ಕೇಂದ್ರದ 3 ತಂಡಗಳಿಂದ ರಾಜ್ಯದ ಬರ ಅಧ್ಯಯನ: ಅಕ್ಟೋಬರ್ ಮೊದಲ ವಾರವೇ ಪರಿಹಾರ ಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಹಿನ್ನೆಲೆ ಕೇಂದ್ರ ಸರ್ಕಾರದ ಮೂರು ತಂಡಗಳು ಕರ್ನಾಟಕದ ಒಟ್ಟು 12ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯ ಕುರಿತು ಅಧ್ಯಯನ ನಡೆಸಲಿವೆ. ಇದೆಲ್ಲ ಆಗುತ್ತಿದ್ದಂತೆ ಇನ್ನಷ್ಟು ಗ್ರೌಂಡ್‌ ಟ್ರೂಥಿಂಗ್ ನಡೆಯುತ್ತಿದೆ. ಅದು ಪೂರ್ಣಗೊಂಡ ಬಳಿಕ ಅಕ್ಟೋಬರ್ ಮೊದಲ ವಾರ ಅಂತಿಮ ಪರಿಹಾರ ಸಂಬಂಧಿ ಮನವಿ ಪತ್ರ (ಮೆಮೊರಾಂಡಂ) ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು, ಚಿತ್ರದುರ್ಗ, ದಾವಣಗೆರೆ ಭಾಗದಲ್ಲಿ ಒಂದು ತಂಡ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತೊಂದು ತಂಡ ಹಾಗೂ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಮೈಸೂರು ಭಾಗದಲ್ಲಿ ಮೂರನೇ ತಂಡ ಅಧ್ಯಯನ ನಡೆಸಲಿದೆ. ಬರಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಿ ತಮ್ಮ ವರದಿಯನ್ನು ಸಲ್ಲಿಸಲಿವೆ.

Karnataka Drought

ರಾಜ್ಯ ಸರ್ಕಾರ ಈಗಾಗಲೇ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ್ದು, ಅದರ ಆಧಾರದ ಮೇಲೆಯೇ ಕೇಂದ್ರದ ತಂಡಗಳು ಪರಿಶೀಲನೆ ನಡೆಸಲಿವೆ. ಇದರ ಜೊತೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಮನವಿ ಪತ್ರ ಸಿದ್ಧಪಡಿಸಿ ಸಲ್ಲಿಸಲಾಗುವುದು ಎಂದರು.

ಕರ್ನಾಟಕ ಘೋಷಿತ ಬರ ತಾಲೂಕಗಳ ಮಾಹಿತಿ ಸಂಗ್ರಹ

ರಾಜ್ಯದಲ್ಲಿ ಬರ ಎಂದು ಘೋಷಿಸಲಾಗಿರುವ ಎಲ್ಲ ತಾಲೂಕುಗಳ ಬಗ್ಗೆಯೂ ಕೇಂದ್ರದ ತಂಡಗಳು ಮಾಹಿತಿಯನ್ನು ಸಂಗ್ರಹಿಸುವ ಸಾಧ್ಯತೆಯಿದೆ. ಕೆಲವು ತಾಲೂಕುಗಳಿಗೆ ತಂಡಗಳು ಖುದ್ದಾಗಿ ಭೇಟಿ ನೀಡಿ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಳ್ಳಲಿವೆ. ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯಲ್ಲಿನ ಅಂಶಗಳು ಹಾಗೂ ಕೇಂದ್ರದ ತಂಡಗಳು ಸ್ಥಳದಲ್ಲೇ ನಡೆಸುವ ಪರಿಶೀಲನೆಯಲ್ಲಿನ ವಾಸ್ತವಾಂಶಗಳ ನಡುವೆ ಯಾವುದೇ ವ್ಯತ್ಯಾಸವಿದೆಯೇ ಎಂಬುದನ್ನೂ ಅವರು ಪರಿಶೀಲಿಸಲಿದ್ದಾರೆ ಎಂದು ವಿವರಿಸಿದರು.

ಕೇಂದ್ರ ಮಾರ್ಗಸೂಚಿಯಡಿ ಬರ ತಾಲೂಕಗಳ ಘೋಷಣೆ

ರಾಜ್ಯದ ಬರ ಪೀಡಿತ ತಾಲೂಕುಗಳ ಘೋಷಣೆ ಕೇಂದ್ರದ ಮಾರ್ಗಸೂಚಿ ಆಧಾರಿತ: ಕೇಂದ್ರದ ಮಾರ್ಗಸೂಚಿಗಳ ಪ್ರಕಾರವೇ ಗ್ರೌಂಡ್‌ ಟ್ರೂಥಿಂಗ್ ನಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದ ತಂಡಗಳಿಗೆ ತಮ್ಮದೇ ಆದ ಮಾರ್ಗಸೂಚಿಗಳಿವೆ. ರಾಜ್ಯ ಸರ್ಕಾರವೂ ಬರ ತಾಲೂಕುಗಳನ್ನು ಘೋಷಿಸುವ ಸಂದರ್ಭದಲ್ಲಿ ಇದೇ ಮಾರ್ಗಸೂಚಿಗಳನ್ನು ಅನುಸರಿಸಿದ್ದೇವೆ.

ಮಾರ್ಗಸೂಚಿಗಳ ವ್ಯಾಪ್ತಿಗೆ ಬರದ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿಲ್ಲ. ಹೀಗಾಗಿ ಕೇಂದ್ರದ ತಂಡಗಳು ಪರಿಶೀಲನೆ ನಡೆಸಿದಾಗ ರಾಜ್ಯ ಸರ್ಕಾರದ ವರದಿ ಹಾಗೂ ಅವರ ಪರಿಶೀಲನೆಯ ನಡುವೆ ಹೆಚ್ಚಿನ ವ್ಯತ್ಯಾಸ ಕಂಡುಬರುವ ಸಾಧ್ಯತೆ ಇಲ್ಲ ಎಂದು ತಿಳಿಸಿದರು.

ಬರ ಹಾನಿ, ಪರಿಹಾರ ವರದಿ ಮಂಡನೆ

ಸೆಪ್ಟೆಂಬರ್ 30ಕ್ಕೆ ಮುಂಗಾರು ಅವಧಿ ಮುಕ್ತಾಯವಾಗಲಿದ್ದು, ಅದರ ನಂತರ ಅಕ್ಟೋಬರ್ ಮೊದಲ ವಾರದಲ್ಲೇ ಅಂತಿಮ ಮನವಿಯನ್ನು ಕೇಂದ್ರಕ್ಕೆ ಸಲ್ಲಿಸಲು ಉದ್ದೇಶಿಸಲಾಗಿದೆ. ರಾಜ್ಯದ ನಷ್ಟ ಹಾಗೂ ಅಗತ್ಯವಿರುವ ಪರಿಹಾರದ ಕುರಿತು ಸಮಗ್ರ ಮಾಹಿತಿ ಒಳಗೊಂಡ ವರದಿಯನ್ನು ಕೇಂದ್ರದ ಮುಂದೆ ಮಂಡಿಸಲಾಗುವುದು ಎಂದು ಹೇಳಿದರು.

ಬರ ಯಾವುದೇ ಪಕ್ಷದ ಸಮಸ್ಯೆಯಲ್ಲ, ಸರ್ವಪಕ್ಷ ನಿಯೋಗ

ಬರ ಪರಿಹಾರದ ವಿಚಾರದಲ್ಲಿ ಸರ್ವಪಕ್ಷ ನಿಯೋಗದ ಅಗತ್ಯವನ್ನು ಪುನರುಚ್ಚರಿಸಿದ ಡಾ.ಜಿ.ಪರಮೇಶ್ವರ ಅವರು, ಬರ ಯಾವುದೇ ಪಕ್ಷಕ್ಕೆ ಸೀಮಿತವಾದ ಸಮಸ್ಯೆಯಲ್ಲ. ಪ್ರಕೃತಿ ವಿಕೋಪಕ್ಕೆ ಪಕ್ಷದ ಬೇಧವಿಲ್ಲ. ಕೇಂದ್ರ ಸರ್ಕಾರದ ಮುಂದೆ ಎಲ್ಲರೂ ಒಟ್ಟಾಗಿ ರಾಜ್ಯದ ಪರವಾಗಿ ಮನವಿ ಸಲ್ಲಿಸಿದರೆ ಹೆಚ್ಚಿನ ನೆರವು ಪಡೆಯಲು ಅನುಕೂಲವಾಗಲಿದೆ ಎಂಬ ಉದ್ದೇಶದಿಂದಲೇ ಮುಖ್ಯಮಂತ್ರಿ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಹೇಳಿದರು.

ಬಿಜೆಪಿ ನಾಯಕರು ನಿಯೋಗದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅವರ ಪಕ್ಷವೇ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಅವರು ನಮ್ಮೊಂದಿಗೆ ಬಂದರೆ ಕೇಂದ್ರ ಸರ್ಕಾರವನ್ನು ಮನವರಿಕೆ ಮಾಡಿಕೊಡಲು ಇನ್ನಷ್ಟು ಸಹಕಾರಿಯಾಗುತ್ತದೆ ಎಂಬುದು ರಾಜ್ಯ ಸರ್ಕಾರದ ಉದ್ದೇಶ. ಆದರೆ, ಅವರು ಬರದಿದ್ದರೂ ಆಡಳಿತ ಪಕ್ಷವಾಗಿ ರಾಜ್ಯದ ಹಿತಾಸಕ್ತಿಗಾಗಿ ಕೇಂದ್ರ ಸರ್ಕಾರದ ಗಮನಕ್ಕೆ ವಿಷಯವನ್ನು ತರುವ ಜವಾಬ್ದಾರಿ ರಾಜ್ಯ ಸರ್ಕಾರ ನಿರ್ವಹಿಸಲಿದೆ ಎಂದು ಹೇಳಿದರು.

ಬರ ಯಾವುದೇ ಪಕ್ಷದ ಸಮಸ್ಯೆಯಲ್ಲ. ಇದು ಕರ್ನಾಟಕದ ಜನರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯ. ಆದ್ದರಿಂದ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಹಂಚಿಕೊಳ್ಳಬೇಕು. ಕೇಂದ್ರಕ್ಕೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿಯವರೂ ನಮ್ಮೊಂದಿಗೆ ಬರಬೇಕು ಎಂದು ಮತ್ತೊಮ್ಮೆ ಮನವಿ ಮಾಡುವುದಾಗಿ ಅವರು ಹೇಳಿದರು.

ಪರಿಹಾರ ನೀಡಬೇಕು, ಕೋರ್ಟ್ ಮೊರೆ ಹೋಗುವಂತಾಗದಿರಲಿ

ಕೇಂದ್ರ ಸರ್ಕಾರ ಮತ್ತೊಮ್ಮೆ ಪರಿಹಾರಕ್ಕಾಗಿ ಮನವಿ ಸಲ್ಲಿಸಿದರೂ ಸ್ಪಂದಿಸದ ಪರಿಸ್ಥಿತಿ ಎದುರಾದರೆ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುವುದಿಲ್ಲ. ಕೇಂದ್ರ ಸರ್ಕಾರ ಪರಿಹಾರ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರೆ, ಕಳೆದ ವರ್ಷ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರೀತಿಯಲ್ಲಿ ಮತ್ತೆ ನ್ಯಾಯಾಲಯದ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಬಾರದು. ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟವರು ಅಂತಹ ಅವಕಾಶವನ್ನು ನೀಡಬಾರದು ಎಂಬುದು ತಮ್ಮ ಮನವಿ ಎಂದು ಅವರು ಹೇಳಿದರು.

ಗ್ಯಾರಂಟಿಗಳ ಹಣಕಾಸಿನ ಹೊರೆ ನಿರ್ವಹಣೆ

ಗ್ಯಾರಂಟಿ ಯೋಜನೆಗಳ ಕುರಿತು ಪಕ್ಷದ ಸಚಿವರು ಹಾಗೂ ಶಾಸಕರಿಂದ ಬರುತ್ತಿರುವ ವಿಭಿನ್ನ ಅಭಿಪ್ರಾಯಗಳ ಬಗ್ಗೆ ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ ಅವರು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಸಂದರ್ಭದಲ್ಲಿ ಅವುಗಳಿಗೆ ಹೆಚ್ಚಿನ ಹಣ ಅಗತ್ಯವಾಗುತ್ತದೆ ಎಂಬುದು ಸರ್ಕಾರಕ್ಕೆ ಮೊದಲಿನಿಂದಲೂ ತಿಳಿದಿತ್ತು ಎಂದು ಹೇಳಿದರು.

ಪ್ರಣಾಳಿಕೆ ಸಿದ್ಧಪಡಿಸುವಾಗಲೇ ಯೋಜನೆಗಳಿಗೆ ಎಷ್ಟು ಹಣ ಬೇಕಾಗಬಹುದು ಎಂಬುದರ ಕುರಿತು ಅಂದಾಜು ಮಾಡಲಾಗಿತ್ತು. ಆರಂಭದಲ್ಲಿ ಸುಮಾರು ₹40ರಿಂದ ₹45 ಸಾವಿರ ಕೋಟಿ ವೆಚ್ಚವಾಗಬಹುದು ಎಂಬ ಅಂದಾಜಿತ್ತು. ನಂತರ ವಾಸ್ತವಿಕ ವೆಚ್ಚ ಸುಮಾರು ₹50 ಸಾವಿರ ಕೋಟಿಗೂ ಹೆಚ್ಚಾಗಿದೆ. ಆದರೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನಿರ್ಧಾರವನ್ನು ಪ್ರಜ್ಞಾಪೂರ್ವಕವಾಗಿಯೇ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಹಣಕಾಸಿನ ಮೇಲೆ ಒತ್ತಡ ಇರುವುದನ್ನು ಯಾರೂ ಮುಚ್ಚಿಡಲು ಸಾಧ್ಯವಿಲ್ಲ. ಆದರೆ, ಕಳೆದ ಮೂರು ವರ್ಷಗಳಿಂದ ಸರ್ಕಾರ ಈ ಹಣಕಾಸಿನ ಬದ್ಧತೆಯನ್ನು ನಿರ್ವಹಿಸಿಕೊಂಡು ಬಂದಿದೆ. ಮುಂದಿನ ಎರಡು ವರ್ಷಗಳಲ್ಲೂ ಅದನ್ನು ನಿರ್ವಹಿಸುವ ಸಾಮರ್ಥ್ಯ ಸರ್ಕಾರಕ್ಕಿದೆ ಎಂದು ಅವರು ಹೇಳಿದರು.

ಪಿಂಚಣಿ ಫಲಾನುಭವಿಗಳ ಮರು ಸೇರ್ಪಡೆ: ಪಿಂಚಣಿ ವಿಚಾರವಾಗಿ ಮಾತನಾಡಿದ ಅವರು, ಈ ಹಿಂದೆ ₹32 ಸಾವಿರ ಇದ್ದ ಆದಾಯದ ಮೇಲಿನ ಮಿತಿಯನ್ನು ಈಗ ₹1.20 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಹಿಂದೆ ಪಿಂಚಣಿಯಿಂದ ಹೊರಗುಳಿದಿದ್ದ ಹಲವು ಅರ್ಹರು ಮತ್ತೆ ಯೋಜನೆಯ ವ್ಯಾಪ್ತಿಗೆ ಬರಲಿದ್ದಾರೆ ಎಂದು ತಿಳಿಸಿದರು.

ಹಿಂದೆ ಸುಮಾರು 23 ಲಕ್ಷ ಜನರ ಪಿಂಚಣಿ ರದ್ದಾಗಿತ್ತು. ಈಗ ಆದಾಯದ ಮಿತಿಯನ್ನು ಹೆಚ್ಚಿಸಿರುವುದರಿಂದ ಅರ್ಹ ಫಲಾನುಭವಿಗಳಿಗೆ ಮತ್ತೆ ಪಿಂಚಣಿ ದೊರೆಯಲಿದೆ. ಅದೇ ಸಂದರ್ಭದಲ್ಲಿ ಸೂಕ್ತ ಪ್ರಮಾಣಪತ್ರ ಸಲ್ಲಿಸದವರು ಹಾಗೂ ವಯೋಮಿತಿ ಪೂರೈಸದವರ ಅರ್ಜಿಗಳನ್ನು ಪರಿಶೀಲಿಸಿ ಅನರ್ಹರನ್ನು ಹೊರಗಿಡುವ ಮೂಲಕ ವ್ಯವಸ್ಥೆಯಲ್ಲಿ ಶುದ್ಧೀಕರಣ ಮಾಡಲಾಗುವುದು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+