Dharmasthala Cases: ಧರ್ಮಸ್ಥಳ ಕೇಸುಗಳ ತನಖೆಗೆ SIT ರಚಿಸಿ ಸರ್ಕಾರ ಅಧಿಕೃತ ಆದೇಶ
ಬೆಂಗಳೂರು, ಜುಲೈ 20: ಪ್ರಮುಖ ಧಾರ್ಮಿಕ ಸ್ಥಳವಾದ ಧರ್ಮಸ್ಥಳದಲ್ಲಿನ ಸೌಜ್ಯನ ಹತ್ಯೆ ಪ್ರಕರಣ ಹಾಗೂ ಅನೇಕ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ಣಾಟಕ ಸರ್ಕಾರ ವಿಶೇಷ ತನಿಖಾ ತಂಡ (SIT) ರಚನೆ ಮಾಡಿದೆ. ಗೃಹ ಸಚಿವರು ಹಾಗೂ ಸಿಎಂ ಸಿದ್ದರಾಮಯ್ಯ ಅವರು ನೆನ್ನೆಯಷ್ಟೇ ಆ ಬಗ್ಗೆ ತಿರ್ಮಾನ ಇಲ್ಲ ಎಂದಿದ್ದರು. ಅದರ ಬೆನ್ನಲ್ಲೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಧರ್ಮಸ್ಥಳ ಪ್ರಕರಣಗಳಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇನ್ನಾದರೂ ಸೂಕ್ತ ತನಿಖೆ ನಡೆದು ಅನ್ಯಾಯಕ್ಕೆ ಒಳಗಾದವರಿಗೆ ಸೂಕ್ತ ನ್ಯಾಯ ಕೊಡಿಸುವ ಕೆಲಸವಾಗುತ್ತಾ...? ಎಂದು ಕಾದು ನೋಡಬೇಕಿದೆ.
ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ತಂಡ ರಚನೆ ಮಾಡಲಾಗಿದೆ. ಇದೇ ತನಿಖಾ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಅನುಚೇತ್, ಸೌಮ್ಯಲತಾ ಹಾಗೂ ಜಿತೇಂದ್ರ ಕುಮಾರ್ ದಯಾಮಾ ಅವರು ಇರಲಿದ್ದಾರೆ. ಇವರೆಲ್ಲ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಪ್ರಕರಣಗಳ ಮೇಲೆ ತನಿಖೆ ನಡೆಯಲಿದೆ.

SIT ರನಚೆ ಆದೇಶದಲ್ಲಿ ಏನಿದೆ?
ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಿರುವ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸುವ ಬಗ್ಗೆ ಆದೇಶ ಹೊರಡಿಸಿದೆ. ಈ ಆದೇಶದಲ್ಲಿ ''ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಪತ್ರದಲ್ಲಿ ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ದಿನಾಂಕ: 12-07-2025ರಂದು ಮಾಧ್ಯಮಗಳು ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರ ಮಾಡಿದ್ದಾರೆ. ಇದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ''.
ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ ಹತ್ಯೆ ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ತಿಳಿಸಲಾಗಿದೆ. ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ ಕೋರಿರುತ್ತಾರೆ.
ಮೇಲೆ ಓದಲಾದ (2)ರಂತೆ, ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡ (Special Investigation Team)ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳ ಸಮಗ್ರ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಿ ಆದೇಶಿಸಲಾಗಿದೆ. ಈ ತನಿಖೆ ತಂಡದಲ್ಲಿ ಇವೆಲ್ಲ ಇದ್ದಾರೆ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ.
SIT ತನಿಖಾ ತಂಡದ ಅಧಿಕಾರಿಗಳು, ಹುದ್ದೆ ವಿವರ
* ಡಾ: ಪ್ರಣವ ಮೊಹಾಂತಿ, ಐ.ಪಿ.ಎಸ್ (ಪೊಲೀಸ್ ಮಹಾ ನಿರ್ದೇಶಕರು, ಆಂತರಿಕ ಭದ್ರತಾ ವಿಭಾಗ, ಬೆಂಗಳೂರು
* ಎಂ.ಎನ್.ಅನುಚೇತ್, ಐ.ಪಿ.ಎಸ್ (ಉಪ ಪೊಲೀಸ್ ಮಹಾ ನಿರೀಕ್ಷಕರು, ನೇಮಕಾತಿ, ಬೆಂಗಳೂರು)
* ಸೌಮ್ಯಲತ, ಐ.ಪಿ.ಎಸ್. (ಉಪ ಪೊಲೀಸ್ ಆಯುಕ್ತರು, ಸಿ.ಎ.ಆರ್.ಕೇಂದ್ರಸ್ಥಾನ, ಬೆಂಗಳೂರು)
* ಜಿತೇಂದ್ರ ಕುಮಾರ್ ದಯಾಮ, ಐ.ಪಿ.ಎಸ್. (ಪೊಲೀಸ್ ಅಧೀಕ್ಷಕರು, ಆಂತರಿಕ ಭದ್ರತಾ ವಿಭಾಗ, ಬೆಂಗಳೂರು)












Click it and Unblock the Notifications