ಬಿಎಸ್‌ವೈ ವಿರುದ್ಧ ತನಿಖೆ, ಸುಪ್ರೀಂ ಮೆಟ್ಟಿಲೇರಿದ ಸರ್ಕಾರ
ಬೆಂಗಳೂರು, ನವೆಂಬರ್ 06 : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣಗಳ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಕರ್ನಾಟಕ ಸರ್ಕಾರದ ಪರವಾಗಿ ವಕೀಲ ಜೋಸೆಫ್ ಅರಿಸ್ಟಾಟಲ್ ಅವರು ಗುರುವಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ದೂರುಗಳ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದು ಸರಿಯಲ್ಲ. ತನಿಖೆ ಸಂಪೂರ್ಣ ಸ್ಥಗಿತಗೊಂಡಿದ್ದು, ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದಾರೆ. [ಯಡಿಯೂರಪ್ಪ ವಿರುದ್ಧದ ತನಿಖೆಗೆ ತಡೆ]

ಯಡಿಯೂರಪ್ಪ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮ ಡಿನೋಟಿಫಿಕೇಷನ್ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ್ದಾರೆ ಎಂದು ಮಹಾಲೇಖಪಾಲರು ಕೊಟ್ಟ ವರದಿ ಆಧರಿಸಿ ಲೋಕಾಯುಕ್ತದಲ್ಲಿ ದೂರುಗಳು ದಾಖಲಾಗಿವೆ. [ಯಡಿಯೂರಪ್ಪ ವಿರುದ್ಧ 13ನೇ FIR]
ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡುವಾಗ ವಿಶೇಷ ಸರ್ಕಾರಿ ಅಭಿಯೋಜಕರ ಅಭಿಪ್ರಾಯವನ್ನು ಕೇಳಿಲ್ಲ. ಆದ್ದರಿಂದ, ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಿ ತನಿಖೆಗೆ ಒಪ್ಪಿಗೆ ನೀಡಬೇಕು ಎಂದು ಸರ್ಕಾರ ಅರ್ಜಿಯಲ್ಲಿ ಮನವಿ ಮಾಡಿದೆ.[ಯಡಿಯೂರಪ್ಪ ಅವರನ್ನು ಸದ್ಯಕ್ಕೆ ಬಂಧಿಸುವುದಿಲ್ಲ]
ಸೆಪ್ಟೆಂಬರ್ 15ರಂದು ತಡೆ : 2015ರ ಸೆಪ್ಟೆಂಬರ್ 15ರಂದು ಕರ್ನಾಟಕ ಹೈಕೋರ್ಟ್ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತ ಎಸ್‌ಐಟಿ ಅಧಿಕಾರಿಗಳು ದಾಖಲಿಸಿದ್ದ 3 ಅಕ್ರಮ ಡಿನೋಟಿಫಿಕೇಷನ್ ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ನೀಡಿತ್ತು.
ಮೂರು ಪ್ರಕರಣಗಳಲ್ಲಿ ಯಡಿಯೂರಪ್ಪ ಅವರ ವಿರುದ್ಧ ಎಸ್‌ಐಟಿ ಎಫ್‌ಐಆರ್ ದಾಖಲು ಮಾಡಿದೆ. ಎಸ್‌ಐಟಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು, ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ.ರತ್ನಕಲಾ ಅವರ ಏಕಸದಸ್ಯ ಪೀಠ ತನಿಖೆಗೆ ತಡೆಯಾಜ್ಞೆ ನೀಡಿತ್ತು.
ಯಾವ ಪ್ರಕರಣಗಳು : ಬೆಂಗಳೂರಿನ ಬಿಳೇಕಹಳ್ಳಿ, ಹಲಗೇವಡೇರಹಳ್ಳಿ, ಮಹಾಲಕ್ಷ್ಮೀ ಬಡಾವಣೆಯ ಜೆ.ಬಿ ಕಾವಲ್ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ನಡೆಸುತ್ತಿದ್ದ ತನಿಖೆಗೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದರೆ, ಎಫ್‌ಐಆರ್ ರದ್ದುಗೊಳಿಸಿಲ್ಲ.












Click it and Unblock the Notifications