ವಿನಯ್ ಕುಲಕರ್ಣಿ ಬಂಧನ: ಸುರ್ಜೇವಾಲ ಮಹತ್ವದ ಟ್ವೀಟ್!
ಬೆಂಗಳೂರು, ನ. 07: ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರ ಬಂಧನ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿ ವಿಚಾರಣೆ ನಡೆಸಿದೆ. ಇದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಕನ್ನಡದಲ್ಲಿ ಟ್ವೀಟ್ ಮಾಡಿ ವಿನಯ್ ಕುಲಕರ್ಣಿ ಅವರ ಬಂಧನವನ್ನು ಖಂಡಿಸಿದ್ದಾರೆ.
ಬಿಜೆಪಿ ಸರ್ಕಾರವು ಸಿಬಿಐಯನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದೆ. ಇದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ ಎಂದು ಸುರ್ಜೆವಾಲಾ ಅವರು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಬೆದರಿಕೆ ತಂತ್ರಗಳಿಗೆ ಕಾಂಗ್ರೆಸ್ ನಾಯಕರು ಎಂದಿಗೂ ಜಗ್ಗುವುದಿಲ್ಲ ಎಂಬುದನ್ನು ಸಿಎಂ ಯಡಿಯೂರಪ್ಪ ಅವರು ಅರ್ಥಮಾಡಿಕೊಳ್ಳಬೇಕು.

Recommended Video
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಸ್ಥಿರ ಸರ್ಕಾರವು ಸಿಬಿಐ ಮತ್ತು ಇಡಿ ಬಳಸಿಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಚಿವರಾದ ಡಾ. ಜಿ. ಪರಮೇಶ್ವರ್ ಹಾಗೂ ವಿನಯ್ ಕುಲಕರ್ಣಿ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರನ್ನು ಹಣಿಯಲು ಯತ್ನಿಸುತ್ತಿದೆ. ಈ ತಂತ್ರಗಳು ಜನರಿಗಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು ಎಂದು ಸುರ್ಜೇವಾಲಾ ಅವರು ಎಚ್ಚರಿಸಿದ್ದಾರೆ.












Click it and Unblock the Notifications