Caste census: ಜಾತಿ ಗಣತಿ ವರದಿ ಜಾರಿ ಬಗ್ಗೆ ಗುಡ್‌ನ್ಯೂಸ್ ಕೊಟ್ಟ ಸಿದ್ದರಾಮಯ್ಯ
ರಾಜ್ಯ ಬಜೆಟ್‌ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಇದೇ ವೇಳೆ ಅವರು ಜಾತಿ ಗಣತಿ ವರದಿ ಜಾರಿಯ ಬಗ್ಗೆಯೂ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಜಾತಿ ಗಣತಿ ವರದಿ ವೈಜ್ಞಾನಿಕವಾಗಿ ನಡೆದಿದೆ. ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸಿಎಂ ಭರವಸೆ ನೀಡಿದ್ದಾರೆ.
ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು, ಸಮಾಜದ ಎಲ್ಲ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದ್ದಾರೆ. ಅಸಮಾನತೆ ಹೋಗಬೇಕು, ಜಾತಿ ವ್ಯವಸ್ಥೆಯಿಂದ ನಿರ್ಮಾಣವಾಗಿರುವ ಅಸಮಾನತೆಯಿಂದ ಬಹುಸಂಖ್ಯಾತ ಜನ ಅವಕಾಶ ವಂಚಿತರಾಗಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ನೀಡಬೇಕಿದೆ ಎಂದಿದ್ದಾರೆ.

ತಳ ಸಮುದಾಯವಿರಲಿ, ಮೇಲ್ವರ್ಗವೇ ಇರಲಿ, ಎಲ್ಲರಿಗೂ ಸಮಾನತೆ ಇರಬೇಕು ಎಂಬ ಅಂಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ. ಹಿಂದುಳಿದ ಜಾತಿಗಳಲ್ಲೂ ತಾರತಮ್ಯ, ಅಸಮಾನತೆ ಇದೆ. ಇದನ್ನು ಒಂದೇ ಬಾರಿಗೆ ಹೋಗಲಾಡಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ತಮಿಳುನಾಡು ಮಾದರಿಯಲ್ಲಿ ಮೀಸಲಾತಿ ಹೆಚ್ಚಿಸುವಂತೆ ಸಭೆಯಲ್ಲಿ ಒತ್ತಾಯ ಕೇಳಿಬಂದಿದೆ. 1992ರ ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇ 50ರಷ್ಟು ಮೀರಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಕಳೆದ ಸರ್ಕಾರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಎಂದು ಮೀಸಲಾತಿ ಕಲ್ಪಿಸಿದ್ದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಸಂವಿಧಾನದ ಆರ್ಟಿಕಲ್ 15 ಮತ್ತು 16ರ ಪ್ರಕಾರ ಮೀಸಲಾತಿ ನೀಡಬೇಕಾಗಿರುವುದು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ ಎಂದು ಪ್ರತಿಪಾದಿಸಿದ್ದಾರೆ.

ಬಜೆಟ್‌ನಲ್ಲಿ ಅಲೆಮಾರಿಗಳಿಗೆ ಸಿಹಿಸುದ್ದಿ: ಅಲೆಮಾರಿ ಜನಾಂಗಕ್ಕೆ ಉಚಿತ ಶಿಕ್ಷಣದ ಹಕ್ಕು ಒತ್ತಾಯ ಸಮಂಜಸವಾಗಿದೆ. ಸರ್ಕಾರ ಸರ್ವರಿಗೂ ಶಿಕ್ಷಣದ ಹಕ್ಕನ್ನು ನೀಡಿದೆ (ಆರ್‌ಟಿಇ). ಅದರ ಪ್ರಕಾರ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಅವಕಾಶ ಸಿಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಾರಿಯ ಬಜೆಟ್‌ನಲ್ಲಿ ಅಲೆಮಾರಿ ಜನಾಂಗಕ್ಕೆ ವಿಶೇಷ ಗಮನ ಹರಿಸಲಾಗುವುದು. ಇಷ್ಟು ಮಾತ್ರವಲ್ಲ, ಅತಿ ಹಿಂದುಳಿದ ವರ್ಗದವರಿಗೂ ಕಾರ್ಯಕ್ರಮಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸುತ್ತೇನೆ. ಜೊತೆಗೆ ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಹಿಂದುಳಿದ ವರ್ಗಗಳಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಹಿಂದುಳಿದ ವರ್ಗ, ಜಾತಿ ಮತ್ತು ಸಮುದಾಯಗಳ ಮುಖಂಡರುಗಳ ಜೊತೆ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಸಮುದಾಯಗಳ ಕುಂದುಕೊರತೆಗಳು ಹಾಗೂ ನಿರೀಕ್ಷೆಗಳನ್ನು ಆಲಿಸಿ, ಅವುಗಳ ಈಡೇರಿಕೆಗೆ ಬಜೆಟ್ ಮೂಲಕ ಗರಿಷ್ಠ ಪ್ರಯತ್ನ ನಡೆಸುವುದಾಗಿಯೂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಭೆಯಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಸಮುದಾಯಗಳ ಮುಖಂಡರುಗಳು ಕೂಡ ಹಾಜರಿದ್ದರು.












Click it and Unblock the Notifications