ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ EVM ಬದಲು ಬ್ಯಾಲೆಟ್ ಪೇಪರ್: ಸರ್ಕಾರದ ನಿರ್ಧಾರ; ಚುನಾವಣೆ ಯಾವಾಗ?
ಬೆಂಗಳೂರು,ಸೆಪ್ಟೆಂಬರ್ 04: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಪಾಲಿಕೆ ಪಂಚಾಯಿತಿ ಚುನಾವಣೆಗೆ ಸಿದ್ದತೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗ ಕುರಿತು ಮಹತ್ವ ನಿರ್ಧಾರವನ್ನ ಪ್ರಕಟಿಸಿದೆ. ಕರ್ನಾಟಕದಲ್ಲಿ ಮುಂದಿನ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಬ್ಯಾಲೆಟ್ ಪೇಪರ್ ಬಳಕೆಯ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಕ್ಯಾಬಿನೆಟ್ ಅನುಮೋದನೆ ಸಿಕ್ಕಿದೆ. ಈ ಮೂಲಕ ಶೀಘ್ರದಲ್ಲೇ ನಡೆಯುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಾಲಿಕೆ ಚುನಾವಣೆ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬ್ಯಾಲೆಟ್ ಪೇಪರ್‌ನಲ್ಲಿ ನಡೆಯಲಿವೆ ಎಂದ ಮಾಹಿತಿ ಲಭ್ಯವಾಗಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಮತಗಳ್ಳತನ ಆರೋಪ ಮಾಡಿದ್ದರು, ಇದು ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಇದೇ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಿತ್ತು. ಇನ್ನೂ ಕರ್ನಾಟಕದಲ್ಲೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಸಮಾವೇಶವನ್ನ ಮಾಡಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ, ಸ್ಥಳೀಯ ಸಂಸ್ಥೆ ಚುನಾವಣೆಗೆ ಬ್ಯಾಲೆಟ್ ಪೇಪರ್ಗೆ ಆದ್ಯತೆ ನೀಡುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ಮುಂದಾಗಿದೆ.
ರಾಜ್ಯ ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ಇವಿಎಂ ವಿಶ್ವಾಸಾರ್ಹತೆ ಕಡಿಮೆಯಾಗುತ್ತಿರುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇನ್ನೂ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ ಬಳಕೆ ಬೇಡ, ಅದನ್ನು ಹ್ಯಾಕ್ ಮಾಡಿ ಬಿಜೆಪಿ ಗೆಲ್ಲುತ್ತಿದೆ ಎಂದು ಕಾಂಗ್ರೆಸ್ ವಾದಿಸುತ್ತಿತ್ತು. ಇದೀಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಮುಂದೆ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಿದೆ.
ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಶಿಫಾರಸು ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಈ ಪ್ರಕ್ರಿಯೆಯಲ್ಲಿ ಅಗತ್ಯ ಕಾನೂನು ತಿದ್ದುಪಡಿ ಮಾಡಬೇಕು. ನಿಯಮಾವಳಿಗಳಿಗೂ ಕೆಲವು ತಿದ್ದುಪಡಿ ಮಾಡಬೇಕಾಗುತ್ತದೆ. ಅಗತ್ಯ ಕಾನೂನು ಮಾಡಲು ಕ್ಯಾಬಿನೆಟ್ ಶಿಫಾರಸು ಮಾಡಿದೆ. ಮೊದಲ ಹಂತದಲ್ಲಿ ಮತಯಂತ್ರದ ಬದಲು ಮತಪತ್ರ ತರುವಂತೆ ಚುನಾವಣಾ ಆಯೋಗಕ್ಕೆ ಸರ್ಕಾರದ ಶಿಫಾರಸು ಮಾಡಿದೆ ಎಂದು ಸಚಿವ ಹೆಚ್. ಕೆ. ಪಾಟೀಲ್ ಅವರು ಹೇಳಿದರು.












Click it and Unblock the Notifications