ಸಕಲ ಸರ್ಕಾರಿ ಗೌರವಗಳೊಂದಿಗೆ ದೊರೆಸ್ವಾಮಿ ಅಂತ್ಯಕ್ರಿಯೆ ನಡೆಸಲು ಸರ್ಕಾರದ ಆದೇಶ
ಬೆಂಗಳೂರು, ಮೇ 26: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಎಚ್.ಎಸ್. ದೊರೆಸ್ವಾಮಿಯವರು ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ದೊರೆಸ್ವಾಮಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರು ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ದೊರೆಸ್ವಾಮಿಯವರ ನಿಧನಕ್ಕೆ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಲು ಆದೇಶಿಸಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮಹಾನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರು, ಪೊಲೀಸ್ ಆಯುಕ್ತರು ಹಾಗೂ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಗಳಿಗೆ ಈ ಆದೇಶ ನೀಡಲಾಗಿದೆ.
104 ವರ್ಷದ ಎಚ್. ಎಸ್. ದೊರೆಸ್ವಾಮಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಈಚೆಗಷ್ಟೆ ಅವರು ಕೊರೊನಾದಿಂದ ಗುಣಮುಖರಾಗಿದ್ದರು. ಆನಂತರ ಅವರಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದ್ದರಿಂದ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 12 ದಿನಗಳಿಂದ ಆಸ್ಪತ್ರೆಯಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.












Click it and Unblock the Notifications