ಸಾರ್ವಭೌಮತ್ವ ರಾಜ್ಯಕ್ಕೊಂದು, ದೇಶಕ್ಕೊಂದಾ?; ಸೋನಿಯಾ ಗಾಂಧಿ ಹೇಳಿಕೆ ವಿರುದ್ಧ ಅಣ್ಣಾಮಲೈ ಕಿಡಿ
2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ರಣಕಣ ಅಂತಿಮ ಹಂತ ತಲುಪಿದ್ದು, ಮತದಾನಕ್ಕೆ ಎರಡೇ ದಿನಗಳು ಬಾಕಿ ಉಳಿದಿವೆ. ಇದಕ್ಕೂ ಮುನ್ನ ರಾಜಕೀಯ ಪಕ್ಷಗಳು ಮತ್ತು ನಾಯಕರು ಮತದಾರರ ಮನ ಗೆಲ್ಲಲು ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದಾರೆ.
ಇದೇ ವೇಳೆ ರಾಜ್ಯ ಚುನಾವಣಾ ಅಖಾಡದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಅಬ್ಬರದ ಪ್ರಚಾರ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಕರ್ನಾಟಕದಲ್ಲೇ ಠಿಕಾಣಿ ಹೂಡಿ ಮತಬೇಟೆ ನಡೆಸಿದ್ದಾರೆ.

ಇನ್ನು 2023ರ ಕರ್ನಾಟಕ ಚುನಾವಣಾ ಅಖಾಡಕ್ಕೆ ಇದೇ ಮೊದಲ ಬಾರಿಗೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಚಾರ ನಡೆಸಿದರು. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಮಾವೇಶದಲ್ಲಿ ಪಾಲ್ಗೊಂಡ ಸೋನಿಯಾ ಗಾಂಧಿ ತಮ್ಮ ಏಕೈಕ ಪ್ರಚಾರ ಸಭೆಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರು.
ಸೋನಿಯಾ ಗಾಂಧಿ ವಿವಾದಾತ್ಮಕ ಹೇಳಿಕೆಯೇನು?
ಹುಬ್ಬಳ್ಳಿಯ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ್ದ ಸೋನಿಯಾ ಗಾಂಧಿ, ""ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಭಾರತೀಯ ಜನತಾ ಪಕ್ಷ (ಬಿಜೆಪಿ) ವನ್ನು ವಿಚಲಿತಗೊಳಿಸಿದೆ. ದೇಶದಲ್ಲಿ ದ್ವೇಷ ಹರಡುತ್ತಿರುವವರ ವಿರುದ್ಧ ಭಾರತ್ ಜೋಡೋ ಯಾತ್ರೆ ಮಾಡಲಾಗಿದೆ. ಇದರಿಂದ ಬಿಜೆಪಿಗೆ ಕಸಿವಿಸಿಯಾಗಿದೆ,'' ಎಂದು ಕಿಡಿಕಾರಿದ್ದರು.
ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸೋನಿಯಾ ಗಾಂಧಿ ಹೇಳಿಕೆಯನ್ನು ಹಂಚಿಕೊಂಡಿದ್ದು, " ಸೋನಿಯಾ ಗಾಂಧಿ ಅವರು 6.5 ಕೋಟಿ ಕನ್ನಡಿಗರಿಗೆ ದೊಡ್ಡ ಸಂದೇಶವನ್ನು ಕಳುಹಿಸಿದ್ದಾರೆ. ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಕಾಂಗ್ರೆಸ್ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ," ಎಂದು ಬರೆದುಕೊಂಡಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿ ಸಮಾವೇಶದಲ್ಲಿ ಮಾತನಾಡಿರುವ ಅಂಶಗಳನ್ನು ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇದರ ಬೆನ್ನಲ್ಲೇ ತಮಿಳುನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಅವರು ಕಾಂಗ್ರೆಸ್ ವಿರುದ್ಧ ಕಟುವಾಗಿ ಟೀಕಿಸಿದ್ದಾರೆ.
ಸೋನಿಯಾ ಗಾಂಧಿ ಅವರ ಕರ್ನಾಟಕಕ್ಕೆ ಸಾರ್ವಭೌಮತ್ವ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ""ರಾಜ್ಯಕ್ಕೊಂದು, ದೇಶಕ್ಕೊಂದು ಸಾರ್ವಭೌಮತ್ವ ಇರಲ್ಲ. ಇಡೀ ದೇಶಕ್ಕೆ ಒಂದೇ ಸಾರ್ವಭೌಮತ್ವ. ದೇಶ ವಿಭಜನೆ ಮಾತುಗಳನ್ನಾಡಿ ನಿಮ್ಮನ್ನು ನೀವೇ ಅಪಹಾಸ್ಯ ಮಾಡಿಕೊಳ್ಳುವುದನ್ನು ನಿಲ್ಲಿಸಿ,'' ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಅಣ್ಣಾಮಲೈ ಕಿಡಿ
ಸೋನಿಯಾ ಗಾಂಧಿ ಹೇಳಿಕೆಗೆ ವಾಗ್ದಾಳಿ ನಡೆಸಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, "ನಿಷೇಧಿತ ಪಿಎಫ್‌ಐ ಜೊತೆ ಕೈ ಜೋಡಿಸಿರುವ ಕಾಂಗ್ರೆಸ್ ಪಕ್ಷ, ಕರ್ನಾಟಕದಲ್ಲಿ ಚುನಾವಣಾ ಲಾಭಕ್ಕಾಗಿ ಎಸ್‌ಡಿಪಿಐಯಂತಹ ಪಕ್ಷಗಳೊಂದಿಗೆ ಕೈ ಜೋಡಿಸಿವೆ," ಎಂದು ಗಂಭೀರವಾಗಿ ಆರೋಪಿಸಿದರು.

"ಉಗ್ರರಿಗೆ ಹಣಕಾಸು ನೆರವು ನೀಡುವ ಕಾರಣಕ್ಕಾಗಿ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ನಡೆಸಿ ಅಭ್ಯರ್ಥಿಗಳಿಗೆ ಬೆಂಬಲ ನೀಡುವವರು ಸಾರ್ವಭೌಮತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ದಯವಿಟ್ಟು ನಿಮ್ಮನ್ನು ನೀವು ಅಪಹಾಸ್ಯ ಮಾಡಿಕೊಳ್ಳುವುದನ್ನು ನಿಲ್ಲಿಸಿ," ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಇನ್ನು ಕಾಂಗ್ರೆಸ್ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಹಲವು ನೆಟ್ಟಿಗರು ಸೋನಿಯಾ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇದೀಗ ಚುನಾವಣೆಗಾಗಿ ಕರ್ನಾಟಕವನ್ನು ಕಾಂಗ್ರೆಸ್ ಸಾರ್ವಭೌಮ ಮಾಡಲು ಹೊರಟಿದೆ. ಭಾರತ ದೇಶ ಸಾರ್ವಭೌಮವೇ? ಅಥವಾ ಅದರ ಪ್ರದೇಶದೊಳಗಿನ ರಾಜ್ಯವೂ ಸಹ ಸಾರ್ವಭೌಮವೇ? ಕಾಂಗ್ರೆಸ್ ಈಗ ಮತ್ತೆ ಭಾರತವನ್ನು ವಿಭಜಿಸಲು ಹೊರಟಿದೆಯೇ? ಎಂದು ಸಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಿದ್ದಾರೆ.












Click it and Unblock the Notifications