ಕನ್ನಡಿಗರಿಗೆ ಗುಡ್ನ್ಯೂಸ್; ಖಾಸಗಿ ಕಂಪನಿಗಳಲ್ಲಿ ಶೇ.75ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ
ಬೆಂಗಳೂರು, ಜುಲೈ 17: ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳು ನಿರ್ವಹಣಾ ಸ್ಥಾನಗಳಲ್ಲಿ ಶೇಕಡಾ 50 ರಷ್ಟು ಮತ್ತು ನಿರ್ವಹಣೇತರ ಹುದ್ದೆಗಳಲ್ಲಿ ಶೇಕಡಾ 75 ರಷ್ಟು ಹುದ್ದೆಗಳನ್ನು ಸ್ಥಳೀಯ ಅಭ್ಯರ್ಥಿಗಳಿಗೆ ಕಾಯ್ದಿರಿಸಬೇಕೆಂಬ ಕಡ್ಡಾಯಗೊಳಿಸುವ ಮಸೂದೆಯನ್ನು ಕರ್ನಾಟಕ ಕ್ಯಾಬಿನೆಟ್ ಅನುಮೋದಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡಿಗರಿಗೆ ಶುಭ ಸುದ್ದಿ ನೀಡಿದ್ದಾರೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಲ್ಪಿಸುವ ಐತಿಹಾಸಿಕ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಮುಂದೆ ಬರಲಿರುವ ಸರ್ಕಾರದ ಹೊಸ ನಿಯಮ ಐಟಿ ಕಂಪನಿಗಳಿಗೂ ಅನ್ವಯ ಆಗಲಿದೆ. ಆಡಳಿತ (ಮ್ಯಾನೇಜ್ ಮೆಂಟ್) ಕೋಟಾದಡಿ ಶೇಕಡಾ ಮೀಸಲು ಇಡಲಾಗುತ್ತದೆ. ಆಡಳಿತಾತ್ಮಕ ಕೋಟಾದಡಿ ಸೂಪರ್ ವೈಸರ್, ಮ್ಯಾನೇಜರ್, ತಾಂತ್ರಿಕ ತಜ್ಞರು ಸೇರಿದಂತೆ ಹಲವು ಹುದ್ದೆಗಳು ಬರಲಿದೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
— CM of Karnataka (@CMofKarnataka) July 17, 2024
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ… pic.twitter.com/efmv4gJ25d
ವಿಧೇಯಕ ಮಂಡನೆಗೆ ಸಂಪುಟ ಒಪ್ಪಿಗೆ
ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸೋಮವಾರ ನಡೆದ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ.
'ದಿ ಕರ್ನಾಟಕ ಸ್ಟೇಟ್ ಎಂಪ್ಲಾಯ್ಮೆಂಟ್ ಆಫ್ ಲೋಕಲ್ ಕ್ಯಾಡಿಡೇಟ್ಸ್ ಇನ್ ದಿ ಇಂಡಸ್ಟ್ರೀಸ್, ಫ್ಯಾಕ್ಟರೀಸ್ ಆ್ಯಂಡ್ ಲೋಕಲ್ ಎಷ್ಟಾಬ್ಲಿಷ್‌ಮೆಂಟ್ ಬಿಲ್-2024 ವಿಧೇಯಕದಂತೆ ಮ್ಯಾನೇಜ್‌ಮೆಂಟ್ ಹುದ್ದೆಗಳು ಶೇ.50 ಹಾಗೂ ನಾನ್ ಮ್ಯಾನೇಜ್‌ಮೆಂಟ್ ಶೇ.75ರಷ್ಟು ಹುದ್ದೆಗಳು ಸ್ಥಳೀಯರಿಗೆ ಮೀಸಲಿಡಲಾಗುತ್ತದೆ.
ಕರ್ನಾಟಕದಲ್ಲಿಯೇ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಬರುವವರು, ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಪಾಸಾದವರನ್ನು ಸ್ಥಳೀಯರು ಎಂದು ಪರಿಗಣಿಸಲಾಗುವುದು. ಮ್ಯಾನೇಜ್ಮೆಂಟ್ನಲ್ಲಿ ಸೂಪರ್‌ವೈಸರ್, ಮ್ಯಾನೇಜಿರಿಯಲ್, ಟೆಕ್ನಿಕಲ್, ಆಪರೇಷನಲ್, ಆಡಳಿತ ಸೇರಿ ಉನ್ನತ ಹುದ್ದೆಗಳಲ್ಲಿ ಶೇ.50 ಉದ್ಯೋಗ ಸ್ಥಳೀಯರಿಗೆ ಮೀಸಲಿಡಲಾಗುವುದು. ಇನ್ನು ನಾನ್-ಮ್ಯಾನೇಜ್ಮೆಂಟ್ನಲ್ಲಿ ಕ್ಲರ್ಕ್‌ಗಳು, ಕೌಶಲ, ಕೌಶಲ ರಹಿತ ಹಾಗೂ ಅರೆಕೌಶಲ, ಗುತ್ತಿಗೆ ನೌಕರ ಹಾಗೂ ಐಟಿ ಹುದ್ದೆಗಳಲ್ಲಿ ಶೇ.75 ಮೀಸಲು ಸ್ಥಳೀಯರಿಗೆ ನೀಡುವ ವಿಧೇಯಕ ಇದಾಗಿದೆ.
ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ದಂಡ ವಿಧಿಸುವ ಅಂಶವನ್ನೂ ವಿಧೇಯಕದಲ್ಲಿ ಸೇರಿಸಲಾಗಿದೆ. ಕನಿಷ್ಠ 10 ಸಾವಿರ ರೂ. ಹಾಗೂ 25 ಸಾವಿರ ರೂ.ಗಳ ವರೆಗೆ ದಂಡ ವಿಸ್ತರಣೆ ಮಾಡಲು ಅವಕಾಶ ನೀಡಲಾಗುತ್ತದೆ. ಆ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧಿಸಲಾಗುತ್ತದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಈ ನಿಟ್ಟಿನಲ್ಲಿ ವಿಧೇಯಕವು ಮಹತ್ವದ ಪಾತ್ರ ವಹಿಸಲಿದೆ. ಕನ್ನಡಿಗ ನೌಕರರ ಜೀವನ ಭದ್ರತೆಗೆ ಇದು ಸಹಾಯವಾಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ.
ಇದೇ ವಿಚಾರವಾಗಿ ವಿಧಾನಸಭೆ ಕಲಾಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಸ್ವಾಭಿಮಾನ ಎತ್ತಿಹಿಡಿಯಬೇಕು ಅಂತ ಬಂದಿದೆ. ಕನ್ನಡ ಬೋರ್ಡ್, ಭಾಷೆ, ಧ್ವಜ ಬಳಕೆ, ನಮ್ಮ ಸಂಸ್ಕೃತಿ, ಕಡತಗಳಲ್ಲಿ ಕನ್ನಡ ಬಳಕೆ ಆಗಲಿದೆ. ಮುಂದೆ ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಇರಬಹುದು. ಕಡ್ಡಾಯವಾಗಿ ಕನ್ನಡಿಗರಿಗೆ ಇಷ್ಟು ಪರ್ಸೆಂಟ್ ಇರಬೇಕು ಎಂಬ ತೀರ್ಮಾನವನ್ನು ಮಾಡಿದ್ದೇವೆ. ಈ ಸಂಬಂಧ ಬಿಲ್ ತರುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇನ್ನೂ ಈ ವಿಧೇಯಕದ ಪ್ರಕಾರ, ನಿರ್ವಹಣಾ ವರ್ಗದ ಶೇ.50 ಉದ್ಯೋಗಗಳು - ಮೇಲ್ವಿಚಾರಕ, ವ್ಯವಸ್ಥಾಪಕ, ತಾಂತ್ರಿಕ, ಕಾರ್ಯಾಚರಣೆ, ಆಡಳಿತಾತ್ಮಕ ಮತ್ತು ಉನ್ನತ ಹುದ್ದೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಿಡಬೇಕು. ನಿರ್ವಹಣಾೇತರ ವರ್ಗದ ಉದ್ಯೋಗಗಳಲ್ಲಿ ಶೇಕಡಾ 75 ರಷ್ಟು ಕಾಯ್ದಿರಿಸಬೇಕೆಂದು ಬಿಲ್ ನಲ್ಲಿ ನಿರೀಕ್ಷಿಸಲಾಗಿದೆ.
ಖಾಸಗಿ ವಲಯದಲ್ಲಿ ಗ್ರೂಪ್ ಸಿ ಮತ್ತು ಡಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 100ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸುವ ಕಾನೂನನ್ನು ಸರ್ಕಾರ ತರುತ್ತಿದೆ. ಕನ್ನಡ ನಾಡಿನಲ್ಲಿ ಯಾವುದೇ ಕನ್ನಡಿಗರು ಉದ್ಯೋಗದಿಂದ ವಂಚಿತರಾಗಬಾರದು, ನೆಮ್ಮದಿಯ ಜೀವನ ನಡೆಸುವಂತಾಗಬೇಕು ಎಂಬುದು ನಮ್ಮ ಸರ್ಕಾರದ ಆಶಯವಾಗಿದ್ದು, ನಮ್ಮದು ಕನ್ನಡ ಪರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.












Click it and Unblock the Notifications