8 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಪೆಂಡಿಂಗ್: ಇಂದೇ 5ನೇ ಪಟ್ಟಿ ಘೋಷಣೆ ಸಾಧ್ಯತೆ
ಬೆಂಗಳೂರು ಏಪ್ರಿಲ್ 18: ರಾಜ್ಯ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಅಂತಿಮ ದಿನವಾಗಿದ್ದು, ಕಾಂಗ್ರೆಸ್ ಇನ್ನು 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲು ಬಾಕಿ ಉಳಿಸಿಕೊಂಡಿದೆ. ಇಂದೇ ಬಾಕಿ ಇರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆ ಕೂಡ ಇದೆ.
ಕರ್ನಾಟಕದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ ಮಾಡಿದೆ. ಇಂದು 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯನ್ನು ಕಾಂಗ್ರೆಸ್ ಮಾಡಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್ ಅವರಿಗೆ ನಿರೀಕ್ಷೆಯಂತೆ ಟಿಕೆಟ್ ನೀಡಿದೆ. ಹರಿಹರ ಕ್ಷೇತ್ರಕ್ಕೆ ನಂದಿಗಾವಿ ಶ್ರೀನಿವಾಸ್, ಶ್ರವಣಬೆಳಗೊಳದಲ್ಲಿ ಎಂ. ಎಸ್. ಗೋಪಾಲಸ್ವಾಮಿ, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರಕ್ಕೆ ದೀಪಕ್ ಚಿಂಚೋರೆ, ಚಿಕ್ಕಮಗಳೂರು ಕ್ಷೇತ್ರ ಹೆಚ್. ಡಿ. ತಮ್ಮಯ್ಯ, ಲಿಂಗಸಗೂರು ಕ್ಷೇತ್ರಕ್ಕೆ ದುರ್ಗಪ್ಪ ಎಸ್. ಹೂಲಗೇರಿ ಹಾಗೂ ಶಿಗ್ಗಾಂವಿಯಿಂದ ಸ್ಪರ್ಧಿಸಲು ಮೊಹಮ್ಮದ್ ಯೂಸೂಫ್ ಅವರಿಗೆ ಟಿಕೆಟ್ ನೀಡಿದೆ.

ಒಟ್ಟು 224 ಕ್ಷೇತ್ರಗಳಲ್ಲಿ 223 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಉದ್ದೇಶಿಸಿರುವ ಕಾಂಗ್ರೆಸ್ ಇನ್ನು 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲು ಬಾಕಿ ಉಳಿಸಿಕೊಂಡಿದೆ. ಪುಲಕೇಶಿ ನಗರ, ಸಿವಿ ರಾಮನ್ ನಗರ, ಮುಳಬಾಗಿಲು, ರಾಯಚೂರು ನಗರ, ಅರಕಲಗೂಡು, ಮಂಗಳೂರು ಉತ್ತರ, ಶಿಡ್ಲಘಟ್ಟ, ಕೆ ಆರ್ ಪುರಂ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಬಾಕಿ ಇದ್ದು, ಇಂದೇ (ಏಪ್ರಿಲ್ 18) ಅಂತಿಮ ಪಟ್ಟಿಯನ್ನು ಘೋಷಿಸುವ ಸಾಧ್ಯತೆಗಳಿವೆ.
ಮಾರ್ಚ್ 25ರಂದು ಕಾಂಗ್ರೆಸ್ 124 ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಘೋಷಣೆ ಮಾಡಿತ್ತು. ಇನ್ನು ಏಪ್ರಿಲ್ 6ರಂದು ಅಳೆದೂ ತೂಗಿ ಕಾಂಗ್ರೆಸ್ 2ನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿತ್ತು. ಜೊತೆಗೆ ಏಪ್ರಿಲ್ 15ರಂದು ಮೂರನೇ ಪಟ್ಟಿಯಲ್ಲಿ 43 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ಇಂದು (ಏಪ್ರಿಲ್ 18) 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ.
ಕಾಂಗ್ರೆಸ್ ನಾಲ್ಕನೇ ಪಟ್ಟಿ ಘೋಷಣೆ ಆದರೂ ಪುಲಕೇಶಿ ನಗರ ಟಿಕೆಟ್ ಘೋಷಣೆ ಆಗಿಲ್ಲ. ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಟಿಕೆಟ್ ಗಾಗಿ ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಅಖಂಡ ಪರವಾಗಿ ಸಿದ್ದರಾಮಯ್ಯ ಟಿಕೆಟ್ ಕೊಡಿಸಲು ಪ್ರಯತ್ನ ಪಡುತ್ತಿದ್ದಾರೆ. ಈಗಾಗಲೇ ಅಖಂಡ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಬಲಿಗರ ಸಭೆಯನ್ನೂ ನಡೆಸಿದ್ದಾರೆ. ನನಗೆ ಟಿಕೆಟ್ ಸಿಗದೆ ಇರಲು ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಕಾರಣ ಎಂದು ಆರೋಪಿಸಿದ್ದಾರೆ. ಹೀಗಿದ್ದರೂ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ.

ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ












Click it and Unblock the Notifications