Karnataka Election: ಜಿಪಂ-ತಾಪಂ ಚುನಾವಣೆಗೆ ಬಿಗ್ ಅಪ್‌ಡೇಟ್; ಜನವರಿ 15ರೊಳಗೆ ಚುನಾವಣೆ ಖಚಿತ: ಈಶ್ವರ ಖಂಡ್ರೆ
Karnataka Election: ರಾಜ್ಯದಲ್ಲಿ ಬಹುದಿನಗಳಿಂದ ಬಾಕಿ ಉಳಿದಿರುವ ಜಿಲ್ಲಾ ಪಂಚಾಯಿತಿ (ಜಿಪಂ) ಹಾಗೂ ತಾಲೂಕು ಪಂಚಾಯಿತಿ (ತಾಪಂ) ಚುನಾವಣೆಗಳನ್ನು ಮುಂಬರುವ ಜನವರಿ 15ರೊಳಗಾಗಿ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಬುಧವಾರ ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಪಂ ಮತ್ತು ತಾಪಂ ಕ್ಷೇತ್ರಗಳ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ ಎಂದು ಹೇಳಿದರು. ನಾಳೆಯೊಳಗೆ ಪ್ರಾಥಮಿಕ ಕರಡು ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದ್ದು, ಬಳಿಕ ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ತಿಳಿಸಿದರು.

ಆಕ್ಷೇಪಣೆಗಳ ಪರಿಶೀಲನೆ ಪೂರ್ಣಗೊಂಡ ನಂತರ ರಾಜ್ಯ ಚುನಾವಣಾ ಆಯೋಗಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸಲಾಗುವುದು. ಚುನಾವಣೆಯನ್ನು ನಡೆಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ್ದಾಗಿರುತ್ತದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.
ಜಿಪಂ-ತಾಪಂ ಚುನಾವಣೆ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ
ಮೊದಲ ಹಂತದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ನಂತರ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲಾಗುವುದು ಎಂದು ಈಶ್ವರ ಖಂಡ್ರೆ ಮಾಹಿತಿ ನೀಡಿದರು. ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ಸರ್ಕಾರ ಬದ್ಧವಾಗಿದ್ದು, ಅಗತ್ಯವಿರುವ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದೆ ಎಂದರು.
ವರ್ಷಾಂತ್ಯದೊಳಗೆ ಜಿಪಂ ಮತ್ತು ತಾಪಂ ಚುನಾವಣೆ ನಡೆಯುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸದ್ಯ ರಾಜ್ಯದಲ್ಲಿ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಒದಗಿಸುವಲ್ಲಿ ವಿಳಂಬವಾದರೆ, ಚುನಾವಣೆಗಳು ಜನವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
Karnataka Election: ಸಚಿವ ಸಂಪುಟದಲ್ಲಿ ಚರ್ಚೆ
ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸಭೆಯಲ್ಲಿಯೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಚರ್ಚೆ ನಡೆದಿದೆ. ಚುನಾವಣಾ ಪ್ರಕ್ರಿಯೆಯ ಮುಂದಿನ ಹಂತಗಳು ಕರಡು ಅಧಿಸೂಚನೆ, ಆಕ್ಷೇಪಣೆಗಳ ಪರಿಶೀಲನೆ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಕೆಯ ಬಳಿಕ ಮುಂದುವರಿಯಲಿವೆ ಎಂದು ಸಚಿವರು ತಿಳಿಸಿದರು.
Karnataka Election: ಶ್ರೀನಿವಾಸ ಪೂಜಾರ್ ಗೆ ಮಾಹಿತಿಯ ಕೊರತೆ
ರಾಜ್ಯಕ್ಕೆ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ 2025-26ನೇ ಸಾಲಿನಲ್ಲಿ 2186.20 ಕೋಟಿ ರೂ. ಬಿಡುಗಡೆ ಆಗದಿರುವುದಕ್ಕೆ ಚುನಾವಣೆ ನಡೆಯದಿರುವುದು ಕಾರಣವಲ್ಲ, ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮಾಹಿತಿಯ ಕೊರತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ಕಳೆದ ಫೆಬ್ರವರಿ, ಮಾರ್ಚ್ ವರೆಗೆ ಚುನಾಯಿತ ಪಂಚಾಯತಿಗಳಿದ್ದವು. ಚುನಾವಣೆ ನಡೆಸದ ಕಾರಣಕ್ಕೆ ಹಣ ಬಿಡುಗಡೆ ಆಗಿಲ್ಲ ಎಂಬ ಸಂಸದರ ಹೇಳಿಕೆ ಸರಿಯಲ್ಲ. ಕೇಂದ್ರ ಸರ್ಕಾರ ತಾಂತ್ರಿಕ ಕಾರಣ ಒಡ್ಡಿ, ಹಣ ಬಿಡುಗಡೆ ಮಾಡದೆ ರಾಜ್ಯಕ್ಕೆ ಘೋರ ಅನ್ಯಾಯ ಮಾಡಿದೆ ಎಂದು ತಿಳಿಸಿದರು. ಸಂಸದರು ಈ ರೀತಿ ಜನರಿಗೆ ತಪ್ಪು ಮಾಹಿತಿ ನೀಡುವುದನ್ನು ಬಿಟ್ಟು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಕೊಡಿಸಲು ಪ್ರಯತ್ನಿಸಲಿ ಎಂದು ತಿಳಿಸಿದರು.
ತೆರಿಗೆ ನಿರ್ಧರಣೆ ಹಾಗೂ ಇ-ಸ್ವತ್ತು 2.0 ತಂತ್ರಾಂಶದಿಂದ ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿನ ಆಸ್ತಿಗಳನ್ನು ಕೈಬಿಡುವ ಬಗ್ಗೆ ಕಳೆದ ಆಗಸ್ಟ್ 13ರಂದು ಹೊರಡಿಸಲಾಗಿರುವ ಸುತ್ತೋಲೆಗೆ ತಾತ್ಕಾಲಿಕ ತಡೆ ನೀಡುವುದಾಗಿ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಉಭಯ ಸದನಗಳಲ್ಲಿ ಅನುಮೋದನೆಯಾಗಿ, ರಾಜ್ಯಪಾಲರ ಅಂಗೀಕಾರ ಪಡೆದ ಕಾಯಿದೆಗೆ ಸಂಬಂಧಿಸಿದಂತೆ ಈ ಸುತ್ತೋಲೆ ಹೊರಡಿಸಲಾಗಿತ್ತು. ಆದಾಗ್ಯೂ ಮುಖ್ಯಮಂತ್ರಿಗಳು ಸದನದಲ್ಲಿ ಭರವಸೆ ನೀಡಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
Download

Click it and Unblock the Notifications
