Karnataka Elections: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಹೆಚ್ಚಿದ ಒತ್ತಡ- ಬಿಎಸ್‌ವೈ, ಬೊಮ್ಮಾಯಿ ಜೊತೆ ನಡ್ಡಾ ಹೈವೋಲ್ಟೇಜ್ ಚರ್ಚೆ
ಬೆಂಗಳೂರು, ಏಪ್ರಿಲ್ 08: ಕರ್ನಾಟಕ ವಿಧಾನಸಭಾ ಚುನಾವಣೆಗೆ ( Karnataka Assembly Elections 2023 ) ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಭೆಗೆ ಒಂದು ದಿನ ಬಾಕಿ ಇದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ( JP Nadda ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Basavaraj Bommai ) ಮತ್ತು ಬಿ ಎಸ್ ಯಡಿಯೂರಪ್ಪ ( BS Yediyurappa ) ಸೇರಿದಂತೆ ಪ್ರಮುಖ ರಾಜ್ಯ ನಾಯಕರೊಂದಿಗೆ ಸಂಭಾವ್ಯ ಹೆಸರುಗಳ ಕುರಿತು ಶನಿವಾರ ಚರ್ಚೆ ನಡೆಸಿದರು.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10ರಂದು ಚುನಾವನೆ ನಡೆಯಲಿದೆ. ಇದಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ ಸಂಸದೀಯ ಮಂಡಳಿ ಭಾನುವಾರ ಸಭೆ ಸೇರಲಿದೆ.

ಸಭೆ ಆರಂಭಗೊಳ್ಳುವ ಮುನ್ನ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಎಲ್ಲಾ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸುತ್ತೇವೆ ಎಂದರು. ಜಿಲ್ಲೆ ಮತ್ತು ಕ್ಷೇತ್ರವಾರು ವಿವರಗಳು ಮತ್ತು ಇತ್ತೀಚಿನ ಸಮೀಕ್ಷೆಯ ಫಲಿತಾಂಶಗಳು ನಮ್ಮ ಬಳಿ ಇವೆ, ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ನಾವು ರಾಷ್ಟ್ರೀಯ ನಾಯಕರೊಂದಿಗೆ ವಿವರವಾದ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ ಬಿಜೆಪಿ 224 ಸ್ಥಾನಗಳಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ.
ಇಡೀ ಪಟ್ಟಿಯನ್ನು ಒಂದೇ ಬಾರಿಗೆ ಪ್ರಕಟಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಕೆಲವು ಹೆಸರುಗಳನ್ನು ಹೊರತುಪಡಿಸಿ ಉಳಿದವುಗಳನ್ನು ಮಂಡಳಿಯ ಒಪ್ಪಿಗೆ ಪಡೆದ ನಂತರ ಪ್ರಕಟಿಸಬಹುದು ಎಂದು ಹೇಳಿದರು.

ಭಾನುವಾರ ಸಂಜೆ 5 ಗಂಟೆಗೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ನಡ್ಡಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ವಿಧಾನಸಭಾ ಚುನಾವಣೆಗೆ ಬಿಜೆಪಿ ಉಸ್ತುವಾರಿಯಾಗಿರುವ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಮನ್ಸುಖ್ ಮಾಂಡವಿಯಾ ಹಾಗೂ ಪಕ್ಷದ ಹಿರಿಯ ನಾಯಕ ಅರುಣ್ ಸಿಂಗ್ ಭಾಗವಹಿಸಿದ್ದರು.
ಬೊಮ್ಮಾಯಿ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲದೆ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ ಟಿ ರವಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣೆಗೆ ತಮ್ಮ ಅಭ್ಯರ್ಥಿಗಳ ಆರಂಭಿಕ ಪಟ್ಟಿಯನ್ನು ಪ್ರಕಟಿಸಿವೆ. ಅವರ ಅಂತಿಮ ಪಟ್ಟಿಗಾಗಿ ಕಾಯಲಾಗುತ್ತಿದೆ.
ಕರ್ನಾಟಕದಲ್ಲಿ ಚಿಕ್ಕ ಪಕ್ಷಗಳಾದ ಕರ್ನಾಟಕ ರಾಷ್ಟ್ರ ಸಮಿತಿ, ಆಮ್ ಆದ್ಮಿ ಪಾರ್ಟಿ, ಆಲ್ ಇಂಡಿಯಾ ಮಜ್ಲಿಸ್-ಇತ್ತೆಹಾದುಲ್ ಮುಸ್ಲಿಮೀನ್ ಮತ್ತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕೂಡ ತಮ್ಮ ಮೊದಲ ಮತ್ತು ಎರಡನೇ ಪಟ್ಟಿಯನ್ನು ಪ್ರಕಟಿಸಿವೆ.
ಒಟ್ಟು 224 ಸ್ಥಾನಗಳ ಪೈಕಿ ಕಾಂಗ್ರೆಸ್ 166 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದರೆ, ಜೆಡಿಎಸ್ 93 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಏಪ್ರಿಲ್ 13 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು, ಆದರೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20 ಆಗಿದೆ. ಫಲಿತಾಂಶವು ಮೇ 13 ರಂದು ಪ್ರಕಟವಾಗಲಿದೆ.












Click it and Unblock the Notifications