ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ಕೊಟ್ಟ ಸರ್ಕಾರ; ಇನ್ಮುಂದೆ ಹಣ ಬರಲ್ವಾ?
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಮಾತ್ರ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಒಂದೇ ಖಾತೆಗೆ ಕೋಟ್ಯಂತರ ಹಣ ಜಮೆ
ಆಡಿಟರ್ ಜನರಲ್ (AG) ವರದಿಯಲ್ಲಿ ಉಲ್ಲೇಖವಾಗಿರುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಗಂಭೀರ ಲೋಪಗಳ ಬಗ್ಗೆ ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಲಾಯಿತು. ಒಂದೇ ಬ್ಯಾಂಕ್ ಖಾತೆಯನ್ನು ಬಳಸಿ ಹಲವು ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವುದು ಪತ್ತೆಯಾಗಿದೆ. ಈ ರೀತಿ ಸುಮಾರು 3 ಲಕ್ಷ ಕಂತುಗಳಲ್ಲಿ ಒಟ್ಟು 60 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿರುವ ಆಘಾತಕಾರಿ ಅಂಶ ಎಜಿ ವರದಿಯಿಂದ ಬೆಳಕಿಗೆ ಬಂದಿದೆ.

ಮೃತರ ಖಾತೆಗೂ ಹಣ ವರ್ಗಾವಣೆ
ಮರಣ ಹೊಂದಿದ ಫಲಾನುಭವಿಗಳ ವಿವರಗಳು ಸಕಾಲದಲ್ಲಿ ಸಿಗದೇ ಇರುವುದರಿಂದ, ಮೃತಪಟ್ಟವರ ಖಾತೆಗಳಿಗೂ ಗೃಹಲಕ್ಷ್ಮಿ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದೆ. ಇನ್ನು ಮುಂದೆ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿ ಇದಕ್ಕೆ ತಡೆ ಒಡ್ಡಲು ನಿರ್ಧರಿಸಲಾಗಿದೆ. ಗ್ಯಾರಂಟಿ ಯೋಜನೆಯ ಹಣ ಪಡೆಯುವ ಫಲಾನುಭವಿಗಳ ಬ್ಯಾಂಕ್ ಖಾತೆಗಳು ಕರ್ನಾಟಕ ರಾಜ್ಯದಲ್ಲೇ ಇರಬೇಕು. ಆದರೆ, ಬೇರೆ ರಾಜ್ಯಗಳ ಬ್ಯಾಂಕ್ ಖಾತೆಗಳಿಗೆ ಹಣ ಹೋಗುತ್ತಿರುವುದು ಪತ್ತೆಯಾಗಿದ್ದು, ಇತರೆ ರಾಜ್ಯಗಳ ಮತದಾರರು ಇದರ ಲಾಭ ಪಡೆಯುತ್ತಿರುವುದನ್ನು ತಡೆಯಲು ಸೂಚಿಸಿದ್ದಾರೆ. ಏರ್‌ಟೆಲ್ ಪೇಮೆಂಟ್ಸ್ ಬ್ಯಾಂಕ್‌ನಲ್ಲಿ ಯುಪಿಐ (UPI) ಖಾತೆಗಳನ್ನು ಸೃಷ್ಟಿಸಿ ಯೋಜನೆಯ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳನ್ನು ಸಹ ಅಧಿಕಾರಿಗಳು ಸಭೆಯ ಗಮನಕ್ಕೆ ತಂದಿದ್ದಾರೆ.
ಅರ್ಹ ಫಲಾನುಭವಿಗಳ ರಕ್ಷಣೆಗೆ ಹೊಸ ಕ್ರಮ
ಅನರ್ಹರನ್ನು ತಡೆಯುವಾಗ ನಿಜವಾದ ಬಡವರಿಗೆ ಸಮಸ್ಯೆಯಾಗಬಾರದು ಎಂದು ಸಿಎಂ ಡಿಕೆ ಶಿವಕುಮಾರ್ ಕೆಲವು ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ. ಹಲವು ಫಲಾನುಭವಿಗಳು ಬ್ಯಾಂಕ್ ಸಾಲ ಪಡೆದಿದ್ದು, ಗೃಹಲಕ್ಷ್ಮಿ ಹಣ ಜಮೆಯಾದ ತಕ್ಷಣ ಬ್ಯಾಂಕಿನವರು ಅದನ್ನು ಸಾಲದ ಮೊತ್ತಕ್ಕೆ ಕಡಿತ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಫಲಾನುಭವಿಗಳು ತಮ್ಮ ಖಾತೆಗಳನ್ನು ಬದಲಾಯಿಸುತ್ತಿದ್ದು, ಅಂತಹ ಖಾತೆ ಬದಲಾವಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮೆಯಾದ ತಕ್ಷಣ ಫಲಾನುಭವಿಗಳಿಗೆ ವಾಯ್ಸ್ ಮೆಸೇಜ್ ಮೂಲಕ ಮಾಹಿತಿ ನೀಡುವ ತಂತ್ರಜ್ಞಾನ ತರಲು ತೀರ್ಮಾನಿಸಲಾಗಿದೆ.
ಆರ್ಥಿಕವಾಗಿ ಸದೃಢರಾಗಿರುವ ಸಾರ್ವಜನಿಕರು ಯಾರಾದರೂ ಇತರೆ ಬಡ ಅರ್ಹ ಫಲಾನುಭವಿಗಳ ಹಿತದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಸ್ವಯಂಪ್ರೇರಿತವಾಗಿ ಬಿಟ್ಟುಕೊಡಲು ಮುಂದೆ ಬಂದರೆ, ಅಂತಹವರನ್ನು ಪ್ರೋತ್ಸಾಹಿಸಲು ಸರ್ಕಾರ ನಿರ್ಧರಿಸಿದೆ. ಇನ್ನು ಬೆಲೆ ಏರಿಕೆ, ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು, ಸಾಮಾನ್ಯ ಜನರ ಮೇಲಾಗುತ್ತಿರುವ ಆರ್ಥಿಕ ಹೊರೆ ಮತ್ತು ತಲಾದಾಯ ಕುಸಿತದಂತಹ ಅಂಶಗಳ ಕುರಿತೂ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ರಾಜ್ಯದ ಗ್ಯಾರಂಟಿಗಳು ಎಷ್ಟು ಆಸರೆಯಾಗಿವೆ ಎಂಬುದನ್ನು ಸಭೆಯಲ್ಲಿ ಚರ್ಚಿಸಲಾಯಿತು.
ಈ ಉನ್ನತ ಮಟ್ಟದ ಸಭೆಯಲ್ಲಿ ಸಿಎಂ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು. ಇವರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಎಂ ಮುಖ್ಯ ಸಲಹೆಗಾರ ಸುನಿಲ್ ಕನಗೋಳು, ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ, ಎಸ್.ಆರ್. ಪಾಟೀಲ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.













Click it and Unblock the Notifications