Covid Scam: ಕೋವಿಡ್ ಪ್ರಕರಣದ ತನಿಖೆ CIDಗೆ ವಹಿಸಿ ರಾಜ್ಯ ಸರ್ಕಾರ ಆದೇಶ: ಬಿಜೆಪಿ ನಾಯಕರಿಗೆ ಮುಳುವಾಗುತ್ತಾ?
ಬೆಂಗಳೂರು, ಫೆಬ್ರವರಿ 14: ಕೋವಿಡ್ ಅಕ್ರಮ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ.
ಕೋವಿಡ್ ಹಗರಣ ವಿಚಾರ ಕರ್ನಾಟಕ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯ ರಾಜಕೀಯದಲ್ಲಿ ಭಾರಿ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದ್ದ ಕೋವಿಡ್ ಹಗರಣದ ತನಿಖೆಯನ್ನು ಇದೀಗ ಅಪರಾಧ ತನಿಖಾ ಇಲಾಖೆಗೆ (CID) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಸೆಂಬರ್ 13 ರಂದು ವಿಧಾನಸೌಧದ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು, ಎಫ್ ಐ ಆರ್ ದಾಖಲಾದ ಎರಡು ತಿಂಗಳ ಬಳಿಕ ಕೋವಿಡ್ ಪ್ರಕರಣದ ತನಿಖೆ ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಪಿಜಿ ಗಿರೀಶ್, ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕ ಜೆಪಿ ರಘು, ಚುನಾಯಿತ ಪ್ರತಿನಿಧಿಗಳು ಸೇರಿ ಇತರರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಮೊದಲು ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಣಯಿಸಿತ್ತು. ಆದರೆ ಎಸ್ ಐಟಿ ಮುಖ್ಯಸ್ಥರಾಗಲು ಕೆಲ ಹಿರಿಯ ಐಪಿಎಸ್ ಅಧಿಕಾರಿ ಗಳು ಹಿಂದೇಟು ಹಾಕಿದ ಕಾರಣಕ್ಕೆ ಎಫ್‌ಐಆರ್ ದಾಖಲಾದ ಎರಡು ತಿಂಗಳ ಬಳಿಕ ಈಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿದೆ ಎನ್ನಲಾಗಿದೆ.
2023 ರ ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಹಲವು ಹಗರಣಗಳು ಬೆಳಕಿಗೆ ಬಂದಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಇತ್ಯಾದಿಗಳ ವಿರುದ್ಧ ವಿಪಕ್ಷಗಳು ನಿರಂತರವಾಗಿ ಪ್ರತಿಭಟನೆಯನ್ನ ನಡೆಸುತ್ತಾ ವಾಗ್ದಾಳಿ ನಡೆಸಿವೆ. ಹೀಗಾಗಿ ಕಾಂಗ್ರೆಸ್ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿ ಹಗರಣದ ಬಗ್ಗೆ ತನಿಖೆಗೆ ಕಾಂಗ್ರೆಸ್ ಮುಂದಾಗಿದೆ.
ಕೋವಿಡ್ ಅಕ್ರಮದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವ ಬಗ್ಗೆ ಸಚಿವ ಸಂಪುಟ ನಿರ್ಧಾರ ಕೈಗೊಂಡಿತ್ತು. ಆದರೆ ಹಗರಣದಲ್ಲಿ ಪ್ರಭಾವಿ ರಾಜಕಾರಣಿಗಳು ಹಾಗೂ ಐಎಎಸ್ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಎಸ್ಐಟಿ ನೇತೃತ್ವ ವಹಿಸಲು ಐಪಿಎಸ್ ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೀಗ ಕರ್ನಾಟಕ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶಿಸಿದೆ.
ಕೋವಿಡ್ ಸಂಕ್ರಾಮಿಕದ ಸಂದರ್ಭದಲ್ಲಿ ಎನ್ 95 ಮಾಸ್ಕ್, ಪಿಪಿಇ ಕಿಟ್ ಸೇರಿದಂತೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 167 ಕೋಟಿ ರೂಪಾಯಿ ಅಕ್ರಮ ಎಸಗಲಾಗಿದೆ ಎಂದು ವಿಧಾನಸೌಧ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕ ಅಧಿಕಾರಿ ಡಾ. ಎಂ ವಿಷ್ಣು ಪ್ರಸಾದ್ ದೂರ್ ನೀಡಿದ್ದರು. ಇದರ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಕೋವಿಡ್ ಸಂಕ್ರಾಮಿಕದ ಸಂದರ್ಭದಲ್ಲಿ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಕ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾಗಿಯಾಗಿರುವ ಕಮಲ ಪಡೆಯ ನಾಯಕರಿಗೆ ಈ ಪ್ರಕರಣ ಮುಳುವಾಗುವ ಸಾಧ್ಯತೆ ಇದೆ.












Click it and Unblock the Notifications