Karnataka Elections; ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಿದ ಕಾಂಗ್ರೆಸ್
ಕರ್ನಾಟಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಿದ್ದಾರೆ.
ಬೆಂಗಳೂರು, ಫೆಬ್ರವರಿ 07; ಕರ್ನಾಟಕದ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿಯಲು ತಂತ್ರಗಳನ್ನು ರೂಪಿಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯೂ ಆರಂಭವಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸ್ಕ್ರೀನಿಂಗ್ ಕಮಿಟಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ಮೋಹನ್ ಪ್ರಕಾಶ್ ಅವರು ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷರಾಗಿದ್ದಾರೆ.

ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ಸ್ಕ್ರೀನಿಂಗ್ ಕಮಿಟಿಯಲ್ಲಿ ನೀರಜ್ ದಾಂಗಿ, ಮೊಹಮೊದ್ ಜವೇದ್, ಸಪ್ತಗಿರಿ ಉಲ್ಕಾ ಸದಸ್ಯರಾಗಿದ್ದಾರೆ.
ಸ್ಕ್ರೀನಿಂಗ್ ಕಮಿಟಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಬಿ. ಕೆ. ಹರಿಪ್ರಸಾದ್, ಎಂ. ಬಿ. ಪಾಟೀಲ್, ಡಾ. ಜಿ. ಪರಮೇಶ್ವರ, ಎಐಸಿಸಿಯ ರಾಜ್ಯ ಉಸ್ತುವಾರಿ ಕಾರ್ಯದರ್ಶಿಗಳು ಸದಸ್ಯರಾಗಿದ್ದಾರೆ.
ಪ್ರತಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಕಟವಾದಾಗಲೂ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ರಚನೆ ಮಾಡುತ್ತದೆ. ರಾಜ್ಯ ಘಟಕದಿಂದ ಬಂದ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಕಾರ್ಯವನ್ನು ಸ್ಕ್ರೀನಿಂಗ್ ಕಮಿಟಿ ಮಾಡುತ್ತದೆ.
ಸ್ಕ್ರೀನಿಂಗ್ ಕಮಿಟಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳಿಸುತ್ತದೆ. ಅಲ್ಲಿ ಚರ್ಚಿಸಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ಧಗೊಳಿಸಲಾಗುತ್ತದೆ.
ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ; ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಪಕ್ಷದ ಟಿಕೆಟ್‌ಗಾಗಿ ಭಾರೀ ಪೈಪೋಟಿ ಇದೆ, ಕೆಲವು ಕ್ಷೇತ್ರದಲ್ಲಿ 5ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ.
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಈ ತಿಂಗಳ ಅಂತ್ಯದಲ್ಲಿ ವರಿಷ್ಠರ ಕೈ ಸೇರುವ ಸಾಧ್ಯತೆ ಇದೆ. 120ಕ್ಕೂ ಅಧಿಕ ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ ಎಂಬ ಮಾಹಿತಿ ಇದೆ.
ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಚುನಾವಣಾ ಸಮಿತಿಯ ಮೊದಲ ಸಭೆ ಫೆಬ್ರವರಿ 2ರಂದು ನಡೆದಿತ್ತು. ಈ ಸಭೆಯಲ್ಲಿ 140 ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ತೀರ್ಮಾನಿಸಲಾಗಿತ್ತು.
ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದರೆ ಗೊಂದಲ ಉಂಟಾಗಬಹುದು ಎಂಬ ಕಾರಣಕ್ಕೆ ಇನ್ನೂ ಅಂತಿಮಗೊಳಿಸಿಲ್ಲ. ಡಿ. ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿದ ಬಳಿಕ ಅಭ್ಯರ್ಥಿಗಳ ಪಟ್ಟಿ ದೆಹಲಿಗೆ ರವಾನೆಯಾಗಲಿದೆ.
ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಟಿಕೆಟ್ ಪಡೆಯಲು ಡಿ. ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮೇಲೆ ಒತ್ತಡ ಹಾಕುತ್ತಿದ್ದಾರೆ. ಗೆಲುವಿನ ಮಾನದಂಡವನ್ನು ಹೈಕಮಾಂಡ್ ಪರಿಗಣಿಸಲಿದೆ, ನಿಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಿ, ಟಿಕೆಟ್ ಪಡೆಯಿರಿ ಎಂಬ ಸೂಚನೆಯನ್ನು ನೀಡಲಾಗಿದೆ.
ರಾಜ್ಯದ ನಾಯಕರು ಟಿಕೆಟ್ ಆಕಾಂಕ್ಷಿಗಳಿಂದ ತಪ್ಪಿಸಿಕೊಳ್ಳಲು ಹೈಕಮಾಂಡ್ ನಾಯಕರ ಕಡೆ ಕೈ ತೋರಿಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರು ಮಲ್ಲಿಕಾರ್ಜುನ ಖರ್ಗೆ ಆಗಿರುವುದರಿಂದ ರಾಜ್ಯದ ರಾಜಕೀಯದ ಅರಿವು ಚೆನ್ನಾಗಿದೆ.
ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಬಳಿ ಟಿಕೆಟ್ ಭರವಸೆ ಸಿಗದಿದ್ದರೆ ಆಕಾಂಕ್ಷಿಗಳು ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿ ಮಾಡಲು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಯಾರಿಗೆ ಟಿಕೆಟ್ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಗೆಲುವಿನ ಮಾನದಂಡಗಳೇನು? ಎಂಬುದು ಇನ್ನೂ ನಿಗೂಢವಾಗಿದೆ. ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಲಿದೆ ಎಂಬ ವರದಿಗಳು ಮಾಧ್ಯಮಗಳಲ್ಲಿ ಬರುತ್ತಿದೆ.












Click it and Unblock the Notifications