141: ರಾಷ್ಟ್ರೀಯ ಮಾಧ್ಯಮದ ಕ್ಯಾಮೆರಾ ಮುಂದೆ ಡಿಕೆ ಶಿವಕುಮಾರ್ ಪ್ರೆಡಿಕ್ಷನ್- ಮಹತ್ವದ ಮಾಹಿತಿ ಬಿಚ್ಚಿಟ್ಟ ಕನಕಪುರ ಬಂಡೆ
ನವದೆಹಲಿ, ಏಪ್ರಿಲ್ 07: ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು 'ಇಂಡಿಯಾ ಟುಡೇ' ಮಾಧ್ಯಮದ ಸಂಪಾದಕ ರಾಜದೀಪ್ ಸರ್ದೇಸಾಯಿ ಅವರೊಂದಿಗಿನ ವಿಶೇಷ ಸಂದರ್ಶನದಲ್ಲಿ ಮಹತ್ವದ ಮಾಹಿತಿಗಳನ್ನು ಬಿಟ್ಟಿಟ್ಟಿದ್ದಾರೆ. ಮೇ 10ರಂದು ನಡೆಯಲಿರುವ ಚುನಾವಣೆ, ಆಡಳಿತಾರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ತಮ್ಮ ಪಕ್ಷ ತೆಗೆದುಕೊಳ್ಳುವ ಸೀಟುಗಳ ಬಗ್ಗೆ ಶಿವಕುಮಾರ್ ಮಾತನಾಡಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಗೆಲ್ಲುವ ಸ್ಥಾನಗಳ ನಿಖರವಾದ ಸಂಖ್ಯೆಯನ್ನು ಡಿಕೆ ಶಿವಕುಮಾರ್ ನೀಡಿದ್ದಾರೆ. ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ 224 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ರಾಜ್ಯದಲ್ಲಿ ಸರ್ಕಾರ ರಚಿಸಲು ಬೇಕಾದ 113 ಕ್ಕಿಂತ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಡಿಕೆಶಿ ತಿಳಿಸಿದ್ದಾರೆ.
ಮುಂಬರುವ ಚುನಾವಣೆ ನಿಮ್ಮ ಪಾಲಿಗೆ 'ಮಾಡು ಇಲ್ಲವೇ ಮಡಿಯೇ?' ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಕರ್ನಾಟಕದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಒತ್ತಿ ಹೇಳಿದ್ದಾರೆ. ಅತಂತ್ರ ಫಲಿತಾಂಶದ ಬಂದರೆ ಜೆಡಿಎಸ್ ಜೊತೆ ಕೈಜೋಡಿಸುವ ಸಾಧ್ಯತೆಯನ್ನು ಅಲ್ಲಗಳೆದ ಅವರು, 'ಅಂತಹ ಪರಿಸ್ಥಿತಿ ಬರುವುದಿಲ್ಲ' ಎಂದಿದ್ದಾರೆ.
ಕರ್ನಾಟಕ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಇದರೊಂದಿಗೆ ಪಕ್ಷವು ಇದುವರೆಗೆ 166 ಅಭ್ಯರ್ಥಿಗಳನ್ನು ಬಿಡುಗಡೆ ಮಾಡಿದೆ. ಘೋಷಣೆ ಮಾಡಿರುವ ಅಭ್ಯರ್ಥಿಗಳ ಪರ ಇಡೀ ಪಕ್ಷ ಒಗ್ಗಟ್ಟಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ತಮ್ಮ ಮತ್ತು ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಅಭ್ಯರ್ಥಿಗಳು ಭಿನ್ನಾಭಿಪ್ರಾಯ ಹೊಂದಿದ್ದಾರೆ ಎಂಬುದನ್ನು ಅವರು ನಿರಾಕರಿಸಿದ್ದಾರೆ. ಅವರಿಬ್ಬರೂ ಯಾವುದೇ ನಿರ್ದಿಷ್ಟ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಒತ್ತಾಯಿಸುತ್ತಿಲ್ಲ. 'ನಮಗೆ ಕಾಂಗ್ರೆಸ್ ಅಭ್ಯರ್ಥಿಗಳು ಬೇಕು' ಎಂದು ಡಿಕೆಶಿ ಹೇಳಿದ್ದಾರೆ.
ಇದಲ್ಲದೆ, ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತಮ್ಮನ್ನು ತಾವು ಬಿಂಬಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, ಪಕ್ಷದ ಹೈಕಮಾಂಡ್ ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಆದರೆ, ಅವಕಾಶ ಸಿಕ್ಕರೆ, ಅದನ್ನು ನಾನು ಸ್ವಾಗತಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ರಾಜಕಾರಣಿಗಳಾದ ಎಲ್ಲರೂ ಮುಖ್ಯಮಂತ್ರಿಯಾಗಲು ಹಾತೊರೆಯಬೇಕು ಎಂದೂ ಅವರು ತಿಳಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಬಿಜೆಪಿ ಕೇಂದ್ರ ನಾಯಕತ್ವ ಸೂಚಿಸಿತು. ಅವರು ಒಲ್ಲದ ಮನಸ್ಸಿನಿಂದಲೇ ಕೆಳಗಿಳಿದರು. ಯಡಿಯೂರಪ್ಪ ಅವರು ತುಂಬಾ ನೊಂದಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡ ನಂತರ ಅವರು ಹಾಕಿದ ಕಣ್ಣೀರನ್ನು ಜನರು ಮರೆಯುವುದಿಲ್ಲ ಎಂದೂ ತಿಳಿಸಿದರು.

ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಡಿ ಕೆ ಶಿವಕುಮಾರ್ ಅವರು ಕನಕಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ವರುಣಾದಿಂದ ಕಣಕ್ಕಿಳಿದಿದ್ದಾರೆ. ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ಗುರುವಾರ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಮತ್ತು ಜೆಡಿಎಸ್‌ನಿಂದ ಸೇರ್ಪಡೆಗೊಂಡ ಕೆಲವರಿಗೆ ಪಕ್ಷವು ಅವಕಾಶ ಕಲ್ಪಿಸಿದೆ. ಪಟ್ಟಿಯ ಪ್ರಕಾರ, ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷವು ಕೆಲವು ಕ್ಷೇತ್ರಗಳಲ್ಲಿ ಹೊಸ ಮುಖಗಳನ್ನು ಕೂಡ ಕಣಕ್ಕಿಳಿಸಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಾಬುರಾವ್ ಚಿಂಚನಸೂರ್ ಅವರು ಯಾದಗಿರಿ ಜಿಲ್ಲೆಯ ಗುರುಮಿಟ್‌ಕಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.












Click it and Unblock the Notifications