ಕಾಂಗ್ರೆಸ್‌ನಿಂದ ಉಪ ಮುಖ್ಯಮಂತ್ರಿಗಳು ಎಷ್ಟು?
ಬೆಂಗಳೂರು, ಮೇ 22 : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕರ್ನಾಟಕದಲ್ಲಿ ಮೇ 23ರಂದು ಅಸ್ತಿತ್ವಕ್ಕೆ ಬರಲಿದೆ. ಈಗ ಉಪ ಮುಖ್ಯಮಂತ್ರಿ ಹುದ್ದೆ ಬಗ್ಗೆ ಚರ್ಚೆ ಆರಂಭವಾಗಿದೆ. ಒಬ್ಬರನ್ನು ಮಾತ್ರ ಡಿಸಿಎಂ ಆಗಿ ನೇಮಕ ಮಾಡಲು ಜೆಡಿಎಸ್ ಬಯಸಿದೆ.
ಸರ್ಕಾರ ರಚನೆಗೆ ಜೆಡಿಎಸ್‌ಗೆ ಬೇಷರತ್ ಬೆಂಬಲ ನೀಡಿರುವ ಕಾಂಗ್ರೆಸ್ ಉಪ ಮುಖ್ಯಮಂತ್ರಿ ಹುದ್ದೆಗೆ ಇಬ್ಬರು ಶಾಸಕರ ಹೆಸರನ್ನು ಸೂಚಿಸಿದೆ. ದಲಿತ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ಇಬ್ಬರನ್ನು ಉಪ ಮುಖ್ಯಮಂತ್ರಿ ಮಾಡಬೇಕು ಎಂಬುದು ಕಾಂಗ್ರೆಸ್ ಬೇಡಿಕೆ.
ಬುಧವಾರ ಸಂಜೆ 4.30ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲಿಂಗಾಯತ ಅಥವ ದಲಿತ ಸಮುದಾಯಕ್ಕೆ ಸೇರಿದ ಒಬ್ಬರನ್ನು ಉಪ ಮುಖ್ಯಮಂತ್ರಿ ಮಾಡೋಣ ಎಂದು ಜೆಡಿಎಸ್ ಹೇಳಿದೆ.

ಮೊದಲು ಸ್ಪೀಕರ್ ಪಟ್ಟಕ್ಕಾಗಿ ಜೆಡಿಎಸ್ ಬೇಡಿಕೆ ಇಟ್ಟಿತ್ತು. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಭೇಟಿಯ ವೇಳೆ ಸ್ಪೀಕರ್ ಆಯ್ಕೆ ಕುರಿತು ಚರ್ಚೆ ನಡೆದಿದೆ. ನಂತರ ಸ್ಪೀಕರ್ ಪಟ್ಟವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಎಚ್.ಡಿ.ಕುಮಾರಸ್ವಾಮಿ ಒಪ್ಪಿಗೆ ನೀಡಿದ್ದಾರೆ.
ಮೊದಲು ಎಚ್.ಡಿ.ಕುಮಾರಸ್ವಾಮಿ ಅವರು ಮಾತ್ರ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ, ಈಗ ಕೆಲವು ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉಪ ಮುಖ್ಯಮಂತ್ರಿಯಾಗುವ ಹಿರಿಯ ನಾಯಕರು ಬುಧವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಇಂದು ಸಂಜೆ ರೆಸಾರ್ಟ್‌ನಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರ ಸಭೆ ನಡೆಯಲಿದೆ. ಯಾರು ಪ್ರಮಾಣ ವಚನ ಸ್ವೀಕಾರ ಮಾಡಬೇಕು? ಎಂದು ರಾತ್ರಿ ವೇಳೆಗೆ ಅಂತಿಮಗೊಳ್ಳುವ ಸಾಧ್ಯತೆ ಇದೆ.
ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಹೆಸರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ಅಂತಿಮಗೊಳಿಸುವ ಸಾಧ್ಯತೆ ಇದೆ. ಉತ್ತರ ಕರ್ನಾಟಕ ಭಾಗದ ಪ್ರಬಲ ನಾಯಕ, ಲಿಂಗಾಯತ ಸಮಯದಾಯಕ್ಕೆ ಸೇರಿದ ಎಂ.ಬಿ.ಪಾಟೀಲ ಅವರ ಹೆಸರು ಡಿಸಿಎಂ ಹುದ್ದೆಗೆ ಕೇಳಿಬರುತ್ತಿದೆ.












Click it and Unblock the Notifications