ಸರ್ಕಾರಿ ನೌಕರರ ವರ್ಗಾವಣೆ: ಯಾವ ನೌಕರರ ಸೇವಾವಧಿ ವಿಸ್ತರಿಸಬಹುದು?
ಬೆಂಗಳೂರು, ಮೇ 15: ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಒಪ್ಪಿಗೆ ನೀಡಿದೆ. ಮೇ 15 ರಿಂದ ಜೂನ್ 14ರ ತನಕ ವರ್ಗಾವಣೆ ನಡೆಯಲಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ಕಾರಿ ನೌಕರ ಒಂದು ಸ್ಥಳದಲ್ಲಿ ಇರಬಹುದಾದದ ಕನಿಷ್ಠ ಅವಧಿ, ನೌಕರನ ಸೇವಾವಧಿ ವಿಸ್ತರಣೆ ಕುರಿತು ಮಾರ್ಗಸೂಚಿಯಲ್ಲಿ ಮಾಹಿತಿ ನೀಡಲಾಗಿದೆ.
ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿ. ಒಂದು ಸ್ಥಳದಲ್ಲಿ ಸೂಚಿಸಿರುವ ಸೇವಾವಧಿಯನ್ನು ಪೂರ್ಣಗೊಳಿಸದ ಯಾವುದೇ ಸರ್ಕಾರಿ ನೌಕರನನ್ನು ಸಾಧಾರಣವಾಗಿ ವರ್ಗಾವಣೆ/ ಚಲನವಲನ ಮಾಡುವಂತಿಲ್ಲ. ಎಲ್ಲ ಗುಂಪು-ಎ ಹುದ್ದೆಗಳು 2 ವರ್ಷ, ಎಲ್ಲ ಗುಂಪು-ಬಿ ಹುದ್ದೆಗಳು 2 ವರ್ಷ, ಎಲ್ಲ ಗುಂಪು-ಸಿ ಹುದ್ದೆಗಳು 4 ವರ್ಷ ಮತ್ತು ಎಲ್ಲ ಗುಂಪು-ಡಿ ಹುದ್ದೆಗಳು 7 ವರ್ಷಗಳು.

ತಮ್ಮ ಇಲಾಖೆಯ ವ್ಯಾಪ್ತಿಯಡಿ ಬರುವ ಇಲಾಖೆಗಳ ಒಂದು ನಿರ್ದಿಷ್ಟವಾದ ಹುದ್ದೆಯ ಕಾರ್ಯ ಸ್ವರೂಪದ/ ಸೂಕ್ಷ್ಮತೆಯ ಆಧಾರದ ಮೇಲೆ ಒಂದು ಹುದ್ದೆಯಲ್ಲಿ ಸರ್ಕಾರಿ ನೌಕರನು ಸೇವೆ ಸಲ್ಲಿಸಬಹುದಾದ ಕನಿಷ್ಠ ಅವಧಿಯನ್ನು ಸಚಿವಾಲಯದ ಆಡಳಿತ ಇಲಾಖೆಗಳು ಮುಖ್ಯಮಂತ್ರಿಯವರ ಪೂರ್ವಾನುಮೋದನೆಯೊಂದಿಗೆ ಕಾಲಕಾಲಕ್ಕೆ ಪರಿಷ್ಕರಿಸಿ/ ನಿಗದಿಪಡಿಸಿ ಆದೇಶ ಹೊರಡಿಸಬಹುದು.
ಇಲಾಖಾ ಮುಖ್ಯಸ್ಥರುಗಳು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತಹ ವರ್ಗಾವಣೆ ಪ್ರಸ್ತಾವನೆಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳ ಮೂಲಕವೇ ಮಾನ್ಯ ಸಚಿವರಿಗೆ ಸಲ್ಲಿಸತಕ್ಕದ್ದು. ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ನೆಲೆಸಿರುವ ಕಛೇರಿಗಳಿಗೆ ಸ್ಥಳೀಯ ವೃಂದ ಮತ್ತು ಮಿಕ್ಕುಳಿದ ವೃಂದಗಳಲ್ಲಿನ ವಿವಿಧ ವೃಂದದ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆದುರಾಗಿ ನೇಮಕಾತಿ ಹೊಂದಿರುವ ನೌಕರರನ್ನು ಅವರ ನೇಮಕಾತಿ ದಿನಾಂಕದಿಂದ ಕನಿಷ್ಟ 10 ವರ್ಷಗಳ ವರೆಗೂ ಹೈದರಾಬಾದ್ ಕರ್ನಾಟಕ ಪ್ರದೇಶ ಹೊರತುಪಡಿಸಿ ವರ್ಗಾವಣೆ ಮಾಡಬಾರದು.
ಈ ಕೆಳಕಂಡ ಸಂದರ್ಭಗಳಲ್ಲಿ ಸಕ್ಷಮ ಪ್ರಾಧಿಕಾರವು ಲಿಖಿತವಾಗಿ ಕಾರಣಗಳನ್ನು ದಾಖಲಿಸಿ ಸರ್ಕಾರಿ ನೌಕರನು ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಸೇವಾವಧಿಯನ್ನು ವಿಸ್ತರಿಸಬಹುದು ಅಥವಾ ಕಡಿತಗೊಳಿಸಬಹುದು.
* ಒಂದು ಸ್ಥಳದಲ್ಲಿರಬಹುದಾದ ಕನಿಷ್ಠ ಅವಧಿಯನ್ನು ಪೂರ್ಣಗೊಳಿಸಿ ವರ್ಗಾವಣೆಗೆ ಅರ್ಹನಿರುವ ಸರ್ಕಾರಿ ನೌಕರನಿಗೆ ನಿವೃತ್ತನಾಗಲು ಎರಡು ವರ್ಷಕ್ಕಿಂತ ಕಡಿಮೆ ಸೇವಾವಧಿ ಇದ್ದಲ್ಲಿ.
* ಒಬ್ಬ ಸರ್ಕಾರಿ ನೌಕರನು ವಿಶೇಷ ತಾಂತ್ರಿಕ ವಿದ್ಯಾರ್ಹತೆ ಅಥವಾ ಅನುಭವ ಹೊಂದಿದ್ದು, ಅಂತಹ ನಿರ್ದಿಷ್ಟವಾದ ಹುದ್ದೆಗೆ ತಕ್ಷಣಕ್ಕೆ ನೇಮಿಸಲು ಸೂಕ್ತವಾದ ಬದಲಿ ನೌಕರರು ಲಭ್ಯವಿಲ್ಲದಿದ್ದಲ್ಲಿ.
* ಕೇಂದ್ರ ಸರ್ಕಾರದ ಯೋಜನೆ ಅಥವಾ ಫ್ಲ್ಯಾಗ್‌ಶಿಪ್ ಯೋಜನೆಗಳಲ್ಲಿ ಒಬ್ಬ ಸರ್ಕಾರಿ ನೌಕರನು ಕೆಲಸ ಮಾಡುತ್ತಿದ್ದು ಯೋಜನೆಯ ಅನುಷ್ಠಾನಗೊಳಿಸುವಿಕೆಯು ಪ್ರಮುಖ ಹಂತದಲ್ಲಿರುವಾಗ ಆತನ ಸೇವೆಯನ್ನು ಹಿಂಪಡೆದಲ್ಲಿ ಸಕಾಲದಲ್ಲಿ ಆ ಯೋಜನೆಯ ಪೂರ್ಣಗೊಳ್ಳುವಿಕೆಯು ಗಂಭೀರವಾಗಿ ನಿಲ್ಲುವ ಸಂಭವವಿದ್ದಲ್ಲಿ.
* ಪತಿ-ಪತ್ನಿಯರಿಬ್ಬರೂ ಸರ್ಕಾರಿ ನೌಕರರಾಗಿದ್ದು, ಇವರಲ್ಲಿ ಒಬ್ಬರು ವರ್ಗಾವಣೆಗೊಂಡಲ್ಲಿ, ಆಗ ಇನ್ನೊಬ್ಬರು ಹಾಲಿಯಿರುವ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು ಪೂರೈಸದಿದ್ದರೂ ಖಾಲಿ ಹುದ್ದೆಯ ಲಭ್ಯತೆಗೊಳಪಟ್ಟು ಆ ಸ್ಥಳಕ್ಕೆ ಅಥವಾ ಹತ್ತಿರವಿರುವ ಸ್ಥಳಕ್ಕೆ ವರ್ಗಾಯಿಸಲು.
* ಒಂದು ವೇಳೆ ಸರ್ಕಾರಿ ನೌಕರನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ಆ ಪದಾಧಿಕಾರದ ಅವಧಿ ಮುಗಿಯುವವರೆಗೆ ವರ್ಗಾಯಿಸಬಾರದು. ಒಂದು ವೇಳೆ ಪದಾಧಿಕಾರದ ಅವಧಿ ಮುಗಿದ ನಂತರ 3 ತಿಂಗಳಲ್ಲಿ ಚುನಾವಣೆಗಳು ನಡೆಯದಿದ್ದಲ್ಲಿ ಅಂತಹವರನ್ನು ವರ್ಗಾಯಿಸಬಹುದು. ಒಂದು ವೇಳೆ ಅವನು ಮರು ಚುನಾಯಿತನಾದಲ್ಲಿ 2ನೇ ಅವಧಿಯವರೆಗೆ ಮಾತ್ರ ಆತನನ್ನು ಮುಂದುವರೆಸಬಹುದು.
* ಸರ್ಕಾರಿ ನೌಕರ ಅಥವಾ ಆತನ/ ಆಕೆಯ ಅಥವಾ ಮಕ್ಕಳು ಯಾವುದೇ ಗಂಭೀರ ಅಥವಾ ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದಲ್ಲಿ ಒಂದು ಸ್ಥಳದಲ್ಲಿ ಆ ವೈದ್ಯಕೀಯ ಚಿಕಿತ್ಸಾ ಸೌಲಭ್ಯವು ಲಭ್ಯವಿದ್ದು ಈ ಬಗ್ಗೆ ವೈದ್ಯಕೀಯ ಮಂಡಳಿಯಿಂದ ಪಮಾಣ ಪತ್ರ ಪಡೆದಲ್ಲಿ.
* ಮಹಿಳಾ ಸರ್ಕಾರಿ ನೌಕರರು, ವಿಧವೆ/ ಅವಿವಾಹಿತೆ/ ವಿಚ್ಛೇದನ ಪಡೆದ ಅವಿವಾಹಿತೆಯಾದಲ್ಲಿ, ಖಾಲಿ ಹುದ್ದೆಯ ಲಭ್ಯತೆಗೊಳಪಟ್ಟು ಆಕೆಯು ಕೋರಿದ ಅಥವಾ ಹತ್ತಿರದ ಯಾವುದಾದರೂ ಸ್ಥಳಕ್ಕೆ ವರ್ಗಾಯಿಸಬಹುದು.
ಸಾಮಾನ್ಯವಾಗಿ ಅವಧಿಪೂರ್ವ ವರ್ಗಾವಣೆಗಳನ್ನು ಮಾಡತಕ್ಕದ್ದಲ್ಲ. ಆದರೆ, ಯಾವುದೇ ರೀತಿಯ ಅವಧಿ ಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಮತ್ತು ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳು ಲಿಖಿತ ಮೂಲಕ ಕಾರಣಗಳನ್ನು ದಾಖಲಿಸಿ ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯನ್ನು ಕಡ್ಡಾಯವಾಗಿ ಪಡೆದು ಮಾಡತಕ್ಕದ್ದು.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿ ಅವರು ಯಾವುದೇ ಪ್ರಸಂಗದಲ್ಲಿ ಮೊದಲು ವರ್ಗಾವಣೆಗಳನ್ನು ಮಾಡಿ ನಂತರ ಮಾನ್ಯ ಮುಖ್ಯಮಂತ್ರಿಯವರ ಸ್ಥಿರೀಕರಣ/ ಘಟನೋತ್ತರ ಅನುಮೋದನೆ ಪಡೆಯತಕ್ಕದ್ದಲ್ಲ.












Click it and Unblock the Notifications