ಜ್ವರ, ಕೆಮ್ಮು-ನೆಗಡಿ ಇದ್ರೆ ವಿದ್ಯಾರ್ಥಿಗಳಿಗೆ ರಜೆ ಕೊಡಿ: ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್
ಸೋಮವಾರದಿಂದ ರಾಜ್ಯದಾದ್ಯಂತ ಶಾಲೆಗಳು ಮರುಪ್ರಾರಂಭಗೊಳ್ಳಲಿವೆ. ಇದೇ ಹೊತ್ತಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗಳಿಗಾಗಿ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ಗೈಡ್‌ಲೈನ್ಸ್ ನೀಡಲಾಗಿದ್ದು, ಶಾಲಾ ಶಿಕ್ಷಕರು ಹಾಗೂ ಪೋಷಕರಿಗೆ ಕೆಲವು ಮಹತ್ವದ ಸೂಚನೆಯನ್ನು ಇಲಾಖೆ ನೀಡಿದೆ. ಕೋವಿಡ್-19ಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ಸುತ್ತೋಲೆ ಹೊರಡಿಸಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿತ್ತು. ಕೋವಿಡ್-19 ಪರಿಸ್ಥಿತಿ ಪರಿಶೀಲನಾ ಸಭೆಯಲ್ಲಿ ಕೆಲವು ಮಹತ್ವದ ನಿಯಮಗಳನ್ನು ಜಾರಿ ಮಾಡುವಂತೆ ಸೂಚಿಸಿದ್ದರು. ಅದರಂತೆ ಆರೋಗ್ಯ ಇಲಾಖೆಯು ಶಾಲೆಗಳಿಗಾಗಿ ಪ್ರತ್ಯೇಕ ಮಾರ್ಗಸೂಚಿಗಳನ್ನು ರೂಪಿಸಿದೆ.

* ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು ನೆಗಡಿ ಹಾಗೂ ಇನ್ನಿತರ ಲಕ್ಷಣಗಳು ಕಂಡುಬಂದಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸದೆ ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಹಾಗೂ ಆರೈಕೆ ಕ್ರಮಗಳನ್ನು ಪಾಲಿಸಬೇಕು.
* ಮಕ್ಕಳಲ್ಲಿ ಈ ಲಕ್ಷಣಗಳು ಸಂಪೂರ್ಣವಾಗಿ ಗುಣಮುಖವಾದ ನಂತರವೇ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಕು.
* ಜ್ವರ, ಕೆಮ್ಮು, ನೆಗಡಿ ಹಾಗೂ ಇತರೆ ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ, ಅವರ ಪೋಷಕರಿಗೆ ಕೂಡಲೇ ಮಾಹಿತಿ ನೀಡಿ ಆ ಮಕ್ಕಳನ್ನು ಮನೆಗೆ ಕಳಿಸಬೇಕು.
* ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿಯಲ್ಲಿ ಯಾವುದೇ ಜ್ವರ, ಕೆಮ್ಮು, ನೆಗಡಿ ಲಕ್ಷಣಗಳು ಕಂಡುಬಂದರೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸೂಚಿಸಬೇಕು.
* ಇದರೊಂದಿಗೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಕೆ.ಬಿ.ಶಿವಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

ರಾಜಧಾನಿಯಲ್ಲಿ ಕೋವಿಡ್ ಅಬ್ಬರ
ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಬರೋಬ್ಬರಿ 150ಕ್ಕೂ ಮೀರಿದೆ. ಮಹಾದೇವಪುರ, ಪೂರ್ವ ವಲಯ ಸೇರಿದಂತೆ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿವೆ. ಕೋವಿಡ್ ಲಕ್ಷಣಗಳಿದ್ದರೆ ಐಎಲ್‌ಐ, ಸಾರಿ ರೋಗಲಕ್ಷಣಗಳಿದ್ದರೆ ಟೆಸ್ಟ್ ಮಾಡಿಸಬೇಕು. ಆರೋಗ್ಯದಲ್ಲಿ ಏರುಪೇರಾದರೆ ಕೂಡಲೇ ವೈದ್ಯರನ್ನ ಭೇಟಿ ಮಾಡಬೇಕು. ಯಾವುದೇ ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಮಾವಳಿಗಳನ್ನು ಪಾಲಿಸಬೇಕು, ಮಾಸ್ಕ್ ಹಾಕಬೇಕು. ಸ್ಯಾನಿಟೈಸೇಷನ್ ಮಾಡಿಕೊಳ್ಳಬೇಕು. ಇತರೆ ಖಾಯಿಲೆಯಿಂದ ಬಳಲುತ್ತಿದ್ದರೆ ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಕೋವಿಡ್ ಸಂಬಂಧಿಸಿದಂತೆ ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ನಾವು ಎಂತಹ ಪರಿಸ್ಥಿತಿ ಎದುರಿಸಲೂ ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್‌ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಸಿಎಂ ಹೇಳಿದ್ದರು. ಸುಮಾರು 65 ಇದ್ದ ಕೋವಿಡ್ ಪ್ರಕರಣಗಳು ದಿನೇ ದಿನೇ ಏರುತ್ತಿವೆ. ಆದರೆ ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ. ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿಲ್ಲ. ಆದರೆ ವೃದ್ಧರು, ಕಾಯಿಲೆ ಇರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ ಎಂದಿದ್ದರು.












Click it and Unblock the Notifications