Panchayat Election: ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್, ಮಾಹಿತಿ ಇಲ್ಲಿದೆ
ಕರ್ನಾಟಕದ ಹಲವು ತಾಲ್ಲೂಕು ಪಂಚಾಯಿತಿಗಳು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಮೂರು ವರ್ಷಗಳಿಂದ ಚುನಾವಣೆ ನಡೆದಿರಲಿಲ್ಲ. ಇದೀಗ ಈ ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಎಲ್ಲ ಪಕ್ಷಗಳು ಈಗಾಗಲೇ ಈ ಪಂಚಾಯಿತಿ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, ಯಾವಾಗ ನಡೆಯಲಿದೆ ಎನ್ನುವ ಮಾಹಿತಿ ಇರಲಿಲ್ಲ. ಇದೀಗ ಯಾವ ತಿಂಗಳಿನಲ್ಲಿ ಈ ಚುನಾವಣೆ ನಡೆಯಲಿದೆ ಎಂಬ ಮಾಹಿತಿ ಬಹಿರಂಗವಾಗಿದೆ.
ಮೂರುವರೆ ವರ್ಷಗಳಿಂದ ಕುತೂಹಲ ಮೂಡಿಸಿದ್ದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಇಂದು ಪಂಚಾಯಿತಿ ಚುನಾವಣೆ ನಡೆಸುವ ಕುರಿತು ಹೈಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಸರ್ಕಾರದ ಪರ ವಕೀಲರು ಕೋರ್ಟ್ ಚುನಾವಣೆಯ ಯಾವಾಗ ನಡೆಸುತ್ತೇವೆ ಎಂಬ ಮಾಹಿತಿ ಬಹಿರಂಗಪಡಿಸಿದ್ದಾರೆ.

ಸರ್ಕಾರದ ಪರ ವಕೀಲರಾದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಹೇಳಿರುವಂತೆ ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವುದಾಗಿ ಹೈಕೋರ್ಟ್ಗೆ ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸದ ಕಾರಣ ರಾಜ್ಯ ಚುನಾವಣಾ ಆಯೋಗವು ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ಗೆ ಮೇ ತಿಂಗಳ ಬಳಿಕ ಚುನಾವಣೆ ನಡೆಸುವುದಾಗಿ ವಕೀಲರು ಸ್ಪಷ್ಟಪಡಿಸಿದ್ದಾರೆ.
ಕೋರ್ಟ್ ಸರ್ಕಾರದ ಪರ ವಕೀಲರ ಈ ಹೇಳಿಕೆ ದಾಖಲಿಸಿಕೊಂಡಿದೆ. ಅಲ್ಲದೆ ರಾಜ್ಯ ಸರ್ಕಾರವು ಮೀಸಲಾತಿ ಪಟ್ಟಿ ಕೊಟ್ಟರೆ ಚುನಾವಣಾ ವೇಳಾಪಟ್ಟಿ ಪ್ರಕಟಿಸುವುದಾಗಿ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಕೂಡ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ಮೇ ತಿಂಗಳ ಒಳಗಾಗಿ ಮೀಸಲಾತಿ ಪಟ್ಟಿ ನೀಡುವುದಾಗಿ ತಿಳಿಸಿದ್ದಾರೆ. ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕೊಡುತ್ತೇವೆ. ಬಳಿಕ ಜೂನ್ ಅಥವಾ ಜುಲೈ ತಿಂಗಳಲ್ಲಿ ಈ ಚುನಾವಣೆಗಳನ್ನು ನಡೆಸಬಹುದು ಎಂದು ಚುನಾವಣಾ ಆಯೋಗಕ್ಕೆ ಉತ್ತರಿಸಿದ್ದಾರೆ.

ಅಲರ್ಟ್ ಆಗಿ ಎಂದಿದ್ದ ಡಿಕೆಶಿ: ಈ ಚುನಾವಣೆಗಳ ಬಗ್ಗೆ ನಿನ್ನೆ ಮಾತನಾಡಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಸ್ಥಳೀಯ ಸಂಸ್ಥೆಗಳಿಗೆ ಯಾವುದೇ ಕ್ಷಣದಲ್ಲಾದರೂ ಚುನಾವಣೆ ನಡೆಯಬಹುದು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಚುನಾವಣೆಗೆ ಸಜ್ಜಾಗಬೇಕು ಎಂದು ಕರೆ ನೀಡಿದ್ದರು. ನ್ಯಾಯಾಲಯದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಕುರಿತು ಸದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ ಎಂದು ಸುಳಿವು ನೀಡಿದ್ದರು. ಇದಾದ ಒಂದೇ ದಿನದಲ್ಲಿ ಈ ಬೆಳವಣಿಗೆ ನಡೆದಿದೆ.
ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನೂ ನಡೆಸಬೇಕಾಗಿದ್ದು, ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಚುನಾವಣೆಗಳ ಸಿದ್ಧತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿಕೊಂಡು, ವಿಭಾಗವಾರು ಸಮಿತಿ ರಚಿಸಲಿದೆ. ಈ ಸಮಿತಿಯು ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು ಎಂದು ಪಕ್ಷದ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಡಿಕೆ ಶಿವಕುಮಾರ್ ಕರೆ ನೀಡಿದ್ದರು.












Click it and Unblock the Notifications