Kichcha Sudeep Campaign: ಕೆಲವು ಕಾಂಗ್ರೆಸ್ ಅಭ್ಯರ್ಥಿಗಳ ಪರವೂ ಕಿಚ್ಚ ಸುದೀಪ್ ಪ್ರಚಾರ?
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಮತದಾರರ ಮನಗೆಲ್ಲಲು ನಾನಾ ಕಸರತ್ತು ನಡೆಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಸಿನಿಮಾ ತಾರೆಯರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಅದರಲ್ಲೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕಳೆದ ಮೂರು ದಿನಗಳಿಂದ ಸತತವಾಗಿ ರೋಡ್ ಶೋ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಮೊದಲ ದಿನ ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ನಡೆಸಿದರು.

ಎರಡನೇ ದಿನದಲ್ಲಿ ಹಾವೇರಿ ಮತ್ತು ಧಾರವಾಡ ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿಗಳಿಗೆ ಮತ ಕೇಳಿದರು. ಎಲ್ಲಿ ಹೋದರೂ ಕಿಚ್ಚನಿಗೆ ಕಾರ್ಯಕರ್ತರಿಂದ ಮತ್ತು ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿದೆ.
ಸ್ಯಾಂಡಲ್‌ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಸದ್ಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೇವಲ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಆಪ್ತರಾಗಿರುವ ಕಿಚ್ಚ ಸುದೀಪ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು.
ಇನ್ನು ಬಿಜೆಪಿ ಪರವಾಗಿ ಹಲವು ಸ್ಯಾಂಡಲ್‌ವುಡ್ ಸಿನಿಮಾ ನಟರು ಪ್ರಚಾರ ನಡೆಸುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಧಾನಸಭಾ ಚುನಾವಣೆಯಲ್ಲಿ ಕೆಲವು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಕಿಚ್ಚ ಸುದೀಪ್ ಒಪ್ಪಿದ್ದಾರೆ ಎಂದು ಹೇಳಿದ್ದಾರೆ.

ಸದ್ಯ ಸುದೀಪ್ ಅವರು ಕರ್ನಾಟಕ ಚುನಾವಣಾ ಪ್ರಚಾರ ಕಣದಲ್ಲಿದ್ದು, ನೆಚ್ಚಿನ ನಟನನ್ನು ನೋಡಲು ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ಉರಿ ಬಿಸಿಲಿನಲ್ಲಿಯೂ ಕಿಚ್ಚ ಬಿರುಸಿನಿಂದ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.
ಕಿಚ್ಚ ಸುದೀಪ್ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಈ ಹೇಳಿಕೆ ವೈರಲ್ ಆಗಿದೆ. ಇದನ್ನು ತಿಳಿದ ನೆಟ್ಟಿಗರೂ ಹಾಗೂ ಕಿಚ್ಚನ ಅಭಿಮಾನಿಗಳು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಪಕ್ಷವನ್ನು ಸೇರಿಲ್ಲ. ಆದರೆ ಅವರು ರಾಜಕೀಯ ಕ್ಷೇತ್ರದಲ್ಲಿರುವವರೊಂದಿಗೆ ಸ್ನೇಹ ಸಂಬಂಧ ಹೊಂದಿದ್ದಾರೆ. ಸುದೀಪ್ ಅವರು ಕೆಲವು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ. ಅದು ಯಾರ ಎನ್ನುವುದರ ಬಗ್ಗೆ ಈಗ ಮಾತನಾಡುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೇವಲ ಬಿಜೆಪಿ ಅಭ್ಯರ್ಥಿಗಳ ಪರ ಮಾತ್ರ ಪ್ರಚಾರ ಮಾಡುವುದಾಗಿ ಹೇಳಿದ್ದ ಕಿಚ್ಚ ಸುದೀಪ್ ನಿಜಕ್ಕೂ ಕಾಂಗ್ರೆಸ್ನ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಾರಾ ಎನ್ನುವುದನ್ನು ಕುತೂಹಲ ಮೂಡಿಸಿದೆ.
ಇನ್ನು ಶುಕ್ರವಾರದಂದು ಗದಗ ಕ್ಷೇತ್ರದಲ್ಲಿ ಕಿಚ್ಚನ ಅಬ್ಬರ ಜೋರಾಗಿತ್ತು. ಗದಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಪರ ಭರ್ಜರಿ ಪ್ರಚಾರ ನಡೆಸಿದರು. ನೆಚ್ಚಿನ ನಟನನ್ನು ಕೇವಲ ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲದೆ, ಕಿಚ್ಚನ ಅಭಿಮಾನಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು.












Click it and Unblock the Notifications