾರಣ ಬರವಿದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆಯಿದ್ದರೂ ತೇವಾಂಶದ ಕೊರತೆ ಇಲ್ಲ. 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಶಿಫಾರಸು ಮಾಡಲು ನಿರ್ಧರಿಸಿದ್ದೇವೆ. ಈ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಶೀಘ್ರವೇ ಅನುಮೋದನೆ ನೀಡುವ ಸಾಧ್ಯತೆ ಇದೆ' ಎಂದು ಸಚಿವರು ತಿಳಿಸಿದ್ದಾರೆ.
ಜುಲೈ ಹೊರತುಪಡಿಸಿ ಕರ್ನಾಟಕವು ಈ ವರ್ಷ ತೀವ್ರ ಮಳೆ ಕೊರತೆಯನ್ನು ಎದುರಿಸಿದೆ. ಇದರಿಂದಾಗಿ ಹಲವಾರು ಜಲಾಶಯಗಳು ಇನ್ನೂ ಗರಿಷ್ಠ ಮಟ್ಟವನ್ನು ತಲುಪಿಲ್ಲ ಎಂದು ಅವರು ಹೇಳಿದ್ದಾರೆ.
'ನಾವು ಬರ ಪರಿಸ್ಥಿತಿ ಎದುರಿಸಲು ಸಿದ್ಧರಿದ್ದೇವೆ. ಎಲ್ಲಾ ಬರಪೀಡಿತ ಪ್ರದೇಶಗಳಲ್ಲಿ ಕಾರ್ಯಪಡೆ ರಚಿಸಲು ನಿರ್ಧರಿಸಿದ್ದೇವೆ. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಾವು ಗರಿಷ್ಠ ಉದ್ಯೋಗಗಳನ್ನು ನೀಡಲು ಯೋಜಿಸುತ್ತಿದ್ದೇವೆ' ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಶೇ 40ರಷ್ಟು ಮಳೆ ಕೊರತೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡಿನಲ್ಲೂ ಮಳೆ ಕೊರತೆಯಾಗಿದೆ. 40 ತಾಲೂಕುಗಳ ವರದಿಗಾಗಿ ಕಾಯಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಶಿಫಾರಸುಗಳಿಗೆ ಸಿಎಂ ಸಿದ್ದರಾಮಯ್ಯನವರು ಸಹಿ ಹಾಕಿದ ನಂತರ ಅಧಿಸೂಚನೆ ಹೊರಡಿಸಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಬರ ಘೋಷಣೆ ಮಾಡಿ ರೈತರಿಗೆ ಪರಿಹಾರ ನೀಡಬೇಕೆಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದ ಮೇಲೆ ಒತ್ತಡ ಹೇರಿದ್ದವು.












Click it and Unblock the Notifications