ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ: ರಾಜ್ಯದ 20 ಸ್ಥಳಗಳಲ್ಲಿ ನಮೋ ಪ್ರಚಾರ
ಬೆಂಗಳೂರು, ಏಪ್ರಿಲ್. 20: ವಿಧಾನಸಭಾ ಚುನಾವಣೆಯ ಭರ್ಜರಿ ತಯಾರಿಯಲ್ಲಿರುವ ಆಡಳಿತರೂಢ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಚುನಾವಣಾ ಅಖಾಡಕ್ಕೆ ಇಳಿಸಿ ಮತಬೇಟೆಗೆ ಸಜ್ಜಾಗಿದೆ. ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಪ್ರಚಾರ ನಡೆಸಲಿದ್ದಾರೆ.
ನಮೋ ಅಲೆಯಲ್ಲಿ ಹೆಚ್ಚು ಪ್ರಸಿದ್ಧವಾಗಿರುವ ಬಿಜೆಪಿ ಈ ಬಾರಿಯೂ ಮೋದಿಯವರನ್ನು ಅವಲಂಬಿಸಿರುವಂತೆ ಕಾಣುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಸುಮಾರು 20 ಸ್ಥಳಗಳಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದ್ದಾರೆ. ಪ್ರಧಾನಿಯವರ ಪ್ರಚಾರ ಕಾರ್ಯಕ್ರಮಗಳ ರೂಪುರೇಷೆ ಅಂತಿಮಗೊಳ್ಳುತ್ತಿದೆ ಎಂದಿದ್ದಾರೆ.

ಸುಮಾರು 20 ಸ್ಥಳಗಳಲ್ಲಿ ಪ್ರಧಾನಿ ಪ್ರಚಾರ ಮಾಡುವ ಎಲ್ಲಾ ಸಾಧ್ಯತೆಗಳಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ. "ಮೋದಿಯವರು ಪ್ರಚಾರ ಮಾಡುವ ಹೆಚ್ಚಿನ ಸ್ಥಳಗಳಲ್ಲಿ ಅವರು ಮೆರವಣಿಗೆ ಮತ್ತು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ ಮತ್ತು ಕೆಲವು ಕಡೆ ರೋಡ್ ಶೋಗಳು ಇರುತ್ತವೆ" ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವರ ಪ್ರಬಲ ತಂಡವು ಪಕ್ಷದ 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಕೇಂದ್ರ ಸಚಿವರಲ್ಲಿ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವಿಯಾ ಮತ್ತು ಪ್ರಲ್ಹಾದ್ ಜೋಶಿ ಸೇರಿದ್ದಾರೆ ಎಂದು ಪಕ್ಷವು ಬಿಡುಗಡೆ ಮಾಡಿದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ತಿಳಿಸಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಮತ್ತು ಅಸ್ಸಾಂ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಿಮಂತ ಬಿಸ್ವಾ ಶರ್ಮಾ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ.
ಇನ್ನು, ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿಯ ಪ್ರಬಲ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಸೇರಿದಂತೆ ಕೆಲವು ಸಚಿವರು ಮತ್ತು ರಾಜ್ಯದ ನಾಯಕರು ಕೂಡ ಪಟ್ಟಿಯಲ್ಲಿದ್ದಾರೆ.
ಇನ್ನು, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೇ 4 ರಂದು ಉಡುಪಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಪ್ರಧಾನಿ ಜೊತೆ ಬರುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಭೇಟಿಗಾಗಿ ನಗರದಲ್ಲಿ ಅದ್ಧೂರಿ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ ಎನ್ನಲಾಗಿದೆ.












Click it and Unblock the Notifications