Karnataka Syllabus: ಹೊಸ ಶಿಕ್ಷಣ ನೀತಿ: ಬಿಗ್ ಅಪ್‌ಡೇಟ್ ಇಲ್ಲಿದೆ!
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನಡೆಯುತ್ತಿರುವ ತಿಕ್ಕಾಟ ಬರೀ ಗ್ಯಾರಂಟಿಗಳಿಗೆ ಮೀಸಲಾಗಿ ಉಳಿದಿಲ್ಲ. ಇಬ್ಬರ ಕಿತ್ತಾಟ ಶಿಕ್ಷಣ ನೀತಿಗೂ ಬಂದು ತಲುಪಿ, ಒಬ್ಬರ ಮೇಲೊಬ್ಬರು ಆರೋಪ ಮತ್ತು ಪ್ರತ್ಯಾರೋಪ ಮಾಡುತ್ತಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅಖಾಡ ಪ್ರವೇಶ ಮಾಡಿದ್ದು, ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿಯ ಕುರಿತು ಬಿಗ್ ಅಪ್‌ಡೇಟ್ ಕೊಟ್ಟಿದ್ದಾರೆ.
ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದೆ. ಅದೇ ರೀತಿ ಬಿಜೆಪಿ ರಹಿತ ಸರ್ಕಾರಗಳು ಕೂಡ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸುತ್ತಿವೆ. ಹೀಗೆ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಗೇಟ್‌ಪಾಸ್ ಕೊಡಲು ಸಿದ್ದರಾಮಯ್ಯ ಅವರ ಸರ್ಕಾರ ಸಜ್ಜಾಗಿದೆ. ಈ ಕುರಿತು ಇಂದು ಮಹತ್ವದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯ, ಹೀಗಾಗಿಯೇ ಹಳೇ ಶಿಕ್ಷಣ ಪದ್ಧತಿ ಮುಂದುವರೆಸಿ ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದಿದ್ದಾರೆ.

ಕೇಂದ್ರದ ವರ್ತನೆಗೆ ಸಿಎಂ ಖಂಡನೆ
ಇಂದು ಶಿಕ್ಷಣ ನೀತಿ ಬಗ್ಗೆ ನಡೆಸಿದ ಸಭೆಯಲ್ಲಿ ಈ ವಿಷಯವನ್ನು ಸಿಎಂ ತಿಳಿಸಿದ್ದಾರೆ. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ರಾಜ್ಯದ ವಿಷಯ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನ ಕೇಂದ್ರ ಸರ್ಕಾರ ರಾಜ್ಯಗಳ ಮೇಲೆ ಹೇರಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೆ ಹೀಗೆ ಶಿಕ್ಷಣ ನೀತಿಯನ್ನ ಹೇರಲು ಹೊರಟಿರುವುದು ಒಂದು ಹುನ್ನಾರ ಎಂದು ಸಿಎಂ ಸಿದ್ದರಾಮಯ್ಯ ಬೇಸರ ಹೊರಹಾಕಿದ್ದಾರೆ. ಬಹು ಸಂಸ್ಕೃತಿ ಬಹುತ್ವ ಇರುವ ಈ ದೇಶದಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಮಾಡಲು ಆಗದು. ಹಳೇ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿಯನ್ನ ರೂಪಿಸಲು ಒಂದು ಸಮಿತಿ ರಚಿಸಲಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿಗೆ ರಾಜ್ಯ ಸರ್ಕಾರ ತಿರುಗೇಟು ನೀಡಿದೆ.

ಕೇರಳ, ತಮಿಳುನಾಡು ತೀವ್ರ ವಿರೋಧ
ಬಿಜೆಪಿ ಆಳ್ವಿಕೆಯ ಇತರ ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಜಾರಿಗೊಳಿಸಲು ಹಿಂದೇಟು ಹಾಕಿವೆ. ಕೇರಳ, ತಮಿಳುನಾಡು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲ್ಲ ಎಂದು ಕೇಂದ್ರಕ್ಕೆ ಸ್ಪಷ್ಟಪಡಿಸಿವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಇದರಿಂದ ಬಡವರು, ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದವರು, ಗ್ರಾಮೀಣ ಪ್ರದೇಶದವರಿಗೆ ತೊಂದರೆಯಾಗುತ್ತೆ. ಉನ್ನತ ಶಿಕ್ಷಣದಲ್ಲಿ ಪ್ರತಿ ವರ್ಷ ಪ್ರಮಾಣ ಪತ್ರ ನೀಡಿದರೂ, 1 ವರ್ಷ, ಎರಡು ವರ್ಷ ಓದಿದವರಿಗೆ ಎಷ್ಟು ಉದ್ಯೋಗಾವಕಾಶ ದೊರೆಯಲು ಸಾಧ್ಯ? ಉದ್ಯೋಗವಕಾಶ ದೊರೆತು ಹೋದ ಬಡವರ ಮಕ್ಕಳು ಮತ್ತೆ ಓದಲು ಎಷ್ಟು ಅವಕಾಶ ಸಿಗುತ್ತೆ? ಎಂದಿದ್ದಾರೆ.
ಈ ಶಿಕ್ಷಣ ನೀತಿ ಜಾರಿಗೊಳಿಸಲು ಅಗತ್ಯ ಮೂಲಸೌಲಭ್ಯಗಳು ಕೂಡ ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲ ಎಂದ ಸಿಎಂ. ಇದರಿಂದ ಅನಗತ್ಯ ಗೊಂದಲ ಸೃಷ್ಟಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಒಟ್ನಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಧ್ಯೆ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಎದ್ದಿರುವ ಗೊಂದಲ ಮುಂದುವರಿದಿದೆ. ಇದೀಗ ನೇರವಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರು ಸರ್ಕಾರದ ನಿರ್ಧಾರದ ಬಗ್ಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಆದರೆ ಗ್ಯಾರಂಟಿ ವಾರ್ ರೀತಿಯೇ ರಾಷ್ಟ್ರೀಯ ಶಿಕ್ಷಣ ಪದ್ಧತಿ ವಿಚಾರದಲ್ಲೂ ಕಾಂಗ್ರೆಸ್ & ಬಿಜೆಪಿ ಮಧ್ಯೆ ಕಿಚ್ಚು ಹೊತ್ತಿಕೊಳ್ಳುವುದು ಪಕ್ಕಾ.












Click it and Unblock the Notifications