ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸಾಂವಿಧಾನಿಕ ಹುದ್ದೆಗಳ ಹೆಸರು: ಕಾಂಗ್ರೆಸ್ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ
ಬೆಂಗಳೂರು: ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಸಾಂವಿಧಾನಿಕ ಹುದ್ದೆಗಳ ಹೆಸರನ್ನು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಲೆಟರ್‌ಹೆಡ್‌ನಲ್ಲಿ ಬಳಸಿರುವುದನ್ನು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಮತ್ತೊಂದು ಕೆಟ್ಟ ರಾಜಕೀಯ ಸಂಪ್ರದಾಯಕ್ಕೆ ನಾಂದಿ ಹಾಡಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಧಾನಸಭೆಯ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಮತ್ತು ಉಪಸಭಾಪತಿ ಹುದ್ದೆಗಳು ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಇವು ಪ್ರಜಾಪ್ರಭುತ್ವದ ಮೌಲ್ಯಗಳು, ನಿಷ್ಪಕ್ಷಪಾತತೆ ಮತ್ತು ಸಾಂವಿಧಾನಿಕ ಘನತೆಯನ್ನು ಪ್ರತಿನಿಧಿಸುವ ಅತ್ಯುನ್ನತ ಹುದ್ದೆಗಳಾಗಿವೆ ಎಂದು ಹೇಳಿದ್ದಾರೆ.

ಇಂತಹ ಸಾಂವಿಧಾನಿಕ ಹುದ್ದೆಗಳ ಹೆಸರನ್ನು ಕಾಂಗ್ರೆಸ್ ತನ್ನ ಅಧಿಕೃತ ಪಕ್ಷದ ಲೆಟರ್‌ಹೆಡ್‌ನಲ್ಲಿ ಬಳಸಿರುವುದು ಅತ್ಯಂತ ಆಕ್ಷೇಪಾರ್ಹ ನಡೆ ಎಂದು ಸುರೇಶ್ ಕುಮಾರ್ ಟೀಕಿಸಿದ್ದಾರೆ. ಇದರಿಂದ ಆ ಹುದ್ದೆಗಳ ಪಕ್ಷಾತೀತ ಸ್ವರೂಪಕ್ಕೆ ಧಕ್ಕೆ ಉಂಟಾಗುವುದಲ್ಲದೆ, ಅವುಗಳ ಘನತೆ ಮತ್ತು ಗೌರವಕ್ಕೂ ಕಳಂಕ ತರುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ.
ಮುಂದೆ ಆಯ್ಕೆಯಾಗಬೇಕಿರುವ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿಗಳು ಹಾಗೂ ಉಪಸಭಾಪತಿಗಳ ಹೆಸರುಗಳನ್ನು ಆಡಳಿತ ಪಕ್ಷದ ಲೆಟರ್‌ಹೆಡ್‌ನಲ್ಲಿ ಮುದ್ರಿಸಿ ದೆಹಲಿಯಿಂದಲೇ ಕಳುಹಿಸಿರುವುದು ಇದೇ ಮೊದಲ ಬಾರಿಗೆ ನಡೆಯುತ್ತಿರುವ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.
ಇದು ಕೇವಲ ಸಂಸದೀಯ ಸಂಪ್ರದಾಯಗಳ ಉಲ್ಲಂಘನೆಯಷ್ಟೇ ಅಲ್ಲ, ಸಾಂವಿಧಾನಿಕ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವದ ಮೂಲ ತತ್ವಗಳನ್ನು ಕಡೆಗಣಿಸಿರುವುದರ ಸಂಕೇತವಾಗಿದೆ ಎಂದು ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಸಂವಿಧಾನದ ರಕ್ಷಣೆಯ ಬಗ್ಗೆ ಮಾತನಾಡುವ ಕಾಂಗ್ರೆಸ್, ಆಚರಣೆಯಲ್ಲಿ ಸಾಂವಿಧಾನಿಕ ಸಂಸ್ಥೆಗಳು ಮತ್ತು ಉನ್ನತ ಹುದ್ದೆಗಳನ್ನು ಪಕ್ಷದ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವ ಮೂಲಕ ತನ್ನ ದ್ವಂದ್ವ ನಿಲುವನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ ಎಂದು ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.
ಬಾಯಲ್ಲಿ ಸಂವಿಧಾನದ ರಕ್ಷಣೆ ಎಂದು ಹೇಳಿಕೊಂಡು, ಆಚರಣೆಯಲ್ಲಿ ಸಾಂವಿಧಾನಿಕ ಸಂಸ್ಥೆಗಳು ಮತ್ತು ಉನ್ನತ ಹುದ್ದೆಗಳನ್ನು ಪಕ್ಷದ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವ ಕಾಂಗ್ರೆಸ್‌ನ ದ್ವಂದ್ವ ನೀತಿ ಮತ್ತೊಮ್ಮೆ ಬಹಿರಂಗವಾಗಿದೆ.


Click it and Unblock the Notifications
