ಖಾಲಿ ಬಿದ್ದಿದ್ದ ₹53.85 ಕೋಟಿ ಕಟ್ಟಡದತ್ತ ಸರ್ಕಾರದ ಚಿತ್ತ; ಬೆಳಪಿನಲ್ಲಿ ಯುನಿವರ್ಸಿಟಿ, ಮೆಡಿಕಲ್ ಕಾಲೇಜು?
Karnataka government: ಹಲವು ವರ್ಷಗಳಿಂದ ಬಳಕೆಯಾಗದೆ ಖಾಲಿ ಉಳಿದಿರುವ ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ 'ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನಾ ಕೇಂದ್ರ'ದ ಕಟ್ಟಡ ಹಾಗೂ ಕ್ಯಾಂಪಸ್ಗೆ ಹೊಸ ಬಳಕೆ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ಬೆಳಪು ಕ್ಯಾಂಪಸ್ಗೆ ಭೇಟಿ ನೀಡಿ ಕಟ್ಟಡ ಹಾಗೂ ಅಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಾರು ₹53.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬೃಹತ್ ಕಟ್ಟಡ ಹಲವು ವರ್ಷಗಳಿಂದ ಬಳಕೆಯಾಗದೆ ಉಳಿದಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕಟ್ಟಡ ದುರಾವಸ್ಥೆಗೆ ತಲುಪುವ ಸಾಧ್ಯತೆಯಿದ್ದು, ಇದನ್ನು ಸೂಕ್ತ ಹಾಗೂ ಸದ್ಬಳಕೆಯ ಉದ್ದೇಶಕ್ಕೆ ಬಳಸಿಕೊಳ್ಳುವ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದರು.

ರೂಸಾ ಯೋಜನೆಯಡಿ ವಿಜ್ಞಾನ ಕೇಂದ್ರಕ್ಕೆ ಯೋಜನೆ
2014-15ನೇ ಸಾಲಿನ ಬಜೆಟ್ನಲ್ಲಿ ರಾಜ್ಯದಲ್ಲಿ ವಿಜ್ಞಾನ ಕೇಂದ್ರ ಸ್ಥಾಪಿಸುವ ಕುರಿತು ಘೋಷಿಸಲಾಗಿತ್ತು. ಕೇಂದ್ರ ಸರ್ಕಾರದ ರೂಸಾ (RUSA) ಯೋಜನೆಯಡಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರೂಸಾ ಅನುದಾನದ ಸಹಯೋಗದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿತ್ತು ಎಂದು ಡಾ. ಪರಮೇಶ್ವರ ವಿವರಿಸಿದರು.
ರಾಜ್ಯದಲ್ಲಿ ಎರಡು ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆಯಿದ್ದು, ಅದರಲ್ಲಿ ಒಂದು ಕೇಂದ್ರವನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಆಯ್ಕೆ ಮಾಡಲಾಗಿತ್ತು. ವಿಜ್ಞಾನ ಕೇಂದ್ರಕ್ಕೆ ಅಗತ್ಯವಿರುವ ಮೂಲಸೌಕರ್ಯಗಳ ನಕ್ಷೆ ಸಿದ್ಧಪಡಿಸಿ, ಅಗತ್ಯತೆಗಳ ಕುರಿತು ಚರ್ಚೆ ನಡೆಸಿ ಅನುಮೋದನೆ ಪಡೆದ ನಂತರ ಕಾಮಗಾರಿ ಆರಂಭಿಸಲಾಗಿತ್ತು. ಸುಮಾರು ₹50ರಿಂದ ₹60 ಕೋಟಿ ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಆದರೆ ಕಾರಣಾಂತರಗಳಿಂದ ರೂಸಾ ಕಾರ್ಯಕ್ರಮ ಸ್ಥಗಿತಗೊಂಡಿದ್ದು, ಮಂಗಳೂರು ವಿಶ್ವವಿದ್ಯಾನಿಲಯದಿಂದಲೂ ಅಗತ್ಯ ಅನುದಾನ ದೊರೆಯದ ಹಿನ್ನೆಲೆಯಲ್ಲಿ ವಿಜ್ಞಾನ ಕೇಂದ್ರದ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇದೀಗ ವಿಜ್ಞಾನ ಕೇಂದ್ರಕ್ಕೆ ಮತ್ತೆ ಚಾಲನೆ ನೀಡುವ ಕುರಿತು ಪ್ರಸ್ತಾಪಿಸಲಾಗಿದ್ದು, ಈ ವಿಚಾರ ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ಬಂದಿದೆ ಎಂದರು.
ಸ್ಪೋರ್ಟ್ಸ್ ಯುನಿವರ್ಸಿಟಿ, ಮೆಡಿಕಲ್ ಕಾಲೇಜು
ಬೆಳಪು ಕ್ಯಾಂಪಸ್ಗೆ ಭೇಟಿ ನೀಡಿರುವ ಪ್ರಮುಖ ಉದ್ದೇಶಗಳನ್ನೂ ಡಿಸಿಎಂ ವಿವರಿಸಿದರು. ರಾಜ್ಯದಲ್ಲಿ ಸ್ಪೋರ್ಟ್ಸ್ ಯುನಿವರ್ಸಿಟಿ ಸ್ಥಾಪಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ಇದೆ. ಈ ಹಿನ್ನೆಲೆಯಲ್ಲಿ ಬೆಳಪಿನಲ್ಲಿ ಸ್ಪೋರ್ಟ್ಸ್ ಯುನಿವರ್ಸಿಟಿ ಸ್ಥಾಪಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಲು ಸ್ಥಳಕ್ಕೆ ಭೇಟಿ ನೀಡಿರುವುದಾಗಿ ಹೇಳಿದರು.
ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಇಲ್ಲದಿರುವುದರಿಂದ, ಇಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯವಾದ ಅವಕಾಶಗಳು ಮತ್ತು ಮೂಲಸೌಕರ್ಯಗಳಿವೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಎಲ್ಲ ವಿಚಾರಗಳ ಕುರಿತು ಸಂಪೂರ್ಣ ಮಾಹಿತಿ ಪಡೆದು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ನಿರ್ಮಿಸಲಾಗಿರುವ ಕಟ್ಟಡಗಳು ಮತ್ತು ಅಭಿವೃದ್ಧಿಪಡಿಸಿರುವ ಕ್ಯಾಂಪಸ್ ಯಾವುದೇ ಕಾರಣಕ್ಕೂ ವ್ಯರ್ಥವಾಗದಂತೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.
ಕರಾವಳಿ ಅಭಿವೃದ್ಧಿಗೆ ಸಚಿವ ಸಂಪುಟ ಸಭೆಯಲ್ಲಿ ಒತ್ತು
ಕರಾವಳಿ ಭಾಗದಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳುವುದು ಸಭೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದರು. ಈಗಾಗಲೇ ಸರ್ಕಾರದ ಗಮನಕ್ಕೆ ಬಂದಿರುವ ಕೆಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಆದರೆ ಇನ್ನೂ ಹಲವು ಸಣ್ಣಪುಟ್ಟ ಸಮಸ್ಯೆಗಳು ಹಾಗೂ ವಿವಿಧ ಅಭಿವೃದ್ಧಿ ವಿಚಾರಗಳು ಸರ್ಕಾರದ ಗಮನಕ್ಕೆ ಬಂದಿಲ್ಲ. ಇವುಗಳ ಕುರಿತು ಸಭೆಯಲ್ಲಿ ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಕರಾವಳಿ ಪ್ರದೇಶವನ್ನು ಕೇರಳ ಮತ್ತು ಗೋವಾ ರಾಜ್ಯಗಳು ಪರಿಣಾಮಕಾರಿಯಾಗಿ ಬಳಸಿಕೊಂಡಿವೆ. ಅದೇ ರೀತಿ ಕರ್ನಾಟಕದ ಕರಾವಳಿ ಭಾಗವನ್ನೂ ಇನ್ನಷ್ಟು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ತಿಳಿಸಿದರು.
ಪ್ರವಾಸೋದ್ಯಮಕ್ಕೆ ಹೊಸ ಒತ್ತು
ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸರ್ಫಿಂಗ್ ಸೇರಿದಂತೆ ಹಲವು ಕ್ರೀಡಾ ಚಟುವಟಿಕೆಗಳು ನಡೆಯುತ್ತಿವೆ. ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದರ ಮೂಲಕ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಸಾಧ್ಯವಿದೆ. ಇದರಿಂದ ಉದ್ಯೋಗ ಸೃಷ್ಟಿಯಾಗುವುದರ ಜೊತೆಗೆ ಸ್ಥಳೀಯ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ಸಿಗಲಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ರಾಜ್ಯದ ಟೂರಿಸಂ ಪಾಲಿಸಿಯ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ದೊಡ್ಡ ಪ್ರಮಾಣದ ಕೈಗಾರಿಕೆಗಳನ್ನು ಕರಾವಳಿ ಭಾಗಕ್ಕೆ ತರುವುದು ಕೆಲವು ಕಾರಣಗಳಿಂದ ಕಷ್ಟವಾಗಬಹುದು. ಆದರೆ ಸಾಫ್ಟ್ ಇಂಡಸ್ಟ್ರಿಗಳನ್ನು ಕರಾವಳಿಗೆ ತರಲು ಸರ್ಕಾರ ಪ್ರಯತ್ನಿಸಲಿದೆ ಎಂದು ತಿಳಿಸಿದರು.
Karnataka government: ಉಡುಪಿ, ಮಂಗಳೂರು ಕ್ರೀಡಾಂಗಣಗಳ ಅಭಿವೃದ್ಧಿ
ಕರಾವಳಿ ಭಾಗದಲ್ಲಿ ಉತ್ತಮ ಕ್ರೀಡಾಂಗಣ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಡಾ. ಪರಮೇಶ್ವರ ಹೇಳಿದರು.
ಉಡುಪಿಯ ಸ್ಟೇಡಿಯಂ ಹಾಗೂ ಮಂಗಳೂರಿನ ಮಂಗಳ ಸ್ಟೇಡಿಯಂ ಸೇರಿದಂತೆ ಕರಾವಳಿ ಭಾಗದಲ್ಲಿರುವ ಕ್ರೀಡಾಂಗಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದರು.
ಸಚಿವ ಸಂಪುಟದಲ್ಲಿ ಕೈಗೊಳ್ಳುವ ತೀರ್ಮಾನಗಳು ಇಡೀ ಸರ್ಕಾರದ ತೀರ್ಮಾನವಾಗಿರುತ್ತವೆ. ಸಚಿವ ಸಂಪುಟದ ನಿರ್ಣಯಗಳನ್ನು ಸರ್ಕಾರ ಅನುಷ್ಠಾನಗೊಳಿಸುತ್ತದೆ. ಇಲ್ಲವಾದರೆ ಯಾವುದೇ ವಿಚಾರವನ್ನು ಸಚಿವ ಸಂಪುಟದ ಮುಂದೆ ತರುವ ಅಗತ್ಯವೇ ಇರುವುದಿಲ್ಲ. ಸರ್ಕಾರದ ನಿರ್ಧಾರಗಳ ಬಗ್ಗೆ ಟೀಕೆಗಳು ಸಹಜವಾಗಿದ್ದು, ಅವುಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇವೆ ಎಂದು ಹೇಳಿದರು.
Karnataka government: ಸೆ.21ರಿಂದ ವಿಶೇಷ ಅಧಿವೇಶನ
ಸೆಪ್ಟೆಂಬರ್ 21, 22 ಮತ್ತು 23ರಂದು ವಿಶೇಷ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಮೊದಲನೆಯದಾಗಿ ಕಸ್ತೂರಿ ರಂಗನ್ ವರದಿ ವಿಚಾರದ ಕುರಿತು ಚರ್ಚೆ ನಡೆಯಲಿದೆ ಎಂದು ಡಿಸಿಎಂ ತಿಳಿಸಿದರು. ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ರೈತರಿಗೆ ಯಾವ ರೀತಿಯಲ್ಲಿ ಸ್ಪಂದಿಸಬೇಕು, ಅವರಿಗೆ ಯಾವ ರೀತಿಯ ನೆರವು ಒದಗಿಸಬೇಕು ಎಂಬುದರ ಬಗ್ಗೆಯೂ ಅಧಿವೇಶನದಲ್ಲಿ ಚರ್ಚಿಸಲಾಗುವುದು. ರೈತರ ಹಿತದೃಷ್ಟಿಯಿಂದಲೇ ಈ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಹೇಳಿದರು.


Click it and Unblock the Notifications
