Candidates Who Filled Nomination on 19th April: ನಾಮಪತ್ರ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಏಪ್ರಿಲ್ 18: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ಜೋರಾಗಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿಯಿದ್ದು, ಏಪ್ರಿಲ್ 19 ಬುಧವಾರ ರಾಜ್ಯದ ಪ್ರಮುಖ ನಾಯಕರು ಶಕ್ತಿ ಪ್ರದರ್ಶಣ, ರೋಡ್ ಶೋ, ಬೃಹತ್ ಮೆರವಣಿಗೆ, ಸಮಾವೇಶ, ರ್ಯಾಲಿ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ.
ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಏಪ್ರಿಲ್ 13 ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಏಪ್ರಿಲ್ 20 ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅಂದು ಅಮಾವಾಸ್ಯೆ ಇರುವ ಕಾರಣ ಉಳಿದ ರಾಜಕೀಯ ನಾಯಕರು ಇಂದೇ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಚಲನಚಿತ್ರ ನಟ ಸುದೀಪ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಜರಿದ್ದರು.
ವರುಣಾ: ನಾಮಪತ್ರ ಸಲ್ಲಿಸಿದ ಸಿದ್ದರಾಮಯ್ಯ
ವರುಣಾ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಇಂದು ನಂಜನಗೂಡಿನ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಇಂದು ಕಾರ್ಯಕರ್ತರ ಜೊತೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಎಂಬಿ ಪಾಟೀಲ್, ಆರ್‌ವಿ ದೇಶಪಾಂಡೆ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್‌ಗೆ ಸಾಥ್ ನೀಡಿದ್ದಾರೆ.
ಶಿಕಾರಿಪುರದಲ್ಲಿ ಬಿ. ವೈ.ವಿಜಯೇಂದ್ರ ನಾಮಪತ್ರ ಸಲ್ಲಿಕೆ
ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ಇಂದು ಎರಡನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಶಿಕಾರಿಪುರದಲ್ಲಿ ಬಹೃತ್ ಮೆರವಣಿಗೆ ಮೂಲಕ ಆಗಮಿಸಿ ಚುನಾವಣಾ ಕಚೇರಿಗೆ ಆಗಮಿಸಿದ ಬಿ. ವೈ. ವಿಜಯೇಂದ್ರ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಹಿರಿಯೂರು: ಕಾಂಗ್ರೆಸ್ ಅಭ್ಯರ್ಥಿ ಡಿ.ಸುಧಾಕರ್ ನಾಮಪತ್ರ ಸಲ್ಲಿಕೆ
ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಡಿ.ಸುಧಾಕರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಚುನಾವಣಾ ಕಚೇರಿಗೆ ಆಗಮಿಸಿದ ಸಚಿವ ಡಿ.ಸುಧಾಕರ್ ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷೇತರರಾಗಿ ಗೂಳಿಹಟ್ಟಿ ಡಿ.ಶೇಖರ್ ನಾಮಪತ್ರ ಸಲ್ಲಿಕೆ
ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೂಳಿಹಟ್ಟಿ ಡಿ ಶೇಖರ್ ಅವರು ಬಿಜೆಪಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡು ಬಿಜೆಪಿ ಸರ್ಕಾರದಲ್ಲಿ ಜವಳಿ ಸಚಿವರಾಗಿದ್ದ ಗೂಳಿಹಟ್ಟಿ ನಂತರ ಚುನಾವಣೆಯಲ್ಲಿ ಸೋಲು ಕಂಡಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದು ಉಮೇದುವಾರಿಕೆ ಸಲ್ಲಿಸಿದರು.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಮಹೇಶ್ ನಾಮಪತ್ರ ಸಲ್ಲಿಕೆ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಹೆಚ್ ಮಹೇಶ್ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಚುನಾವಣಾ ಕಚೇರಿಗೆ ಬಂದ ಗನ್ನಾಯಕನಹಳ್ಳಿ ಹೆಚ್ ಮಹೇಶ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಏಪ್ರಿಲ್ 19 ಬುಧವಾರ ವರುಣಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಲಿದ್ದಾರೆ. ಇನ್ನು ಶಿಗ್ಗಾಂವಿ ಕ್ಷೇತ್ರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಿಕಾರಿಪುರ ಕ್ಷೇತ್ರದಿಂದ ಬಿ.ವೈ ವಿಜಯೇಂದ್ರ, ಮುಧೋಳ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ, ಬೀಳಗಿ ಬಿಜೆಪಿ ಅಭ್ಯರ್ಥಿ ಸಚಿವ ಮುರುಗೇಶ ನಿರಾಣಿ, ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸೇರಿದಂತೆ ಹಲವು ನಾಯಕರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.












Click it and Unblock the Notifications