Government Employee: ಕರ್ನಾಟಕದ ಸರ್ಕಾರಿ ನೌಕರರಿಂದ ಪತ್ರ ಚಳವಳಿ
ಬೆಂಗಳೂರು, ಜನವರಿ 21: ಕರ್ನಾಟಕದ ಸರ್ಕಾರಿ ನೌಕರರು ತಮ್ಮ ಪ್ರಮುಖ ಬೇಡಿಕೆ ಮುಂದಿಟ್ಟುಕೊಂಡು ಮುಖ್ಯಮಂತ್ರಿಗಳಿಗೆ ಪತ್ರ ಚಳವಳಿ ಆರಂಭಿಸಿದ್ದಾರೆ. 2023ರ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೊಳಿಸಬೇಕು, ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.
ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಜನವರಿ 20ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಚಳವಳಿಯನ್ನು ಆರಂಭಿಸಿದೆ. ಜನವರಿ 31ರ ತನಕ ಈ ಚಳವಳಿ ನಡೆಯಲಿದೆ. ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಚಳವಳಿ ನಡೆಸಲಾಗುತ್ತಿದೆ.

ಎನ್‌ಪಿಎಸ್ ನೌಕರರ ಸಂಘ ಹಳೆ ಪಿಂಚಣಿ ಯೋಜನೆ ಬದಲು ಜಾರಿಗೆ ತರಲು ಉದ್ದೇಶಿಸಿರುವ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ವಿರೋಧಿಸಿದೆ. 1/4/2006ಕ್ಕೆ ಮುಂಚೆ ಇದ್ದ ನಿಶ್ಚಿತ ಪಿಂಚಣಿ ಯೋಜನೆ ಜಾರಿ ಮಾಡಬೇಕು. ನಿವೃತ್ತಿಯ ನಂತರ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ಪತ್ರದಲ್ಲಿ ಸರ್ಕಾರಿ ನೌಕರರು ಒತ್ತಾಯಿಸುತ್ತಿದ್ದಾರೆ.
ಸಮಿತಿ ರಚನೆ ಮಾಡಿರುವ ಸರ್ಕಾರ: ಕರ್ನಾಟಕದ ಸರ್ಕಾರಿ ನೌಕರರು 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿ ಬಳಿಕ ಹಳೆ ಪಿಂಚಣಿ ಯೋಜನೆ ಮರು ಸ್ಥಾಪನೆಗಾಗಿ ಬೇಡಿಕೆ ಸಲ್ಲಿಸುತ್ತಲೇ ಇದ್ದಾರೆ. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂಬುದು ಒತ್ತಾಯವಾಗಿದೆ.
ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿಯೂ ಈ ಕುರಿತು ಚರ್ಚೆ ನಡೆಯಿತು. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರವನ್ನು ಕೊಟ್ಟಿದ್ದಾರೆ. ಎನ್‌ಪಿಎಸ್ ಬದಲಾಗಿ ಒಪಿಎಸ್ ಯೋಜನೆಯನ್ನು ಜಾರಿ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲ ಈಗಾಗಲೇ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 11/12/2018ರ ಮತ್ತು ದಿನಾಂಕ 1/3/2023ರ ಸರ್ಕಾರಿ ಆದೇಶಗಳನ್ವಯ ರಚಿಸಲಾಗಿರುವ ಸಮಿತಿಯನ್ನು ದಿನಾಂಕ 16/8/2024ರಲ್ಲಿ ಪುನರ್ ರಚಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಸದರಿ ಸಮಿತಿಯು ಈಗಾಗಲೇ ಎರಡು ಸಭೆಗಳನ್ನು ನಡೆಸಿದೆ. ಸದರಿ ಸಮಿತಿಗೆ ಯಾವುದೇ ಕಾಲಮಿತಿಯನ್ನು ನಿಗದಿಪಡಿಸಿರುವುದಿಲ್ಲ ಎಂದು ಮುಖ್ಯಮಂತ್ರಿಗಳು ಉತ್ತರದಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ 2025ಕ್ಕೆ ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಶತಸಿದ್ಧ. ಹೊಸ ಪಿಂಚಣಿ ಯೋಜನೆ ಬದಲಾಗಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಸರ್ಕಾರಕ್ಕೆ ಒತ್ತಡ ಹೇರಿ ಜಾರಿಗೊಳಿಸಲಾಗುವುದು ಎಂದು ಈಗಾಗಲೇ ಭರವಸೆಯನ್ನು ನೀಡಿದೆ.
ಫೆಬ್ರವರಿ 7ಕ್ಕೆ ಧರಣಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎನ್‌ಪಿಎಸ್ ಸಂಘ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಒತ್ತಾಯಿಸಿ ಒಂದು ದಿನದ ಧರಣಿ ನಡೆಸಲು ಮುಂದಾಗಿದೆ. ಫೆಬ್ರವರಿ 7ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲಾಗುತ್ತದೆ ಎಂದು ಈಗಾಗಲೇ ಘೋಷಣೆ ಮಾಡಿದೆ.
ಸಂಘ 2022ರಲ್ಲಿ ಒಂದು ತಿಂಗಳು ಒಪಿಎಸ್ ಸಂಕಲ್ಪ ಯಾತ್ರೆ, 14 ದಿನಗಳ ಕಾಲ ಒಪಿಎಸ್ ಜಾರಿಗಾಗಿ ಫ್ರೀಡಂಪಾರ್ಕ್‌ನಲ್ಲಿ ಧರಣಿಯನ್ನು ನಡೆಸಿತ್ತು. ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಒಪಿಎಸ್ ಮರು ಜಾರಿಗೊಳಿಸುವ ಭರವಸೆಯನ್ನು ನೀಡಿತ್ತು. ಆದ್ದರಿಂದ ಈಗ ಸರ್ಕಾರದ ಮೇಲೆ ಸರ್ಕಾರಿ ನೌಕರರು ಒತ್ತಡ ಹೇರುತ್ತಿದ್ದಾರೆ.












Click it and Unblock the Notifications