ಕೂಲಿ ಹಣ ಪಾವತಿಯಲ್ಲಿ ವಿಳಂಬ; 308 ಪಿಡಿಒ ಸೇರಿ 394 ಅಧಿಕಾರಿಗಳಿಗೆ ನೋಟಿಸ್!
ಬೆಂಗಳೂರು: ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ - ವಿಬಿಜಿ ರಾಮ್ ಜಿ ಅಡಿಯಲ್ಲಿ ಕೆಲಸ ಮಾಡಿದ ಅಕುಶಲ ಕಾರ್ಮಿಕರಿಗೆ ಕೂಲಿ ಹಣ ಪಾವತಿಸುವಲ್ಲಿ ವಿಳಂಬ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ, 308 ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), 12 ಉಪ ಕಾರ್ಯದರ್ಶಿಗಳು ಹಾಗೂ 74 ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದ್ದಾರೆ.
ಈ ಸಂಬಂಧ ಇಲಾಖೆಯ ಕಾರ್ಯದರ್ಶಿ ಹಾಗೂ 12 ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಚಿವರು ಲಿಖಿತ ಸೂಚನೆ ನೀಡಿದ್ದಾರೆ. ವಿಬಿಜಿ ರಾಮ್ ಜಿ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ 15 ದಿನಗಳ ಒಳಗಾಗಿ ಕೂಲಿ ಹಣ ಪಾವತಿಸಬೇಕು. ಈ ಗಡುವಿನೊಳಗೆ ಹಣ ಪಾವತಿಯಾಗದಿದ್ದರೆ ಸಂಬಂಧಪಟ್ಟ ಪಿಡಿಒಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಈ ಹಿಂದೆಯೇ ಸ್ಪಷ್ಟ ಸೂಚನೆ ನೀಡಲಾಗಿತ್ತು. ಆದರೂ ರಾಜ್ಯದ 12 ಜಿಲ್ಲೆಗಳ 311 ಗ್ರಾಮ ಪಂಚಾಯತಿಗಳಲ್ಲಿ ಕೂಲಿ ಪಾವತಿಯಲ್ಲಿ ವಿಳಂಬವಾಗಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

311 ಗ್ರಾಮ ಪಂಚಾಯತಿಗಳಲ್ಲಿ ಕೂಲಿ ಪಾವತಿ ವಿಳಂಬ
ಗ್ರಾಮ ಪಂಚಾಯಿತಿಗಳಿಗೆ ವಿಬಿಜಿ ರಾಮ್ ಜಿ ಯೋಜನೆಯಡಿ ಕೂಲಿ ಹಣ ಬಿಡುಗಡೆಯಾಗಿದ್ದರೂ, ಕೆಲಸ ಮಾಡಿದ ಅಕುಶಲ ಕಾರ್ಮಿಕರಿಗೆ ಹಣ ಪಾವತಿಸದಿರುವುದನ್ನು ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಬರ ಪರಿಸ್ಥಿತಿಯಲ್ಲಿಯೂ ಗ್ರಾಮೀಣ ಜನರು ಉದ್ಯೋಗ ಖಾತ್ರಿ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದು, ಜೀವನೋಪಾಯಕ್ಕಾಗಿ ಬೇರೆ ಪ್ರದೇಶಗಳಿಗೆ ಗುಳೆ ಹೋಗುವ ಸ್ಥಿತಿ ಎದುರಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಜಿಲ್ಲಾವಾರು ವಿವರಗಳ ಪ್ರಕಾರ, ಬಾಗಲಕೋಟೆಯಲ್ಲಿ 23, ಬೆಳಗಾವಿಯಲ್ಲಿ 52, ಚಾಮರಾಜನಗರದಲ್ಲಿ 13, ಚಿಕ್ಕಮಗಳೂರಿನಲ್ಲಿ 14, ದಕ್ಷಿಣ ಕನ್ನಡದಲ್ಲಿ 15, ಹಾಸನದಲ್ಲಿ 47, ಕೊಡಗಿನಲ್ಲಿ 25, ಮಂಡ್ಯದಲ್ಲಿ 13, ಮೈಸೂರಿನಲ್ಲಿ 53, ಶಿವಮೊಗ್ಗದಲ್ಲಿ 14, ಉಡುಪಿಯಲ್ಲಿ 23 ಹಾಗೂ ವಿಜಯಪುರದಲ್ಲಿ 16 ಗ್ರಾಮ ಪಂಚಾಯತಿಗಳಲ್ಲಿ ಕೂಲಿ ಪಾವತಿಯಲ್ಲಿ ವಿಳಂಬವಾಗಿದೆ. ಈ ಮೂಲಕ ಒಟ್ಟು 311 ಗ್ರಾಮ ಪಂಚಾಯತಿಗಳಲ್ಲಿ ಸಮಸ್ಯೆ ಕಂಡುಬಂದಿದೆ.
ಪಿಡಿಒ, ತಾಲೂಕು ಅಧಿಕಾರಿಗಳಿಗೂ ನೋಟಿಸ್
ಕೂಲಿ ಹಣ ಪಾವತಿಯಲ್ಲಿ ವಿಳಂಬವಾಗಿರುವ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಸಮಜಾಯಿಷಿ ಪಡೆಯಬೇಕು. ಜೊತೆಗೆ, ಈ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಬೇಕಾದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ 12 ಜಿಲ್ಲಾ ಪಂಚಾಯಿತಿಗಳ ಉಪ ಕಾರ್ಯದರ್ಶಿಗಳಿಗೂ ಕಾರಣ ಕೇಳಿ ನೋಟಿಸ್ ನೀಡುವಂತೆ ಸಚಿವರು ಸೂಚಿಸಿದ್ದಾರೆ.
ಮುಂದಿನ ದಿನಗಳಲ್ಲಿ ಯಾವುದೇ ಗ್ರಾಮ ಪಂಚಾಯಿತಿಯಲ್ಲಿಯೂ ಕೂಲಿ ಹಣ ಪಾವತಿಯಲ್ಲಿ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆಯ ಕಾರ್ಯದರ್ಶಿ ಮತ್ತು ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಖಂಡ್ರೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
Karnataka Government: ಯೋಜನೆಯ ಉದ್ದೇಶಕ್ಕೆ ಧಕ್ಕೆಯಾಗದಿರಲಿ
ಕೇಂದ್ರ ಸರ್ಕಾರವು ಮನರೇಗಾ ಯೋಜನೆಯಲ್ಲಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದ 90:10ರ ಅನುಪಾತವನ್ನು ವಿಬಿಜಿ ರಾಮ್ ಜಿ ಯೋಜನೆಯಲ್ಲಿ 60:40ಕ್ಕೆ ಬದಲಾಯಿಸಿದೆ. ಇದರಿಂದ ರಾಜ್ಯ ಸರ್ಕಾರದ ಮೇಲಿನ ಆರ್ಥಿಕ ಹೊರೆ ಹೆಚ್ಚಾಗಿದೆ. ಆದರೂ ಗ್ರಾಮೀಣ ಬಡವರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡವರು ಹಾಗೂ ಭೂರಹಿತ ಕೂಲಿ ಕಾರ್ಮಿಕರಿಗೆ ನೆರವಾಗಬೇಕು ಮತ್ತು ಅವರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಡೆಯಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಜುಲೈ 1ರಿಂದ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಚಿವರು ತಿಳಿಸಿದ್ದಾರೆ.
ಆದರೆ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆಯಿಂದ ಯೋಜನೆಯ ಮೂಲ ಉದ್ದೇಶವೇ ಹಾಳಾಗುವ ಅಪಾಯವಿದೆ. ಆದ್ದರಿಂದ ಕೂಲಿ ಪಾವತಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಗ್ರಾಮೀಣ ಕಾರ್ಮಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.


Click it and Unblock the Notifications
