Karnataka Drought: ಕರ್ನಾಟಕದಲ್ಲಿ ₹62,481 ಕೋಟಿ ಕೃಷಿ ನಷ್ಟ: ಬರ ಪರಿಹಾರಕ್ಕೆ ಕೇಂದ್ರದಿಂದ ₹20,585 ಕೋಟಿ ರೂ.ಗೆ ಮನವಿ

ಕರ್ನಾಟಕದಲ್ಲಿ ತೀವ್ರ ಬರದಿಂದ 62,481.88 ಕೋಟಿ ರೂ. ಕೃಷಿ ನಷ್ಟ; 226 ತಾಲ್ಲೂಕುಗಳು ಬರಪೀಡಿತವಾಗಿವೆ ಎಂದು ಸರ್ಕಾರ ಘೋಷಿಸಿದೆ. ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (NDRF) ಅಡಿಯಲ್ಲಿ 20,585.73 ಕೋಟಿ ರೂ. ಪರಿಹಾರವನ್ನು ತುರ್ತಾಗಿ ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕೋರಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ.

ಕರ್ನಾಟಕದಲ್ಲಿನ ಬರ ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸಿರುವ ಅವರು, 2026ರ ನೈಋತ್ಯ ಮುಂಗಾರು ಅವಧಿಯಲ್ಲಿ ಕರ್ನಾಟಕದಲ್ಲಿ ಶೇ.35ರಷ್ಟು ಮಳೆ ಕೊರತೆಯಾಗಿದೆ. ವಾಡಿಕೆಯಂತೆ 852 ಮಿ.ಮೀ. ಮಳೆಯಾಗಬೇಕಿದ್ದು ಕೇವಲ 551 ಮಿ.ಮೀ. ಮಳೆಯಾಗಿದೆ. ಇದು 1956ರಿಂದೀಚೆಗೆ ದಾಖಲಾದ ಎರಡನೇ ಅತ್ಯಂತ ಕಡಿಮೆ ಹಾಗೂ 1901ರಿಂದೀಚೆಗೆ ದಾಖಲಾದ ಏಳನೇ ಅತ್ಯಂತ ಕಡಿಮೆ ಮುಂಗಾರು ಮಳೆಯಾಗಿದೆ ಎಂದಿದ್ದಾರೆ.

Karnataka Drought Karnataka Seeks 20 585 Crore Drought Relief as Crop Losses Reach 62 481 Crore

ಮುಂದುವರಿದು ಕರ್ನಾಟಕ ಸರ್ಕಾರವು 226 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಒಟ್ಟು 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಇದರಲ್ಲಿ 53.92 ಲಕ್ಷ ಹೆಕ್ಟೇರ್ ಕೃಷಿ ಬೆಳೆಗಳು ಹಾಗೂ 4.01 ಲಕ್ಷ ಹೆಕ್ಟೇರ್ ತೋಟಗಾರಿಕಾ ಬೆಳೆಗಳು ಸೇರಿವೆ. ಕೃಷಿ ವೆಚ್ಚದ ಆಧಾರದ ಮೇಲೆ ಲೆಕ್ಕಹಾಕಲಾದ ಒಟ್ಟು ಆರ್ಥಿಕ ನಷ್ಟ ₹62,481.88 ಕೋಟಿಯಾಗಿದೆ.

ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರವು ಒಟ್ಟು ₹20,585.73 ಕೋಟಿ ಕೇಂದ್ರದ ನೆರವು ಕೋರಿ ಸಮಗ್ರ ಮನವಿ ಪತ್ರವನ್ನು ಸಲ್ಲಿಸಿದೆ. ಇದರಲ್ಲಿ ಬೆಳೆ ಹಾನಿಯ ಪರಿಹಾರ ಸಹಾಯಧನಕ್ಕಾಗಿ (Input Subsidy) ₹6,128.70 ಕೋಟಿ, 61.91 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಜೀವನೋಪಾಯ ಪರಿಹಾರವಾಗಿ ₹12,146.99 ಕೋಟಿ, ಕುಡಿಯುವ ನೀರಿನ ಪೂರೈಕೆಗಾಗಿ ₹1,727 ಕೋಟಿ ಹಾಗೂ ಪಶುಸಂಗೋಪನೆ ಮತ್ತು ಜಾನುವಾರುಗಳ ಸಂರಕ್ಷಣೆಗಾಗಿ ₹583.04 ಕೋಟಿ ನೆರವು ಕೋರಲಾಗಿದೆ ಮಾಹಿತಿ ನೀಡಿದ್ದಾರೆ.

ಬರದಿಂದ ಜೀವನೋಪಾಯಕ್ಕೆ ತೀವ್ರ ಹೊಡೆತ ಬಿದ್ದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ತಕ್ಷಣವೇ ಆರ್ಥಿಕ ನೆರವು ಒದಗಿಸುವ ಅಗತ್ಯವನ್ನು ಡಾ. ಪರಮೇಶ್ವರ ಅವರು ವಿಶೇಷವಾಗಿ ಒತ್ತಿಹೇಳಿದ್ದಾರೆ. ರೈತರಿಗೆ ದಿನಕ್ಕೆ ₹327ರಂತೆ 60 ದಿನಗಳ ಅವಧಿಗೆ ಜೀವನೋಪಾಯ ಪರಿಹಾರವನ್ನು ಲೆಕ್ಕಹಾಕಲಾಗಿದೆ. ಜಾನುವಾರುಗಳ ರಕ್ಷಣೆಗಾಗಿ 476 ಗೋಶಾಲೆಗಳು ಮತ್ತು 583 ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಲು ಸಹ ಕೇಂದ್ರದ ನೆರವು ಕೋರಲಾಗಿದೆ.

ಬೆಳೆ ಹಾನಿಯ ಪರಿಹಾರ ಸಹಾಯಧನವನ್ನು ನಿರ್ಧರಿಸಲು ಈಗಲೂ 2015-16ರ ಹಳೆಯ ಕೃಷಿ ಗಣತಿಯ ಅಂಕಿಅಂಶಗಳನ್ನು ಬಳಸುತ್ತಿರುವ ಬಗ್ಗೆ ಡಾ. ಪರಮೇಶ್ವರ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಹಳೆಯ ದತ್ತಾಂಶವನ್ನು ಆಧರಿಸಿ ಪರಿಹಾರ ಲೆಕ್ಕಹಾಕುವುದರಿಂದ ರಾಜ್ಯಕ್ಕೆ ಸುಮಾರು ₹1,669.50 ಕೋಟಿ ನೆರವಿನ ಕೊರತೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ. ಮುಂದುವರಿದು ಫಲಾನುಭವಿ ರೈತರನ್ನು ನಿಖರವಾಗಿ ಗುರುತಿಸಲು ಹಾಗೂ ಪರಿಹಾರದ ಅಗತ್ಯವನ್ನು ಸಮರ್ಪಕವಾಗಿ ಅಂದಾಜಿಸಲು ಕರ್ನಾಟಕ ಸರ್ಕಾರದ ನವೀಕೃತ 'ಫ್ರೂಟ್ಸ್' (FRUITS) ದತ್ತಾಂಶವನ್ನು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬರಪೀಡಿತ ತಾಲೂಕುಗಳ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯ ಅವಧಿಯಲ್ಲಿಯೂ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶದಿಂದ ಪಿಎಂ ಪೋಷಣ್ (PM POSHAN) ಯೋಜನೆಯಡಿ ಹೆಚ್ಚುವರಿಯಾಗಿ ₹427.20 ಕೋಟಿ ನೆರವು ಕೋರಿದ್ದಾರೆ. ಅದೇ ರೀತಿ, ದುರ್ಬಲ ವರ್ಗದ ಫಲಾನುಭವಿಗಳ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸಲು ಪೂರಕ ಪೌಷ್ಟಿಕಾಂಶ ಕಾರ್ಯಕ್ರಮದಡಿ ₹70.96 ಕೋಟಿ ನೆರವು ಒದಗಿಸುವಂತೆ ಎಂದು ಹೇಳಿದ್ದಾರೆ.

ಕೃಷಿ ಉತ್ಪಾದನಾ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ 16ನೇ ಹಣಕಾಸು ಆಯೋಗದ ಅವಧಿಯನ್ನು ಪರಿಗಣಿಸಿ, ಪ್ರಸ್ತುತ ಜಾರಿಯಲ್ಲಿರುವ ಬೆಳೆ ಹಾನಿಯ ಪರಿಹಾರ ಸಹಾಯಧನದ ಮಾನದಂಡಗಳನ್ನು ಪರಿಷ್ಕರಿಸುವ ಅಗತ್ಯವನ್ನೂ ಅವರು ಪ್ರತಿಪಾದಿಸಿದ್ದಾರೆ.

ಕೇಂದ್ರದ ನೆರವು ಶೀಘ್ರ ಬಿಡುಗಡೆಗೆ ಒತ್ತಾಯ

ಕೇಂದ್ರ ಅಂತರ ಸಚಿವಾಲಯಗಳ ಅಧ್ಯಯನ ತಂಡವು (IMCT) ಅಕ್ಟೋಬರ್ 3ರಿಂದ 6ರವರೆಗೆ ಕರ್ನಾಟಕಕ್ಕೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿರುವುದನ್ನು ಪತ್ರದಲ್ಲಿ ಉಲ್ಲೇಖಿಸಿರುವ ಡಾ. ಪರಮೇಶ್ವರ ಅವರು, ರಾಜ್ಯ ಸರ್ಕಾರ ಸಲ್ಲಿಸಿರುವ ಸಮಗ್ರ ಬರ ಪರಿಹಾರ ಮನವಿ ಪತ್ರದ ಪರಿಶೀಲನೆಯನ್ನು ತ್ವರಿತಗೊಳಿಸುವಂತೆ ಕೋರಿದ್ದಾರೆ. ಕೇಂದ್ರ ಅಧ್ಯಯನ ತಂಡದ ಶಿಫಾರಸುಗಳನ್ನು ಉನ್ನತ ಮಟ್ಟದ ಸಮಿತಿಗೆ ಶೀಘ್ರ ಸಲ್ಲಿಸಲು ಕ್ರಮ ಕೈಗೊಳ್ಳಬೇಕು. ಆ ಮೂಲಕ ಅಗತ್ಯ ಆರ್ಥಿಕ ನೆರವನ್ನು ವಿಳಂಬವಿಲ್ಲದೆ ಮಂಜೂರು ಮಾಡಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+