Holiday: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗೆ ವಿಶೇಷ ರಜೆ ಮಂಜೂರು ಕುರಿತು ಮಹತ್ವದ ಆದೇಶ
Police Officers Special Holiday: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಗಳಿಗೆ ಮಹತ್ವದ ಸಿಹಿಸುದ್ದಿ ನೀಡಿದೆ. ಕಾನ್ಸ್‌ಟೇಬಲ್‌ನಿಂದ ಎಎಸ್‌ಐ (ಸಹಾಯಕ ಉಪ ನಿರೀಕ್ಷಕ) ದರ್ಜೆಯವರೆಗೆ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವದ ಸಂದರ್ಭಗಳಲ್ಲಿ ಕಡ್ಡಾಯವಾಗಿ ವಿಶೇಷ ರಜೆ ಮಂಜೂರು ಮಾಡಬೇಕು ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಈ ಕುರಿತು ಹೊರಡಿಸಿರುವ ಸೂಚನೆಯಲ್ಲಿ, ಅರ್ಜಿ ಸಲ್ಲಿಸಿದ ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ರಜೆ ನಿರಾಕರಿಸಬಾರದು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಸಿಬ್ಬಂದಿಗಳ ವೈಯಕ್ತಿಕ ಬದುಕು ಮತ್ತು ಕುಟುಂಬದೊಂದಿಗೆ ಸಮಯ ಕಳೆಯಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಸಂತಸಗೊಂಡ ಪೊಲೀಸ್ ಸಿಬ್ಬಂದಿ
ಪೊಲೀಸ್ ಸಿಬ್ಬಂದಿಗಳ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ, ಕೆಲಸದ ಮೇಲಿನ ಉತ್ಸಾಹವನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಕ್ರಮ ಜಾರಿಗೆ ತರಲಾಗಿದೆ. ಇದರಿಂದ ಸಿಬ್ಬಂದಿಗಳ ಕಾರ್ಯಕ್ಷಮತೆ ಇನ್ನಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ. ಇನ್ನೂ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಈ ಸುತ್ತೋಲೆ ಪೊಲೀಸ್ ವಲಯದಲ್ಲಿ ಸ್ವಾಗತ ಪಡೆದುಕೊಂಡಿದ್ದು, ಸಿಬ್ಬಂದಿಗಳು ಸರ್ಕಾರದ ಈ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಆದೇಶದಲ್ಲಿ ಏನಿದೆ?: ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿರುತ್ತದೆ. ಅಂತಹ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳಲು ಹಾಗೂ ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ.
ಇದರಿಂದ ಸಿಬ್ಬಂದಿಯ ಮನೋಬಲ ವೃದ್ಧಿಯಾಗಿ, ಒತ್ತಡ ಕಡಿಮೆ ಆಗುತ್ತದೆ. ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ. ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ಷಮತೆಗೆ ಸಹಕಾರಿ ಆಗುತ್ತದೆ. ಆದ್ದರಿಂದ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತಪ್ಪದೆ ರಜೆ ಮಂಜೂರು ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪೊಲೀಸ್ ಸಿಬ್ಬಂದಿಗೆ ರಜೆ ನೀಡುವ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಡಿಜಿ ಮತ್ತು ಐಜಿಪಿಗೆ ಪತ್ರ ಬರೆದಿದ್ದರು. ಇದಕ್ಕೂ ಮುನ್ನ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಅವರು ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ಗಳಿಂದ ಎಎಸ್‌ಐ ದರ್ಜೆಯವರೆಗಿನ ಸಿಬ್ಬಂದಿಯ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕಡ್ಡಾಯ ರಜೆ ನೀಡುವಂತೆ ಕೋರಿದ್ದರು.












Click it and Unblock the Notifications