ಮುಂದಿನ ಸಿಎಂ ಸಿದ್ದರಾಮಯ್ಯ ಆಗ್ಬೇಕು: ಡಿಕೆಶಿ ಗೂ ಕೇರ್ ಮಾಡದೇ ಬಹಿರಂಗ ಹೇಳಿಕೆ ಕೊಟ್ಟ ಕಾಂಗ್ರೆಸ್ ನಾಯಕರು
ಇನ್ನೇನು ಚುನಾವಣೆಗೆ ಎರಡು ತಿಂಗಳು ಮಾತ್ರ ಬಾಕಿ ಇರುವಾಗಲೇ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಹಿರಂಗವಾಗಿ ಕಾಂಗ್ರೆಸ್ ನಾಯಕರು ಇದೀಗ ಹೇಳಿಕೆ ನೀಡಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಮತ್ತಷ್ಟು ಕಾವು ಪಡೆದುಕೊಳ್ಳಲಿದೆ.
ಕೊಪ್ಪಳ,ಫೆಬ್ರವರಿ18: ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರು ಎಂಬಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕಾಗಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಶುರುವಾಗಿತ್ತು. ಈಗಾಗಲೇ ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದ್ದು, ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾರು ಸಿಎಂ ಎಂಬ ಬಗ್ಗೆ ಇಬ್ಬರು ನಾಯಕರ ಬೆಂಬಲಿಗರ ಬಹಿರಂಗ ಹೇಳಿಕೆಗಳಿಗೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಆದರೆ ಇದೀಗ ಮತ್ತೊಮ್ಮೆ ಅದು ಶುರುವಾಗಿದ್ದು, ಸಿದ್ದರಾಮಯ್ಯ ಅವರ ಬೆಂಬಲಿಗರು ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗೂ ಕೇರ್ ಮಾಡದೇ ಬಹಿರಂಗವಾಗಿಯೇ ಹೇಳಿಕೆಯನ್ನ ನೀಡುತ್ತಿದ್ದಾರೆ.
ಇನ್ನೇನು ಚುನಾವಣೆಗೆ ಎರಡು ತಿಂಗಳು ಮಾತ್ರ ಬಾಕಿ ಇರುವಾಗಲೇ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಹಿರಂಗವಾಗಿ ಕಾಂಗ್ರೆಸ್ ನಾಯಕರು ಇದೀಗ ಹೇಳಿಕೆ ನೀಡಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಮತ್ತಷ್ಟು ಕಾವು ಪಡೆದುಕೊಳ್ಳಲಿದೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಬೇಕು: ಬೈರತಿ ಸುರೇಶ್
ಸಿದ್ದರಾಮಯ್ಯ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅನೇಕ ಭಾಗ್ಯಗಳನ್ನು ಕೊಟ್ಟಿದ್ದಾರೆ. ಅವರು ಅತ್ಯಂತ ಪ್ರಾಮಾಣಿಕ ರಾಜಕಾರಣಿ. ಹಿಂದಿನ ಎಲ್ಲಾ ಅಭಿವೃದ್ಧಿ ಕೆಲಸಗಳು ಮರಳಿ ಬರಲು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದ್ದಾರೆ.
ಯಲಬುರ್ಗಾದಲ್ಲಿ ಶನಿವಾರ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಹಾಗೂ ಶಿಲಾಮಂಟಪ ಉದ್ಘಾಟನೆ ಬಳಿಕ ಮಾತನಾಡಿದ ಬೈರತಿ ಸುರೇಶ್ , ರಾಜ್ಯ ಅಭಿವೃದ್ಧಿ ಆಗಲು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದು ಸೂಕ್ತ ಎಂದು ಭಾಷಣದ ಮೇಜು ಕುಟ್ಟಿ ಹೇಳಿಕೆ ನೀಡಿದ್ದಾರೆ.

ಮರಳಿ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಮಾಡಬೇಕು:ರಾಘವೆಂದ್ರ ಹಿಟ್ನಾಳ್
ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೊಟ್ಟ ಅನೇಕ ಭಾಗ್ಯಗಳಿಂದ ಅಭಿವೃದ್ಧಿ ಕೆಲಸಗಳು ಆಗಿವೆ. ಮರಳಿ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಕೊಪ್ಪಳ ಕಾಂಗ್ರೆಸ್ ಶಾಸಕ ರಾಘವೆಂದ್ರ ಹಿಟ್ನಾಳ್ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ತರಲು ಎಲ್ಲರೂ ಕೈ ಜೋಡಿಸಬೇಕು ಈ ವೇಳೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು; ಬಸವರಾಜ ರಾಯರೆಡ್ಡಿ
ಯಾವ ವ್ಯಕ್ತಿ ಯಾವ ಪಕ್ಷದವರೇ ಇರಲಿ, ಒಳ್ಳೆಯ ಕೆಲಸ ಮಾಡಿದಾಗ ಅವರನ್ನು ಮೆಚ್ಚಿಕೊಳ್ಳಬೇಕು. ಜನಪರವಾಗಿ ಇರುವ, ಆರ್ಥಿಕ ಶಿಸ್ತು ಹೊಂದಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.

ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬರಬಾರದು: ಸಿದ್ದರಾಮಯ್ಯ
ಚುನಾವಣೆಗೆ ಮುಖ್ಯವಾಗಿ ಬೇಕಾಗಿರುವುದು ಅಭಿವೃದ್ದಿಯ ಕೆಲಸಗಳು. ಆದರೆ, ನಳಿನ್ ಕುಮಾರ್ ಕಟೀಲ್ ಅಭಿವೃದ್ದಿ ಬಿಟ್ಟು ಕಟೀಲ್, ಲವ್ ಜಿಹಾದ್ ಬಗ್ಗೆ ಮಾತನಾಡಿ ಅಂತಾ ಬಿಜೆಪಿ ಕಾರ್ಯಕರ್ತರಿಗೆ ಹೇಳುತ್ತಾರೆ. ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬರಬಾರದು ಎಂದು ಸಿದ್ದರಾಮಯ್ಯ ಹೇಳಿದರು.












Click it and Unblock the Notifications