ಕೆಪಿಎಸ್ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕವಾಗಿ ಈ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಕರ್ನಾಟಕದ ಕೆಪಿಎಸ್ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕವಾಗಿ ರಂಗ ಶಿಕ್ಷಕರ ನೇಮಕಾತಿ ಮಾಡುವ ವಿಚಾರವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದ್ದಾರೆ.
ಶಿವಮೊಗ್ಗದ ಸಾಗರ ತಾಲ್ಲೂಕಿನ ಪ್ರಸಿದ್ಧ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಆವರಣದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗಾಗಿ ಆಯೋಜಿಸಲಾಗಿದ್ದ ಹತ್ತು ದಿನಗಳ ರಂಗನಾಟಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹತ್ತು ಪ್ರಾಥಮಿಕ ಶಾಲೆಗಳ 300 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ಕರ್ನಾಟಕದಲ್ಲಿ ಆರಂಭವಾಗಲಿರುವ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕ ರಂಗ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕಲಾಭಿರುಚಿ ಮತ್ತು ರಂಗಭೂಮಿಯ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ ಎಂಬ ಆಶಯ ವ್ಯಕ್ತಪಡಿಸಿದರು.
ಸಿಗಂದೂರು ಭೇಟಿಗೂ ಮುನ್ನ ಸಚಿವ ಮಧು ಬಂಗಾರಪ್ಪ ಅವರು ಸೊರಬ ತಾಲ್ಲೂಕಿನ ಜಡೆ ಗ್ರಾಮಕ್ಕೆ ಭೇಟಿ ನೀಡಿ, ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಸೊರಬ ಪಟ್ಟಣದ ಐತಿಹಾಸಿಕ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.
ಅತ್ಯಂತ ಕಲಾತ್ಮಕವಾಗಿ ಶ್ರೀ ಚಾಮುಂಡೇಶ್ವರಿ ದೇವಿಯ ಸುಂದರ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿಯನ್ನು ಈ ಸಂದರ್ಭದಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಿದರು. ನಂತರ ಸೊರಬ ತಾಲ್ಲೂಕಿನ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತುರ್ತು ಕಾರಣಗಳಿಂದಾಗಿ ಶ್ರೀ ರೇಣುಕಾಂಬಾ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದಸರಾ ಸಮಿತಿಯ ಸದಸ್ಯರನ್ನು ಭೇಟಿಯಾಗಿ, ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ಹಾಗೂ ಯಶಸ್ವಿಯಾಗಿ ಆಚರಿಸುವಂತೆ ಶುಭ ಹಾರೈಸಿದರು. ಈ ವೇಳೆ ದಸರಾ ಸಮಿತಿಯ ವತಿಯಿಂದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹಿರಿಯ ರಂಗಕಲಾವಿದ ದೇವೇಂದ್ರಪ್ಪ ತಲಗುಂದ ಅವರ ಕುಟುಂಬಕ್ಕೆ ಸಾಂತ್ವನ
ರಂಗಭೂಮಿಯ ಹಿರಿಯ ಕಲಾವಿದರೂ ಸಚಿವರ ಆಪ್ತರೂ ಆಗಿದ್ದ ದೇವೇಂದ್ರಪ್ಪ ತಲಗುಂದ ಅವರು ಶುಕ್ರವಾರ ನಿಧನರಾದ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ದೇವೇಂದ್ರಪ್ಪ ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ನನಗೆ ಹಾಗೂ ನಾಡಿನ ರಂಗಭೂಮಿ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಸಂತಾಪ ಸೂಚಿಸಿದರು. ಇತ್ತೀಚೆಗೆ ನಿಧನರಾದ ಅಶೋಕ್ ಮರ್ಗಿ ಅವರ ತಂದೆ ರಾಮಪ್ಪ ಮರ್ಗಿ ಅವರ ಕುಟುಂಬದವರನ್ನು ಸೊರಬ ತಾಲ್ಲೂಕಿನ ಬರದವಳ್ಳಿಯಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದರು.
ಆದ್ಯತೆ ಮೇರೆಗೆ ಅರ್ಕೆರೆ ಕೆರೆ ತುಂಬಿಸಲು ಕ್ರಮ: ಕೆ. ಎಂ. ಶಿವಲಿಂಗೇಗೌಡ
ಅರಸೀಕೆರೆ: ಯಗಚಿ ನದಿಯಿಂದ ಕಾಚಿಘಟ್ಟ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿ ಪ್ರಸ್ತುತ ತಲೆದೋರಿರುವ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು. ಆದ್ಯತೆ ಮೇರೆಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಭರವಸೆ ನೀಡಿದ್ದಾರೆ.
ಕಾಚಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ಕೆ. ಎಂ. ಶಿವಲಿಂಗೇಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಇದೇ ವೇಳೆ ಪ್ರಜಾ ಸೇವಾ ಜನಾಂದೋಲನ ಸಭೆಯನ್ನು ನಡೆಸಿದ ಸಚಿವರು ಸ್ಥಳೀಯರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಪ್ರಯತ್ನ ನಡೆಸಿದರು. ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು.
ಹೇಮಾವತಿ ನದಿಯಿಂದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಅದು 68 ಹಳ್ಳಿಗೆ ಸಾಕಾಗದ ಕಾರಣ ಯಗಚಿ ನದಿಯಿಂದ ಕುಡಿಯುವ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಆದ್ಯತೆ ಮೇರೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲಾಗುವುದು. ಬಾಣಾವಾರ ಹೋಬಳಿಯ ಕೆರೆಗಳನ್ನು ತುಂಬಿಸಲು ಭದ್ರ ಮೇಲ್ದಂಡೆಯಿಂದ ನೀರು ಹರಿಸಲಾಗುವುದು. ಅರ್ಕೆರೆ ಕೆರೆಗೆ ನೀರು ತುಂಬಿಸುವುದರಿಂದ ಈ ಕ್ಷೇತ್ರದ ಸ್ಥಳೀಯರಿಗೆ ಹೆಚ್ಚು ಅನುಕೂಲವಾಗುತ್ತದೆ. ಹಾಗಾಗಿ ಅರ್ಕೆರೆ ತುಂಬಿಸುವ ಕೆಲಸವನ್ನು ಆದ್ಯತೆ ಮೇರೆಗೆ ಮಾಡಲಾಗುವುದು ಎಂದರು.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಜನ ತೃಪ್ತಿ ಹೊಂದಿದ್ದಾರೆ. ಮಹಿಳೆಯರು ಸ್ವಾವಲಂಬಿ ಗಳಾಗುತ್ತಿದ್ದಾರೆ. ನಾವು ಕೊಡುತ್ತಿರುವ ಸವಲತ್ತುಗಳಿಂದ ಎಲ್ಲ ವರ್ಗದ ಜನ ಸಂತೋಷದಿಂದಿದ್ದಾರೆ. ಪ್ರತಿ ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ ಆಗುತ್ತಿದೆ. ಗ್ರಾಮ ಸ್ವರಾಜ್ಯದ ಕನಸು ನನಸಾಗುತ್ತಿದೆ ಎಂದರು.


Click it and Unblock the Notifications
