ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ಗಾಗಿ ₹22,000 ಕೋಟಿ ಸಬ್ಸಿಡಿ: ಪರಮೇಶ್ವರ್

ಬೆಂಗಳೂರು: ರೈತರಿಗೆ ಈಗಾಗಲೇ ರಾಜ್ಯ ಸರ್ಕಾರ ಹಲವು ರೀತಿಯ ನೆರವು ನೀಡುತ್ತಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಲು ಸರ್ಕಾರ ವಾರ್ಷಿಕವಾಗಿ ಸುಮಾರು ₹22,000 ಕೋಟಿ ವಿದ್ಯುತ್ ಸಬ್ಸಿಡಿ ನೀಡುತ್ತಿದೆ ಎಂದು ಪರಮೇಶ್ವರ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ, ₹1,250 ಕೋಟಿ ಮೊದಲ ಹಂತದ ನೆರವು ಸಣ್ಣ ಮೊತ್ತವಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ದೊರೆಯುವ ಪರಿಹಾರದ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

Karnataka Farmers 22 000 Crore Subsidy for Free Electricity to Agricultural Pumpsets G Parameshwara

ತಲಾ ₹2,500ರಂತೆ ಇನ್‌ಪುಟ್ ಸಬ್ಸಿಡಿ

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣದ ನೆರವು ನೀಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮೊದಲ ಹಂತದಲ್ಲಿ ಸುಮಾರು 45ರಿಂದ 50 ಲಕ್ಷ ರೈತರಿಗೆ ತಲಾ ₹2,500ರಂತೆ ಇನ್‌ಪುಟ್ ಸಬ್ಸಿಡಿ ನೀಡಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರದ ಬೊಕ್ಕಸದಿಂದ ಸುಮಾರು ₹1,250 ಕೋಟಿ ವೆಚ್ಚವಾಗಲಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ನೆರವಿನ ನಿರೀಕ್ಷೆಯಿದ್ದರೂ, ರೈತರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವೇ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುತ್ತಿದೆ ಎಂದು ಡಾ. ಜಿ. ಪರಮೇಶ್ವರ ಹೇಳಿದರು.

50 ಲಕ್ಷ ರೈತರಿಗೆ ತಲಾ ₹2,500

ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಮೊದಲ ಹಂತದಲ್ಲಿ ತಲಾ ₹2,500 ಇನ್‌ಪುಟ್ ಸಬ್ಸಿಡಿ ನೀಡಲಾಗುವುದು. ಸುಮಾರು 45ರಿಂದ 50 ಲಕ್ಷ ರೈತರು ಇದರ ಪ್ರಯೋಜನ ಪಡೆಯಲಿದ್ದು, ಒಟ್ಟು ₹1,250 ಕೋಟಿ ವೆಚ್ಚವಾಗಲಿದೆ.

ಬರದಿಂದ ₹40,000 ಕೋಟಿಗೂ ಅಧಿಕ ನಷ್ಟ?

ರಾಜ್ಯದಲ್ಲಿ ಬರದಿಂದ ಉಂಟಾಗಿರುವ ಒಟ್ಟು ನಷ್ಟದ ಪ್ರಮಾಣ ₹40,000 ಕೋಟಿಗೂ ಅಧಿಕವಾಗುವ ಸಾಧ್ಯತೆಯಿದೆ ಎಂದು ಪರಮೇಶ್ವರ ಹೇಳಿದ್ದಾರೆ. ಈಗಾಗಲೇ ಮೊದಲ ಹಂತದ ಮೆಮೊರಾಂಡಂ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಇನ್ನಷ್ಟು ಮೆಮೊರಾಂಡಂಗಳನ್ನು ಸಲ್ಲಿಸಲಾಗುವುದು ಎಂದರು.

ಅಂತಿಮವಾಗಿ ರಾಜ್ಯದ ಸಂಪೂರ್ಣ ನಷ್ಟದ ಅಂದಾಜು ಸಿದ್ಧಪಡಿಸಿ, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಅನ್ವಯ ಕರ್ನಾಟಕಕ್ಕೆ ಅಗತ್ಯವಿರುವ ಪರಿಹಾರದ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದರು.

ಕೇಂದ್ರದ ನೆರವಿನ ಬಳಿಕ ಮುಂದಿನ ನಿರ್ಧಾರ

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುವ ನೆರವಿನ ಪ್ರಮಾಣವನ್ನು ಆಧರಿಸಿ ಮುಂದಿನ ಪರಿಹಾರ ಕ್ರಮಗಳನ್ನು ನಿರ್ಧರಿಸಲಾಗುವುದು. ಈ ಹಂತದಲ್ಲಿ ಪರಿಷ್ಕೃತ ಪರಿಹಾರ ಮೊತ್ತದ ಕುರಿತು ಯಾವುದೇ ನಿರ್ದಿಷ್ಟ ಬದ್ಧತೆ ನೀಡಲು ಸಾಧ್ಯವಿಲ್ಲ ಎಂದು ಪರಮೇಶ್ವರ ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಈಗಾಗಲೇ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಐಎಎಸ್ ಅಧಿಕಾರಿಯೊಬ್ಬರನ್ನು ಒಳಗೊಂಡ ತಂಡವನ್ನು ರಾಜ್ಯಕ್ಕೆ ಕಳುಹಿಸುವ ಕುರಿತು ಪತ್ರ ಬರೆದಿದೆ. ಆದರೆ ತಂಡದ ಭೇಟಿ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಕೇಂದ್ರದ ತಂಡ ರಾಜ್ಯಕ್ಕೆ ಭೇಟಿ ನೀಡಿ, ತನ್ನ ಮಾರ್ಗಸೂಚಿಗಳ ಪ್ರಕಾರ ಬರ ಪರಿಸ್ಥಿತಿ ಹಾಗೂ ಉಂಟಾಗಿರುವ ನಷ್ಟವನ್ನು ಪರಿಶೀಲಿಸಿದ ಬಳಿಕ ಕೇಂದ್ರದಿಂದ ದೊರೆಯಬಹುದಾದ ಪರಿಹಾರದ ಪ್ರಮಾಣ ಮತ್ತಷ್ಟು ಸ್ಪಷ್ಟವಾಗಲಿದೆ ಎಂದು ಅವರು ಹೇಳಿದರು.

Karnataka Farmers: ಸರ್ವಪಕ್ಷ ನಿಯೋಗ ದೆಹಲಿಗೆ

ಬರ ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯುವ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹಾಗೂ ತಾವು ಸ್ಪಷ್ಟಪಡಿಸಿದ್ದೇವೆ ಎಂದು ಪರಮೇಶ್ವರ ತಿಳಿಸಿದರು.

ಮೊದಲು ಸರ್ವಪಕ್ಷ ಸಭೆ ನಡೆಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಳಿಕ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು. ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ಬರ ಪರಿಸ್ಥಿತಿ ಮತ್ತು ರೈತರ ಸಂಕಷ್ಟವನ್ನು ನೇರವಾಗಿ ಮನವರಿಕೆ ಮಾಡಿಕೊಡಲಾಗುವುದು ಎಂದರು.

ವಿರೋಧ ಪಕ್ಷದ ನಾಯಕರು ಹಾಗೂ ಸದಸ್ಯರು ದೆಹಲಿ ನಿಯೋಗದಲ್ಲಿ ಭಾಗವಹಿಸಲು ಸಿದ್ಧರಿದ್ದರೆ, ಅವರನ್ನು ಕೂಡ ಜೊತೆಯಲ್ಲಿ ಕರೆದೊಯ್ಯಲು ಸರ್ಕಾರ ಸಿದ್ಧವಿದೆ ಎಂದು ಪರಮೇಶ್ವರ ಹೇಳಿದರು. ಆದರೆ ನಿಯೋಗದ ದೆಹಲಿ ಭೇಟಿಯ ದಿನಾಂಕ ಇನ್ನೂ ಅಂತಿಮವಾಗಿಲ್ಲ ಎಂದು ಮಾಹಿತಿ ನೀಡಿದರು.

Karnataka Farmers:‌ ವಿಶೇಷಚೇತನರ ಗೌರವಧನ ಹೆಚ್ಚಳದ ಬೇಡಿಕೆ

ಇದೇ ವೇಳೆ, ರಾಮನಗರದಲ್ಲಿ ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ವಿಶೇಷಚೇತನರು ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ, ಸಂಬಂಧಪಟ್ಟ ಇಲಾಖೆ ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸಿ ಸಚಿವ ಸಂಪುಟದ ಮುಂದೆ ತರಬೇಕು ಎಂದರು.

ಮುಖ್ಯಮಂತ್ರಿಗಳೇ ಹಣಕಾಸು ಸಚಿವರಾಗಿದ್ದು, ಅವರೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ತಂದರೆ ಈ ವಿಚಾರದಲ್ಲಿ ಎಲ್ಲರೂ ಸಹಕರಿಸುವುದಾಗಿ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+