ಮೈಕ್ರೋಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಮಹತ್ವದ ಹೆಜ್ಜೆ ಇರಿಸಿದ ರಾಜ್ಯ ಸರ್ಕಾರ
ಕರ್ನಾಟಕದಲ್ಲಿ ಕಳೆದ ಒಂದು ತಿಂಗಳಿನಿಂದಲೂ ಮೈಕ್ರೋಫೈನಾನ್ಸ್ ಸಂಸ್ಥೆಗಳಿಂದ ಜನರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಇದೀಗ ಕೊನೆಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು. ರಾಜ್ಯದಲ್ಲಿ ಮೈಕ್ರೋಫೈನಾನ್ಸ್‌ಗಳ ಕಿರುಕುಳಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಮುಂದಾಗಿದೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ ಕೊಡುವ, ಕಿರುಕುಳ ನೀಡುವುದನ್ನು ನಿಷೇಧಿಸುವ "ಕರ್ನಾಟಕ ಮೈಕ್ರೋಫೈನಾನ್ಸ್ ಪ್ರಿವೆನ್ಷನ್ ಆಫ್ ಕೋಯೆರ್ಸಿವ್ ಆ್ಯಂಡ್ ಇನ್‌ಹ್ಯೂಮನ್ ಆ್ಯಕ್ಷನ್ 2025" ಮಸೂದೆ ಕುರಿತು ಕಾನೂನು ಸಚಿವ ಎಚ್.ಕೆ.ಪಾಟೀಲ್ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಕಂದಾಯ ಮತ್ತು ಆರ್ಥಿಕ ಇಲಾಖೆಗಳ ಅಧಿಕಾರಿಗಳೊಂದಿಗೆ ಮಹತ್ವದ ಸಭೆಯನ್ನು ನಡೆಸಿದ್ದಾರೆ.
ಕಳೆದ ಒಂದು ತಿಂಗಳಿನಿಂದಲೂ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಕಿರುಕುಳ ಮಿತಿ ಮೀರಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಕಂಪನಿಗಳು ಕೊಡುವ ಕಿರುಕುಳದಿಂದ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು. ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಹಲವು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಈ ಸಂಬಂಧ ಮಾತನಾಡಿರುವ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದನ್ನು ತಡೆಗಟ್ಟಲು ತ್ವರಿತವಾಗಿ ಕಾನೂನು ತರಬೇಕು ಎಂದು ಮುಖ್ಯಂಮತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಕೆಲವರು ಕಿರುಸಾಲ ತೆಗೆದುಕೊಳ್ಳುತ್ತಾರೆ. ಸಾಲ ವಸೂಲಿ ಮಾಡಲು ಅಮಾನವೀಯವಾಗಿ ವರ್ತಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಘಟನೆಗಳನ್ನು ನಿಲ್ಲಿಸಬೇಕಿದೆ. ಜನ ಊರು ಬಿಡುತ್ತಿರುವುದು, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ವರದಿಯಾಗುತ್ತಿವೆ. ಹೀಗಾಗಿ ಮಸೂದೆ ತರಲು ಬಜೆಟ್ ಅಧಿವೇಶನದವರೆಗೂ ಕಾಯಲು ಆಗುವುದಿಲ್ಲ. ಸಭೆಯ ಪ್ರಮುಖ ಅಂಶಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ, ಕ್ಯಾಬಿನೆಟ್ ಮುಂದೆ ತರಲಾಗುವುದು ಎಂದು ಅವರು ಹೇಳಿದ್ದಾರೆ.
ಮೈಕ್ರೋಫೈನಾನ್ಸ್‌ಗಳ ಅಮಾನುಷ ವರ್ತನೆಯ ಘಟನೆಗಳು ಗಮನಕ್ಕೆ ಬಂದ ಕೂಡಲೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಜನರೊಂದಿಗೆ ಒತ್ತಾಯ ಪೂರ್ವಕವಾಗಿ ನಡೆದುಕೊಳ್ಳುವುದು ಸಮಾಜಕ್ಕೆ ಒಳ್ಳೆಯದಲ್ಲ ಎಂದೂ ಅವರು ತಿಳಿಸಿದ್ದಾರೆ. ಸಾಲ ವಸೂಲಾತಿ ಪ್ರಮಾಣ ಕಡಿಮೆ ಇರಬಹುದು. ಮೈಕ್ರೋಫೈನಾನ್ಸ್ ಸಂಸ್ಥೆಗಳ ಮೇಲಾಧಿಕಾರಿಗಳ ಒತ್ತಡವಿರಬಹುದು. ಆದರೆ, ಈ ರೀತಿಯಾಗಿ ನಡೆದುಕೊಳ್ಳುವುದು ಸರಿಯಾದ ಕ್ರಮವಲ್ಲ. ಸಾಲ ಪಡೆಯುವುದು ಮತ್ತು ನೀಡುವುದರ ಕುರಿತು ಜನರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಮೈಕ್ರೋಫೈನಾನ್ಸ್ ಸಂಸ್ಥೆಗಳ ಆರ್ಥಿಕ ವ್ಯವಹಾರಗಳಿಗೆ ಕಡಿವಾಣ ಹಾಕುತ್ತಿಲ್ಲ. ಸಾಲ ಇಷ್ಟೇ ಕೊಡಬೇಕು ಎಂಬುದನ್ನು ಹೇಳುತ್ತಿಲ್ಲ. ಆದರೆ, ಜನರಿಂದ ಸಾಲ ವಸೂಲಿ ಮಾಡುವ ಕ್ರಮ ಸರಿಯಾಗಿಲ್ಲ. ಸರ್ಕಾರ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ದಿನಗಳಲ್ಲಿ ಕಠಿಣ ಕಾನೂನು ರೂಪಿಸಲಾಗುವುದು ಎಂದಿದ್ದಾರೆ.












Click it and Unblock the Notifications