ರೈತರಿಗೆ ಗುಡ್‌ನ್ಯೂಸ್; ₹2,500 ಬರ ಪರಿಹಾರ ಹಣ ಖಾತೆಗೆ ಜಮೆ ಆಗೋದು ಯಾವಾಗ? ಸಚಿವರ ಮಾಹಿತಿ
ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆ ಮೂಡಿದೆ. ಪ್ರತಿ ಎಕರೆಗೆ ₹2,500 ತಾತ್ಕಾಲಿಕ ಬರ ಪರಿಹಾರ ಘೋಷಿಸಲಾಗಿದ್ದು, ಈ ಹಣ ಇನ್ನೆರಡು ದಿನಗಳಲ್ಲಿ ರೈತರ ಖಾತೆಗೆ ಜಮೆಯಾಗಲಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಕೇಂದ್ರದಿಂದ ಹೆಚ್ಚಿನ ಪರಿಹಾರ ನಿರೀಕ್ಷೆಯಲ್ಲಿದ್ದು, ಕೇಂದ್ರ ಅಧ್ಯಯನ ತಂಡವೂ ರಾಜ್ಯದಲ್ಲಿ ಬರ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಿದೆ.
ಮಂಡ್ಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ರೈತ ಮುಖಂಡರ ಸಭೆಯಲ್ಲಿ ರೈತರ ಕುಂದುಕೊರತೆ, ಬರ ಪರಿಸ್ಥಿತಿ, ಕುಡಿಯುವ ನೀರು, ಕಾವೇರಿ ನೀರು ಹಾಗೂ ಜಿಲ್ಲೆಯ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಮಾತನಾಡಿ, ರೈತರಿಗೆ ನೋವಾಗುವ ಯಾವುದೇ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರ ಹಾಗೂ ಮಾರ್ಗದರ್ಶನವಿದ್ದರೆ ಅವರ ಅಗತ್ಯಗಳಿಗೆ ಸ್ಪಂದಿಸಲು ತಾನು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದರು.

Karnataka Government: ಕಾವೇರಿ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ
ಮೇಕೆದಾಟು ಯೋಜನೆಯೇ ಕಾವೇರಿ ಬಿಕ್ಕಟ್ಟಿಗೆ ಶಾಶ್ವತ ಪರಿಹಾರ ಎಂದು ಪ್ರತಿಪಾದಿಸಿದ ಸಚಿವರು, ಯೋಜನೆಯನ್ನು ತಮ್ಮ ಸರ್ಕಾರದ ಅವಧಿಯಲ್ಲೇ ಜಾರಿಗೊಳಿಸುವ ಸಂಕಲ್ಪ ಹೊಂದಿರುವುದಾಗಿ ಹೇಳಿದರು. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಾಂತ್ರಿಕ ಹಾಗೂ ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಕೇಂದ್ರ ಜಲಶಕ್ತಿ ಆಯೋಗದೊಂದಿಗೆ ಅಧಿಕಾರಿಗಳು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದರು.
6ನೇ ಹಂತದ ಕುಡಿಯುವ ನೀರಿನ ಯೋಜನೆಯು ಕೇವಲ ಕುಡಿಯುವ ನೀರು ಪೂರೈಸುವ ಉದ್ದೇಶ ಹೊಂದಿದೆ. ಅಗತ್ಯವಿದ್ದರೆ ನೀರಾವರಿ ತಜ್ಞರೊಂದಿಗೆ ಚರ್ಚಿಸಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು. ಈ ಸಭೆಯಲ್ಲಿ ಮಂಡ್ಯದ ರೈತರೂ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಬಹುದು ಎಂದು ತಿಳಿಸಿದರು.
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವ ವಿಚಾರದಲ್ಲಿ, ಹಿಂದಿನ ಅವಧಿಗೆ ಹೋಲಿಸಿದರೆ ಈ ಬಾರಿ ಕಡಿಮೆ ಪ್ರಮಾಣದ ನೀರು ಹರಿಸಲಾಗಿದೆ. ರಾಜ್ಯದ ಬರ ಪರಿಸ್ಥಿತಿ ಹಾಗೂ ಜಲಾಶಯಗಳಲ್ಲಿನ ನೀರಿನ ವಾಸ್ತವ ಸ್ಥಿತಿಯನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮುಂದುವರಿದಿದೆ. ಮಂಡ್ಯದ ನೂಗು ಜಲಾಶಯ ಹಾಗೂ ತಣ್ಣೂರು ಕೆರೆ ಬಳಿ ರಿಸರ್ವಾಯರ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಇದರಿಂದ ಜಿಲ್ಲೆಯ ನೀರಿನ ಸಮಸ್ಯೆ ಪರಿಹಾರವಾಗುವ ವಿಶ್ವಾಸವಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
ಮನ್‌ಮುಲ್ ಹಗರಣ: ಯಾರಿಗೂ ಕೃಪಾಶೀರ್ವಾದ ಇಲ್ಲ
ಮನ್‌ಮುಲ್ ಹಗರಣದ ಕುರಿತು ಮಾತನಾಡಿದ ಸಚಿವರು, ಪ್ರಕರಣ ಬೆಳಕಿಗೆ ಬಂದ 24 ಗಂಟೆಯೊಳಗೆ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಆರೋಪಿಗಳು ಯಾರೇ ಆಗಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಅಗತ್ಯಬಿದ್ದರೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಹಾಗೂ ಪರಿಸ್ಥಿತಿ ಅವಶ್ಯಕತೆ ತಂದರೆ ಇಡೀ ಆಡಳಿತ ಮಂಡಳಿಯನ್ನೇ ಸೂಪರ್‌ಸೀಡ್ ಮಾಡಲಾಗುವುದು ಎಂದರು.
ಹಾಲಿನ ದರ ಏರಿಕೆ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದ್ದು, ಅನುಮತಿ ದೊರೆತರೆ ತಕ್ಷಣವೇ ದರ ಹೆಚ್ಚಿಸಲಾಗುವುದು. ಇಲ್ಲವಾದರೆ ಚುನಾವಣೆ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಕ್ಕರೆ ಕಾರ್ಖಾನೆಗಳ ಬಾಕಿ ಪಾವತಿ
ಮೈಶುಗರ್ ಸೇರಿದಂತೆ ರಾಜ್ಯದ ಸಕ್ಕರೆ ಕಾರ್ಖಾನೆಗಳ ಸಮಸ್ಯೆ ಕುರಿತು ಮಾತನಾಡಿದ ಸಚಿವರು, ರಾಜ್ಯದ 81 ಸಕ್ಕರೆ ಕಾರ್ಖಾನೆಗಳ ಬಾಕಿ ಹಣವನ್ನು ಅಕ್ಟೋಬರ್ 15ರೊಳಗೆ ಬಿಡುಗಡೆ ಮಾಡುವ ಗುರಿ ಹೊಂದಲಾಗಿದೆ ಎಂದರು. ಮುಂದಿನ ವಾರ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳ ಕುರಿತು ಪ್ರತ್ಯೇಕ ಸಭೆ ನಡೆಸಲಾಗುವುದು. ಒಂದು ವರ್ಷದೊಳಗೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವುದು ತಮ್ಮ ಗುರಿ ಎಂದು ತಿಳಿಸಿದರು.
ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿಗೆ ಸಂಬಂಧಿಸಿದ ವಿಳಂಬದ ಬಗ್ಗೆ ರೈತರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ ಅವರು, ಮುಂದಿನ ವಾರದೊಳಗೆ ಆಸ್ಪತ್ರೆಗೆ ಕಾಯಕಲ್ಪ ನೀಡಲಾಗುವುದು. ವೈದ್ಯಕೀಯ ಕಾಲೇಜಿಗೆ ಸೇರಿದ ಜಾಗದ ಒತ್ತುವರಿ ತೆರವುಗೊಳಿಸಲು ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದರು.
ಸಭೆಯಲ್ಲಿ ರೈತರು ಮೇಕೆದಾಟು ಯೋಜನೆ ಶೀಘ್ರ ಜಾರಿ, ಬರ ಪರಿಹಾರವನ್ನು ಪ್ರತಿ ಎಕರೆಗೆ ₹30 ಸಾವಿರಕ್ಕೆ ಹೆಚ್ಚಿಸುವುದು, ವೃದ್ಧಾಪ್ಯ ವೇತನ ₹3 ಸಾವಿರಕ್ಕೆ ಏರಿಕೆ, ಜಾನುವಾರುಗಳಿಗೆ ಕುಡಿಯುವ ನೀರು, ಕೆರೆಗಳ ಒತ್ತುವರಿ ತೆರವು ಸೇರಿದಂತೆ ಹಲವು ಬೇಡಿಕೆಗಳನ್ನು ಸಚಿವರ ಮುಂದಿಟ್ಟರು.


Click it and Unblock the Notifications
