ಭಾರತ್ ಜೋಡೋ ಬಳಿಕ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರಿಂದ ಬಸ್ ಯಾತ್ರೆ
ಬೆಂಗಳೂರು, ಅಕ್ಟೋಬರ್ 26: ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಬಸ್ ಯಾತ್ರೆ ನಡೆಸಲಿದ್ದಾರೆ ಎಂಬ ಸುದ್ದಿ ಇದೆ. ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾರತ್ ಜೋಡೋ ಯಾತ್ರೆ ಬಳಿಕ ಕಾಂಗ್ರೆಸ್ ನಾಯಕರ ಮುಂದಿನ ನಡೆ ಏನು ಎನ್ನುವುದರ ಬಗ್ಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರ ಯಶಸ್ವಿಯಾದ ಬೆನ್ನಲ್ಲೇ ರಾಜ್ಯಾದ್ಯಂತ ಎಲ್ಲಾ ನಾಯಕರು ಸೇರಿ ಸಾಮೂಹಿಕ ನಾಯಕತ್ವದಲ್ಲಿ ಬಸ್ ಯಾತ್ರೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
"ಭಾರತ್ ಜೋಡೋ ಯಾತ್ರೆಯ ವೇಗವನ್ನು ಇಲ್ಲಿಗೆ ನಿಲ್ಲಿಸಲು ಸಾಧ್ಯವಿಲ್ಲ. ಕೆಪಿಸಿಸಿ ಮಟ್ಟದಲ್ಲಿ ಯಾತ್ರೆ ಮುಗಿಯುವವರೆಗೆ ಇದನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎಂಬುದರ ಕುರಿತು ಚಿಂತನೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಹಿರಿಯ ನಾಯಕರು ಈ ಬಗ್ಗೆ ಚರ್ಚಿಸಲಿದ್ದಾರೆ. ಇನ್ನು ಯಾತ್ರೆಯ ವಿಚಾರದಲ್ಲಿ ಹಿರಿಯ ನಾಯಕರೊಂದಿಗೆ ಕುಳಿತು ಚರ್ಚಿಸಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಇದು ಕೇವಲ ನಾನೊಬ್ಬನೇ ತೀರ್ಮಾನಿಸುವ ವಿಚಾರವಲ್ಲ" ಎಂದರು.

ಪಕ್ಷದ ಮೂಲಗಳ ಪ್ರಕಾರ, 1999ರಲ್ಲಿ ಕೆಪಿಸಿಸಿಯ ಆಗಿನ ಅಧ್ಯಕ್ಷ ಎಸ್.ಎಂ ಕೃಷ್ಣ ಅವರ ನೇತೃತ್ವದಲ್ಲಿ ನಡೆದ ಪಾಂಚಜನ್ಯ ಯಾತ್ರೆಯಂತೆಯೇ ಈ ಬಾರಿಯ ಕರ್ನಾಟಕ ಕಾಂಗ್ರೆಸ್ ನಾಯಕರ ಬಸ್ ಯಾತ್ರೆ ಇರುತ್ತದೆ. ಪಾಂಚಜನ್ಯ ಯಾತ್ರೆ, ಆ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾಗಿತ್ತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನವೆಂಬರ್ 2ನೇ ವಾರದಲ್ಲಿ ಕಾಂಗ್ರೆಸ್ ನಾಯಕರು ಕರ್ನಾಟಕ ಬಸ್ ಯಾತ್ರೆ ಆರಂಭಿಸಲಿದ್ದಾರೆ. ಪ್ರತಿ ತಂಡದಲ್ಲಿ 15 ಪ್ರಮುಖ ನಾಯಕರು ಈ ಯಾತ್ರೆಯಲ್ಲಿ ಇರಲಿದ್ದಾರೆ ಎಂದು ವರದಿಯಾಗಿದೆ.
ಇನ್ನು ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸದಿರುವ ಪಕ್ಷದ ಮುಖಂಡರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಸಮಾಧಾನಗೊಂಡಿದ್ದಾರೆ. ಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸದ ಪಕ್ಷದ ಮುಖಂಡರು ಮತ್ತು ಪದಾಧಿಕಾರಿಗಳ ಬಗ್ಗೆ ವರದಿ ಪಡೆಯುವುದಾಗಿ ಹೇಳಿರುವ ಡಿ.ಕೆ ಶಿವಕುಮಾರ್, ಈ ಬಗ್ಗೆ ಹೈಕಮಾಂಡ್ ನಾಯಕರಿಗೆ ದೂರು ನೀಡುವ ಸಾಧ್ಯತೆ ಇದೆ.
ಒಟ್ಟಾರೆ ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನಾಯಕರು ಭರ್ಜರಿ ತಯಾರಿ ಆರಂಭಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಯಶಸ್ವಿಗೊಂಡ ಬೆನ್ನಲ್ಲೇ, ಬಸ್ ಯಾತ್ರೆಗೆ ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. ಈ ಮೂಲಕ ಕರ್ನಾಟಕದ ಮೂಲೆ ಮೂಲೆಗೂ ತೆರಳಿ ತಳಮಟ್ಟದಲ್ಲಿ ಜನರಿಗೆ ಹತ್ತಿರವಾಗುವ ಪ್ರಯತ್ನ ಮಾಡುತ್ತಿದ್ದಾರೆ.












Click it and Unblock the Notifications