Good News: ರಾಜ್ಯದಲ್ಲಿನ ಸರ್ಕಾರಿ ಶಾಲೆಯ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್
ಬೆಂಗಳೂರು, ನವೆಂಬರ್ 30: ರಾಜ್ಯದಲ್ಲಿ ಸರ್ಕಾರವು ಶಾಲಾ ಮಕ್ಕಳಿಗೆ ಅನುಕೂಲ ಆಗುವಂತೆ ಆಗಾಗ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಹಾಗೆಯೇ ಇದೀಗ ಸರ್ಕಾರಿ ಶಾಲೆಯ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಅದೇನು ಎನ್ನುವ ಪ್ರಶ್ನೆಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ
ರಾಜ್ಯದಲ್ಲಿನ ಸರ್ಕಾರಿ ಶಾಲೆಯ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಇನ್ಮುಂದೆ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಬಿಸಿಹಾಲು ವಿತರಿಸಲು ಮಹತ್ವದ ಆದೇಶ ಹೊರಡಿಸಿದೆ. ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವುದೇ ಇದರ ಉದ್ದೇಶವಾಗಿದೆ ಎನ್ನಲಾಗುತ್ತಿದೆ.

ಸರ್ಕಾರಿ ಶಾಲೆಗಳಲ್ಲಿ ವಿವಿಧ ಯೋಜನೆಗಳಡಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆ ಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದಲ್ಲಿ 276 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇವುದನ್ನು ನೀಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಆಹಾರದ ಪ್ರಮಾಣ ಮತ್ತು ಘಟಕ ವೆಚ್ಚಕ್ಕನುಗುಣವಾಗಿ 2019-20ನೇ ಸಾಲಿನಿಂದ ಮಧ್ಯಾಹ್ನ ಉಪಹಾರ ಯೋಜನೆಯಡಿ ಬೆಳಗಿನ ಉಪಹಾರ, ಬಿಸಿಹಾಲು ಮತ್ತು ಮಧ್ಯಾಹ್ನ ಬಿಸಿಯೂಟ ಒದಗಿಸಲು ಅನುಮೋದನೆ ನೀಡಲಾಗಿರುತ್ತದೆ.
ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಮಾರ್ಗಸೂಚಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಫಲಾನುಭವಿಗಳೆಂದು ಪರಿಗಣಿಸಲಾಗಿದೆ. 2025-26ನೇ ಸಾಲಿನ ಈ ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿರುವ ಯೋಜನಾ ಅನುಮೋದನಾ ಮಂಡಳಿಯ ಸಭಾ ನಡವಳಿಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ಮಕ್ಕಳಿಗೆ ಇವುಗಳನ್ನು ನೀಡಲಾಗುತ್ತದೆ.
ಅಂದರೆ ಬಾಲವಾಟಿಕಾಗಳಲ್ಲಿನ 1,98,270 ಮಕ್ಕಳಿಗೆ ಮಧ್ಯಾಹ್ನ ಉಪಹಾರ ನೀಡಲು 2215.41 ಲಕ್ಷ ರೂಪಯಿ ಕೇಂದ್ರದ ಪಾಲಿನ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ಸದರಿ ಪಿ.ಎ.ಬಿ ಸಭಾ ನಡವಳಿಯಲ್ಲಿ ಪೂರ್ವಪ್ರಾಥಮಿಕ ತರಗತಿಗಳಿಗೆ ಅಗತ್ಯ ಇರುವ ಅಡುಗೆ ಸಹಾಯಕರ ಸಂಭಾವನೆ ಮೊತ್ತವನ್ನು ಪ್ರಾಥಮಿಕ ತರಗತಿಗಳಿಗೆ ಅನುಮೋದನೆ ನೀಡಲಾಗಿರುವ ಅಡುಗೆ ಸಹಾಯಕರ ಸಂಭಾವನೆ ಮೊತ್ತದಲ್ಲಿ ಸೇರಿಸಲಾಗಿದೆ.
ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಏಕ ಕಡತದಲ್ಲಿ ವಿವಿಧ ಯೋಜನೆಗಳಡಿ ಅಂದರೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ವತಿಯಿಂದ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ, ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಅನುಮೋದನೆಗೆ ಕೋರಲಾಗಿದೆ.
ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಜುಲೈ 17, 2025ರಂದು ನಡೆದ ಸಭೆಯ ನಡವಳಿಯಲ್ಲಿ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications