ಕರ್ನಾಟಕ ಜನರ ಸಮಸ್ಯೆಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಂದನೆ: ಈ ಜಿಲ್ಲೆಗಳ ಸಮಸ್ಯೆಗಳಿಗೆ ಸಿಕ್ಕಿತಾ ಪರಿಹಾರ!
ಬೆಂಗಳೂರು ಫೆಬ್ರವರಿ 18: ಕರ್ನಾಟಕ ಮುಖ್ಯಮಂತ್ರಿಗಳು ಜನರ ಕುಂದು ಕೊರತೆ ಆಲಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಮೂಲಭೂತ ಸಮಸ್ಯೆಗಳನ್ನು ಜನರು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಕುಂದುಕೊರತೆ ಆಲಿಸಿರುವ ಸಿದ್ದರಾಮಯ್ಯ ಅವರು, ನಿಮಗೆ ಪರಿಹಾರ ಒದಗಿಸಲು ಸದಾ ಸಿದ್ಧ ಎಂದು ತಿಳಿಸಿದ್ದಾರೆ. ಜೊತೆಗೆ ಈ ಕೆಳಗಿನ ಜಿಲ್ಲೆಗಲ್ಲಿ ಉಂಟಾಗಿದ್ದ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಇಲಾಖೆ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಾಗಲಕೋಟೆ, ಬಳ್ಳಾರಿ, ಚಾಮರಾಜನಗರ ಜಿಲ್ಲೆ ಹೀಗೆ ರಾಜ್ಯದ ವಿವಿಧ ಜನರ ಸಮಸ್ಯೆಗಳಿಗೆ ಸಿಎಂ ಧ್ವನಿಯಾಗಿದ್ದಾರೆ. ಕೆಲವೆಡೆ ಸಮಸ್ಯೆಗಳ ಮೇಲೆ ಮಾಧ್ಯಮಗಳ ಬೆಳಕು ಚೆಲ್ಲಿದ್ದು, ಅವನ್ನು ಗಮನಿಸಿ ಪರಿಹಾರ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಚಾಮರಾಜನಗರ ನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆಯ ನಿರ್ಮಾಣ ವಿಳಂಬವಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕಿನ ಇದೇ ಭಾಗದಲ್ಲಿ ಈಗಾಗಲೇ ನಿರ್ಮಿತಿ ಕೇಂದ್ರದ ವತಿಯಿಂದ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗಿದೆ. ಕಾಮಗಾರಿಯು ಪೂರ್ಣಗೊಂಡಿರುತ್ತದೆ ಎಂದು ಯಳಂದೂರು ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಿಎಂ ವಿಶೇಷ ಕರ್ತವ್ಯಾಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಶಾಲಾ ಕಟ್ಟಡ ದುರಸ್ತಿಗೆ ಕ್ರಮ
ಬಳ್ಳಾರಿಯ ಕುರುಗೋಡು ಪಟ್ಟಣದ ಹರಿಕೃಪ ಕಾಲೋನಿಯಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ತಿ ಆಗಿಲ್ಲವೆಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ.
ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಕಾಲೇಜು ಕಟ್ಟಡದ ಕೊಠಡಿಗಳಿಗೆ ಮಕ್ಕಳನ್ನು ಕೂಡಲೇ ಸ್ಥಳಾಂತರಗೊಳಿಸಲಾಗುತ್ತಿದೆ. ಶೈಕ್ಷಣಿಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಉಳಿದಂತೆ ಮಾನ್ಯ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ಕಟ್ಟಡ ದುರಸ್ತಿಗೆ ಹಣ ಬಿಡುಗಡೆ ಮಾಡಲಾಗಿದೆ. ದುರಸ್ತಿ ಕಾರ್ಯವು ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಕುರುಗೋಡು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಬಿಡಾಡಿ ದನಗಳ ಹಾವಳಿ
ಬಾಗಲಕೋಟೆ ಜಿಲ್ಲೆಯ ಅಮೀನಗಡ ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಆತಂಕದಲ್ಲಿ ಸಂಚರಿಸುವಂತಾಗಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಸದ್ಯ ರಸ್ತೆ ಸೇರಿದಂತೆ ರಾಜ್ಯದ ಹೆದ್ದಾರಿಯಲ್ಲೆಲ್ಲ ದನಗಳನ್ನು ಬಿಡದಂತೆ ಮಾಲೀಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ದನಗಳನ್ನು ತಮ್ಮ ವಶಕ್ಕೆ ಪಡೆದುಕೊಳ್ಳಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಬಿಡಾಡಿ ದನಗಳನ್ನು ಗೋಶಾಲೆಗೆ ಕಳುಹಿಸಲಾಗುವುದು ಎಂದು ಅಮೀನಗಡ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
ನೀವು ಯಾವುದೇ ಜಿಲ್ಲೆಯವರಾದರೂ ಸಹ ನಿಮ್ಮ ಜಿಲ್ಲೆ, ತಾಲೂಕು, ಭಾಗದ ಸ್ಥಳೀಯ ಸಮಸ್ಯೆಗಳನ್ನು ಸರ್ಕಾರ/ಮುಖ್ಯಮಂತ್ರಿ ಗಮನಕ್ಕೆ ತರಲು ಸಾಮಾಜಿಕ ಜಾಲತಾಣದಲ್ಲಿ @osd_cmkarnataka 'X' ಖಾತೆಗೆ ಟ್ಯಾಗ್ ಮಾಡಿ.












Click it and Unblock the Notifications