ಖಾಸಗಿ ಶಾಲಾ ಶಿಕ್ಷಕರಿಗೂ ಶೀಘ್ರವೇ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ: ಸಚಿವ ಮಧು ಬಂಗಾರಪ್ಪ

ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿರುವ ಖಾಸಗಿ ಶಾಲಾ ಶಿಕ್ಷಕರ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮುನ್ಸೂಚನೆ ನೀಡಿದೆ. ಸರ್ಕಾರಿ ಶಾಲಾ ಶಿಕ್ಷಕರ ಮಾದರಿಯಲ್ಲೇ ಖಾಸಗಿ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅರ್ಹ ಬೋಧಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಆನೇಕಲ್ ತಾಲ್ಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ವಿಷಯವನ್ನ ಹಂಚಿಕೊಂಡರು.

Karnataka Govt Considers State Level Teacher Awards For Private School Teachers Madhu Bangarappa

ಖಾಸಗಿ ಶಾಲೆಗಳ ಶಿಕ್ಷಕರು ಕೂಡ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಅಪಾರ ಶ್ರಮ ವಹಿಸುತ್ತಿದ್ದಾರೆ. ಹೀಗಾಗಿ, ಅವರ ಸೇವೆಯನ್ನ ಗುರುತಿಸಿ ರಾಜ್ಯ ಪ್ರಶಸ್ತಿಗೆ ಪರಿಗಣಿಸಬೇಕು ಎಂಬ ಪ್ರಸ್ತಾವನೆ ಸರ್ಕಾರದ ಮುಂದಿದೆ.

ಈ ಕುರಿತು ಅಧಿಕಾರಿಗಳ ಮಟ್ಟದಲ್ಲಿ ಹಾಗೂ ಸಂಬಂಧಪಟ್ಟ ವೇದಿಕೆಗಳಲ್ಲಿ ಸಮಗ್ರವಾಗಿ ಚರ್ಚಿಸಿ ಮುಂಬರುವ ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಅಲ್ಲದೆ, ಖಾಸಗಿ ಶಾಲೆಗಳು ಸರ್ಕಾರಕ್ಕೆ ನಿಗದಿತ ಶುಲ್ಕ ಪಾವತಿಸಿ ಸರ್ಕಾರಿ ಪಠ್ಯಪುಸ್ತಕಗಳನ್ನ ಪಡೆಯಲು ಸಲ್ಲಿಸಿರುವ ಮನವಿಯನ್ನ ಸಹ ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಬೆಂಗಳೂರು ಶಾಲಾ ಸಮಯ ಬದಲಾವಣೆ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ ನಿಯಂತ್ರಿಸುವ ಸಲುವಾಗಿ ಶಾಲೆಗಳ ಆರಂಭ ಮತ್ತು ಮುಕ್ತಾಯದ ವೇಳಾಪಟ್ಟಿಯನ್ನ ಬದಲಾವಣೆ ಮಾಡುವಂತೆ ಖಾಸಗಿ ಶಾಲೆಗಳ ಒಕ್ಕೂಟ ಮನವಿ ಮಾಡಿದೆ. ಈ ವಿಚಾರ ಸರ್ಕಾರದ ಗಮನದಲ್ಲಿದ್ದು, ಗೃಹ ಇಲಾಖೆ ಹಾಗೂ ಸಂಚಾರ ಪೊಲೀಸ್ ವಿಭಾಗದೊಂದಿಗೆ ಸಮಾಲೋಚನೆ ನಡೆಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಆರ್‌ಆರ್‌ ನವೀಕರಣಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನ ಸರಳಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ವಿಶೇಷ ಸದನ ಸಮಿತಿ ನೀಡಿರುವ ಮಧ್ಯಂತರ ವರದಿಯನ್ನ ಇಲಾಖೆಗೆ ಕಳುಹಿಸಲಾಗಿದೆ. ನಿಯಮಗಳ ಸಡಿಲಿಕೆಗೆ ಆದ್ಯತೆ ನೀಡಲಾಗುವುದು.

ಇದೇ ವೇಳೆ, ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಮನೆ ಬಾಡಿಗೆ ಭತ್ಯೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸುವ ಶಿಫಾರಸಿನ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪರಿಷತ್ ಸದಸ್ಯ ಪುಟ್ಟಣ್ಣ, ಮಧು ಬಂಗಾರಪ್ಪ ಅವರ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶಗಳಲ್ಲಿ ಗಣನೀಯ ಸುಧಾರಣೆ ಕಂಡುಬಂದಿದ್ದು, ಅನುತ್ತೀರ್ಣ ಪ್ರಮಾಣ ತಗ್ಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳ ಬಲವರ್ಧನೆಗೆ ಅಕ್ಷಯ ಕಾರ್ಯಕ್ರಮದ ಸ್ಮರಣೆ

ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಆಡಳಿತಾವಧಿಯನ್ನ ನೆನಪಿಸಿಕೊಂಡ ಸಚಿವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಜಾರಿಗೆ ತಂದಿದ್ದ 'ಅಕ್ಷಯ' ಯೋಜನೆಯಡಿ ಪ್ರತಿ ಮಗುವಿಗೆ ಪ್ರತಿನಿತ್ಯ ಒಂದು ರೂಪಾಯಿ ಪ್ರೋತ್ಸಾಹಧನ ನೀಡುತ್ತಿದ್ದ ಐತಿಹಾಸಿಕ ಹೆಜ್ಜೆಯನ್ನ ಮೆಲುಕು ಹಾಕಿದರು. ಇಲಾಖೆಯಲ್ಲಿ ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರ ಒಳಿತಿಗಾಗಿ ಸೇವೆ ಸಲ್ಲಿಸುವುದು ತಮಗೆ ಸಿಕ್ಕ ಮಹಾನ್ ಅವಕಾಶ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆನೇಕಲ್ ಶಾಸಕ ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ರಾಮೋಜಿಗೌಡ, ಕಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್, ಡಿಡಿಪಿಐ ಜಯಪ್ರಕಾಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+