ಅರಣ್ಯ ಪ್ರದೇಶಗಳಲ್ಲಿ ಕಾಳ್ಗಿಚ್ಚು, ಸಿಐಡಿ ತನಿಖೆಗೆ ಸಿದ್ದರಾಮಯ್ಯ ಸೂಚನೆ
ರಾಜ್ಯದ ಹಲವೆಡೆ ಅರಣ್ಯ ಪ್ರದೇಶಗಳಲ್ಲಿ ಕಾಣಿಸಿಕೊಂಡಿರುವ ಕಾಳ್ಗಿಚ್ಚಿಗೆ ಪ್ರಕರಣಗಳನ್ನು ಸಿಐಡಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಬೆಂಗಳೂರು, ಮಾರ್ಚ್. 07 : ಬಂಡೀಪುರ, ಶ್ರೀರಂಗಪಟ್ಟಣ ಹಾಗೂ ಕಪ್ಪತಗುಡ್ಡ ಸೇರಿದಂತೆ ರಾಜ್ಯದ ಹಲವೆಡೆ ಅರಣ್ಯ ಪ್ರದೇಶಗಳಲ್ಲಿ ಕಾಣಿಸಿಕೊಂಡಿರುವ ಕಾಳ್ಗಿಚ್ಚಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ಕಾಳ್ಗಿಚ್ಚು ಮತ್ತು ವನ್ಯಜೀವಿಗಳಿಗೆ ಕುಡಿಯುವ ನೀರಿಗೆ ಎದುರಾಗಿರುವ ಸಮಸ್ಯೆ ಕುರಿತು ಅರಣ್ಯ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಸಿದ್ದರಾಮಯ್ಯ ಅವರು, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.[10 ದಿನದಲ್ಲಿ 4 ಕಡೆ ಕಾಳ್ಗಿಚ್ಚು, ನೂರಾರು ಎಕರೆ ಭಸ್ಮ, ಆದರೆ ಕಾರಣ ಗೊತ್ತಿಲ್ಲ]

'ಅರಣ್ಯ ಕಾಪಾಡುವ ವಿಷಯದಲ್ಲಿ ಅಧಿಕಾರಿಗಳು ಚೆಲ್ಲಾಟ ಆಡಬಾರದು. ಕಾಳ್ಗಿಚ್ಚಿನಿಂದ ಅರಣ್ಯ ಪ್ರದೇಶ ಭಾರಿ ಪ್ರಮಾಣದಲ್ಲಿ ಹಾನಿಗೆ ಒಳಗಾಗಿದೆ. ಇದಕ್ಕೆ ಯಾರು ಹೊಣೆ' ಎಂದು ಪ್ರಶ್ನಿಸಿದರು.
ಇದೇ ವೇಳೆ ಇತ್ತೀಚೆಗೆ ಬಂಡಿಪುರ ಹುಲಿ ಸಂರಕ್ಷಣಾ ಪ್ರದೇಶದ ಕಲ್ಲೆರೆ ವಲಯದಲ್ಲಿ ಕಾಡ್ಗಿಚ್ಚು ನಂದಿಸುವ ಕಾರ್ಯದಲ್ಲಿ ತೊಡಗಿದ್ದ ವೇಳೆ ಪ್ರಾಣ ಕಳೆದುಕೊಂಡ ಅರಣ್ಯ ರಕ್ಷಕರ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವಂತೆ ಸಿದ್ದರಾಮಯ್ಯ ಸೂಚನೆ ನೀಡಿದರು.
ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅರಣ್ಯ ಸಚಿವ ರಮಾನಾಥ ರೈ, 'ಕಾಡ್ಗಿಚ್ಚು ಪ್ರಕರಣಗಳ ಕುರಿತು ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ. ಕಾಡಿನಲ್ಲಿ ಬೆಂಕಿ ಅನಾಹುತಗಳು ನಡೆಯದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡುವಂತೆಯೂ ಸೂಚನೆ ನೀಡಲಾಗಿದೆ' ಎಂದು ಹೇಳಿದರು.
ಬಂಡೀಪುರ, ಬಿಳಿಗಿರಿ ರಂಗನ ಬೆಟ್ಟ ಶ್ರೀರಂಗಪಟ್ಟಣ ಮತ್ತು ಬಾಳೆಹೊನ್ನೂರು ವಲಯದ ಮಧುಗುಣಿ ಅರಣ್ಯ ಪ್ರದೇಶ ಸೇರಿದಂತೆ ರಾಜ್ಯಾದ್ಯಂತ ಹಲವು ಕಡೆ ಅರಣ್ಯ ಪ್ರದೇಶಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದ್ದವು.












Click it and Unblock the Notifications