42 Acres Land: ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ಸರ್ಕಾರದಿಂದ 42 ಎಕರೆ ಭೂಮಿ ಮಂಜೂರು, ಹೊಸ ಅಪ್ಡೇಟ್ಸ್
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) 42 ಎಕರೆ ಭೂಮಿಯನ್ನು ನೀಡಲಾಗಿದೆ. ಇದೀಗ ಕ್ರಿಕೆಟ್ ಸಂಸ್ಥೆಗೆ ಭೂಮಿ ನೀಡಿರುವುದು ಹಾಗೂ ರಾಜ್ಯದಲ್ಲಿ ಕ್ರೀಡೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಮಹತ್ವದ ಅಪ್ಡೇಟ್ಸ್ ಕೊಟ್ಟಿದ್ದಾರೆ. ಅದರ ಸಂಪೂರ್ಣ ವಿವರ ಇಲ್ಲಿದೆ. ಶೈಕ್ಷಣಿಕ ನಗರಿಯಾಗಿರುವ ತುಮಕೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕ್ರೀಡಾ ನಗರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದ್ದು, ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ.
ಒಲಂಪಿಕ್ ದಿನದ ಅಂಗವಾಗಿ ಕರ್ನಾಟಕ ಒಲಂಪಿಕ್ ಸಂಸ್ಥೆ ಹಾಗೂ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ತುಮಕೂರಿನ ಟೌನ್‌ಹಾಲ್ ಮುಂಭಾಗದಲ್ಲಿ ಆಯೋಜಿಸಲಾಗಿದ್ದ "ಒಲಂಪಿಕ್ ಓಟ" ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ದಾರೆ. ವಿಶ್ವದಾದ್ಯಂತ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಅದರ ದುಷ್ಪರಿಣಾಮ ಯುವ ಸಮುದಾಯದ ಮೇಲೆ ಗಂಭೀರವಾಗಿ ಬೀಳುತ್ತಿದೆ. ಯುವಜನರನ್ನು ಗುರಿಯಾಗಿಸಿಕೊಂಡು ಮಾದಕ ವ್ಯಸನದ ಜಾಲಕ್ಕೆ ಸೆಳೆಯುವ ಪ್ರಯತ್ನಗಳು ನಡೆಯುತ್ತಿವೆ. ಇದು ಸಮಾಜಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಯುವಕರು ಯಾವುದೇ ಕಾರಣಕ್ಕೂ ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗದೆ, ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದರು.

ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದ ಸಂದೇಶವನ್ನು ಸಾರುವ ಉದ್ದೇಶದಿಂದ ಪ್ರತಿವರ್ಷ ಜೂನ್ 23ರಂದು ಅಂತಾರಾಷ್ಟ್ರೀಯ ಒಲಂಪಿಕ್ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಕರ್ನಾಟಕ ಒಲಂಪಿಕ್ ಸಂಸ್ಥೆ ತುಮಕೂರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಂತಸದ ಸಂಗತಿ ಎಂದರು.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) 42 ಎಕರೆ ಭೂಮಿಯನ್ನು
ಇನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) 42 ಎಕರೆ ಭೂಮಿಯನ್ನು ಈಗಾಗಲೇ ನೀಡಲಾಗಿದೆ. ತುಮಕೂರಿನಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಕೈಗೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) 42 ಎಕರೆ ಭೂಮಿಯನ್ನು ನೀಡಲಾಗಿದ್ದು, ಈಗಾಗಲೇ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಇದಲ್ಲದೆ, ಜಿಲ್ಲೆಯ ಕ್ರೀಡಾಪಟುಗಳ ತರಬೇತಿಗಾಗಿ ರಾಷ್ಟ್ರೀಯ ಮಟ್ಟದ ಜಿಮ್ನೇಶಿಯಂ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಂಗಣ ಹಾಗೂ ಅತ್ಯಾಧುನಿಕ ಈಜುಕೊಳವನ್ನು ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.
ಅಮಾನಿಕೆರೆಯಲ್ಲಿ ಕಯಾಕಿಂಗ್ ಅಕಾಡೆಮಿಯನ್ನು ಆರಂಭಿಸಲಾಗಿದ್ದು, ಅಲ್ಲಿನ ತರಬೇತಿಯಿಂದ ಜಿಲ್ಲೆಯ ಮಕ್ಕಳು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ಜೂನ್ 17ರಂದು ನಡೆದ ರಾಷ್ಟ್ರೀಯ ಮಟ್ಟದ ಕಯಾಕಿಂಗ್ ಸ್ಪರ್ಧೆಯಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿ ಬಹುಮಾನಗಳನ್ನು ಗೆದ್ದಿರುವುದು ತುಮಕೂರು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.
ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಕೆ. ಗೋವಿಂದರಾಜ್, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ.ಅನಂತರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಇದ್ದರು.














Click it and Unblock the Notifications