ಅಕ್ರಮ ನಡೆದಿದ್ರೆ ತನಿಖೆ ಸಿಎಂ ಮೇಲಲ್ಲ: ಕಾಂಗ್ರೆಸ್ ಬೊಟ್ಟು ಮಾಡಿದ್ದು ಯಾರತ್ತ?
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ತೀರ್ಮಾನವನ್ನೇ ಕೋರ್ಟ್ ಎತ್ತಿ ಹಿಡಿದು, ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದೆ.
ʼಮುಡಾ ನಿವೇಶನ ಪ್ರಕರಣದಲ್ಲಿ ಅಕ್ರಮವಾಗಿದೆ ಎಂದಾದರೆ, ತನಿಖೆ ಎದುರಿಸಬೇಕಾಗಿರುವುದು ಮುಡಾ, ಅದರ ಅಧಿಕಾರಿಗಳೇ ಹೊರತು ಸಿಎಂ ಸಿದ್ದರಾಮಯ್ಯ ಅವರಲ್ಲ ಎಂದು ಹೇಳಿದೆ. ದೂರಿನಲ್ಲಿ ಪಾರ್ಟಿಯಾಗಬೇಕಾಗಿರುವುದು ಮುಡಾ. ಆದರೆ ಈ ಪ್ರಕರಣದಲ್ಲಿ ಯಾವುದೇ ಪಾತ್ರವಿಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಗುರಿಯಾಗಿಸಿ ದೂರು ನೀಡಲಾಗಿದೆ. ಇದು ರಾಜಕೀಯ ದುರುದ್ದೇಶವಲ್ಲದೆ ಇನ್ನೇನೂ ಅಲ್ಲ. ರಾಜಕೀಯ ಪ್ರೇರಿತ ಪ್ರಕರಣವನ್ನು ಎದುರಿಸುವುದು ನಮಗೂ ತಿಳಿದಿದೆ. ಕಾಂಗ್ರೆಸ್ ನಾಯಕರನ್ನು ಯಾವುದರಲ್ಲೂ ಮಣಿಸಲು ಸಾಧ್ಯವಾಗದಾಗ ಕಾನೂನಿನ ಕುಣಿಕೆ ಹಾಕುವುದು ಬಿಜೆಪಿಯ ಷಡ್ಯಂತ್ರದ ಭಾಗʼ ಎಂದು ಆರೋಪಿಸಿದೆ.

ʼಈ ಹಿಂದೆ ಡಿ.ಕೆ.ಶಿವಕುಮಾರ್ ಅವರನ್ನು ಕಾನೂನಿನ ಮೂಲಕ ಹಣಿಯುವ ಬಿಜೆಪಿಯ ಪ್ರಯತ್ನ ವಿಫಲವಾಗಿದೆ, ಈಗ ಸಿದ್ದರಾಮಯ್ಯ ಅವರ ವಿರುದ್ಧದ ತಂತ್ರಗಳೂ ವಿಫಲವಾಗಲಿದೆʼ ಎಂದು ತಿರುಗೇಟು ನೀಡಿದೆ.
ʼನಮ್ಮ ಹೋರಾಟ ಮುಂದುವರೆಯಲಿದೆ, ಸರ್ಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನಕ್ಕೆ, ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರು ಕುಮಾರಸ್ವಾಮಿ ಹಾಗೂ ಇತರ ಬಿಜೆಪಿ ನಾಯಕರ ಬಗೆಗಿನ ದೂರುಗಳನ್ನು ಮುಚ್ಚಿಡಲು ಪ್ರಯತ್ನಿಸಿದ್ದು ಜಗಜ್ಜಾಹೀರಾಗಿದೆ. ಈ ಬಗ್ಗೆ ದೂರುಗಳು ಹೇಗೆ ಸೋರಿಕೆಯಾದವು? ಎಂದು ರಾಜ್ಯಪಾಲರ ಪ್ರಶ್ನೆಯೇ ಅವರ ತಾರತಮ್ಯದ ರಾಜಕೀಯಕ್ಕೆ ಪುರಾವೆ ಒದಗಿಸುತ್ತವೆʼ ಎಂದು ವಾಗ್ದಾಳಿ ನಡೆಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ತಮ್ಮ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾ ಮಾಡಿ, ತೀರ್ಪು ನೀಡಿದೆ.
ಯಾವ ತನಿಖೆಗೂ ಹಿಂಜರಿಯಲ್ಲ : 'ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ನಾನು ಆದೇಶ ಪ್ರತಿ ಪಡೆದು ಓದಿದ ಬಳಿಕ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ. ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ತೀರ್ಮಾನಿಸುತ್ತೇನೆ' ಎಂದಿದ್ದಾರೆ.
'ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನರು ನನ್ನ ಬೆನ್ನ ಹಿಂದೆ ನಿಂತಿದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್‌ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ' ಎಂದು ತೊಡೆತಟ್ಟಿದ್ದಾರೆ.
'ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ. ಸತ್ಯಮೇವ ಜಯತೇ..' ಎಂದು ಸಿದ್ದರಾಮಯ್ಯ ಶಪಥ ಮಾಡಿದ್ದಾರೆ. ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ.












Click it and Unblock the Notifications