ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಉಡುಗೊರೆ ಕೊಟ್ಟ ಸಿಎಂ
ಬೆಂಗಳೂರು, ಜನವರಿ 14; ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕಿಳಿದಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಸಂಕ್ರಾಂತಿ ಕೊಡುಗೆ ನೀಡಿದೆ. ವೇತನವನ್ನು ದುಪ್ಪಟ್ಟಿಗಿಂತಲೂ ಹೆಚ್ಚು ಏರಿಕೆ ಮಾಡಿದೆ.
ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಸೆಮಿಸ್ಟರ್-ವಾರು ನೇಮಕಾತಿಯನ್ನು ನಿಲ್ಲಿಸಿ, ಇನ್ನು ಮುಂದೆ ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಿಸಿ ಕೊಳ್ಳುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.
"ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿದೆ. ಈ ಸಂಬಂಧ ರಚಿಸಲಾಗಿದ್ದ ಸಮಿತಿಯ ಶಿಫಾರಸ್ಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಇದರಿಂದ ಅತಿಥಿ ಉಪನ್ಯಾಸಕರಿಗೆ ಅನುಕೂಲವಾಗಲಿದೆ": ಮುಖ್ಯಮಂತ್ರಿ @BSBommai.
— CM of Karnataka (@CMofKarnataka) January 14, 2022
ಸರ್ಕಾರದ ಪರವಾಗಿ ವಿಧಾನಸೌಧದಲ್ಲಿ ಶುಕ್ರವಾರ ಈ ಮಹತ್ವದ ನಿರ್ಧಾರಗಳನ್ನು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಪ್ರಕಟಿಸಿದರು. "ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವಧನ ಪಡೆಯಲಿದ್ದಾರೆ" ಎಂದರು.
ಅತಿಥಿ ಉಪನ್ಯಾಸಕರ ನೇಮಕಾತಿ; ಶೀಘ್ರದಲ್ಲೇ ಸಿಹಿಸುದ್ದಿ ಸುಳಿವು
"ಹಾಗೆಯೇ ಯುಜಿಸಿ ಬಯಸುವ ಶೈಕ್ಷಣಿಕ ಅರ್ಹತೆ ಹೊಂದದೆ 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 28 ಸಾವಿರ ರೂ. ಮತ್ತು ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 26 ಸಾವಿರ ರೂ. ಗೌರವಧನ ನಿಗದಿಪಡಿಸಲಾಗಿದೆ" ಎಂದು ಸಚಿವರು ವಿವರಣೆ ನೀಡಿದರು.
ತೀರ್ಥಹಳ್ಳಿ-ವಿಧಾನಸೌಧ ಪಾದಯಾತ್ರೆ ಹೊರಟ ಅತಿಥಿ ಉಪನ್ಯಾಸಕರು
"ನಿಗದಿತ ಶೈಕ್ಷಣಿಕ ಅರ್ಹತೆ ಗಳಿಸಿಕೊಳ್ಳಲು 3 ವರ್ಷಗಳ ಕಾಲಾವಕಾಶ ನೀಡಲಾಗಿದೆ. ಅತಿಥಿ ಉಪನ್ಯಾಸಕರಿಗೆಲ್ಲ ಇನ್ನು ಮುಂದೆ ಪ್ರತಿ ತಿಂಗಳು 10ರೊಳಗೆ ವೇತನ ಪಾವತಿಸಲಾಗುವುದು" ಎಂದು ಉನ್ನತ ಶಿಕ್ಷಣ ಸಚಿವರು ಹೇಳಿದರು.
4000 ಅತಿಥಿ ಶಿಕ್ಷಕರ ಹುದ್ದೆ ಭರ್ತಿಗೆ ಒಪ್ಪಿಗೆ, ಜಿಲ್ಲಾವಾರು ಪಟ್ಟಿ
ಇದುವರೆಗೆ, ಯುಜಿಸಿ ನಿಗದಿತ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರು ತಿಂಗಳಿಗೆ 13 ಸಾವಿರ ರೂ. ಮತ್ತು ಮಿಕ್ಕವರು 11 ಸಾವಿರ ರೂ. ಗೌರವಧನ ಪಡೆಯುತ್ತಿದ್ದರು.
ಅತಿಥಿ ಉಪನ್ಯಾಸಕರ ಸುಗಮ ನೇಮಕಾತಿಗೆ ಆನ್-ಲೈನ್ ಪೋರ್ಟಲ್ ಸಹ ಅಭಿವೃದ್ಧಿ ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಇದರಲ್ಲಿ ಜನವರಿ 17ರಿಂದ ಅರ್ಜಿ ಹಾಕಿಕೊಳ್ಳಬಹುದು. ಇದಕ್ಕೆ ಒಂದು ವಾರ ಕಾಲಾವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಇಷ್ಟದ 5 ಸರಕಾರಿ ಕಾಲೇಜುಗಳನ್ನು ಸೂಚಿಸಲು ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಸೂಕ್ತ ಕಾರ್ಯಭಾರ ಇರುವಂತೆ ವ್ಯವಸ್ಥೆ ಮಾಡಲಾಗಿದೆ.
Koo Appನಮ್ಮೆಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಒಳಗೆ ಸಿಹಿ ಸುದ್ದಿ ಕೊಡುವ ಭರವಸೆ ನೀಡಿದ್ದೆವು. ಅಂತೆಯೇ ಮಾನ್ಯ ಮುಖ್ಯಮಂತ್ರಿ @bsbommai ಅವರ ನೇತೃತ್ವದ ನಮ್ಮ @BJP4Karnataka ಸರ್ಕಾರ ಸಂಕ್ರಾಂತಿ ಹಬ್ಬವಾದ ಇಂದು ಆ ಭರವಸೆಯನ್ನು ನೆರವೇರಿಸಿದೆ. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಹಿತ ರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. - Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 14 Jan 2022

ಅತಿಥಿ ಉಪನ್ಯಾಸಕರ ಸಮಸ್ಯೆ/ ಬೇಡಿಕೆಗಳ ಪರಿಹಾರಕ್ಕಾಗಿ ಸರ್ಕಾರವು ತಿಂಗಳ ಹಿಂದೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಿ, ವರದಿ ನೀಡಲು ಒಂದು ತಿಂಗಳ ಕಾಲವಕಾಶ ನೀಡಿತ್ತು.
"ಅತಿಥಿ ಉಪನ್ಯಾಸಕರ ಸಮಸ್ಯೆ 2002ರಿಂದಲೂ ಇತ್ತು. ಆದರೆ ಹಿಂದಿನ ಸರಕಾರಗಳು ಇದನ್ನು ಸರಿಯಾಗಿ ನಿಭಾಯಿಸದೆ ಇದ್ದುದರಿಂದ ಇದೊಂದು ಕಗ್ಗಂಟಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸಹಾನುಭೂತಿ ಮತ್ತು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ಕ್ಷಿಪ್ರ ಗತಿಯಲ್ಲಿ ಸ್ಪಂದಿಸಿದರು. ಇದರಿಂದಾಗಿ ಕೇವಲ ಒಂದು ತಿಂಗಳಲ್ಲಿ ಪರಿಹಾರ ರೂಪಿಸುವುದು ಸಾಧ್ಯವಾಯಿತು" ಎಂದು ಸಚಿವರು ಹೇಳಿದರು.
"ಇದೊಂದು ಐತಿಹಾಸಿಕ ತೀರ್ಮಾನ. ಇದಕ್ಕೆ ಮಿಂಚಿನ ವೇಗದಲ್ಲಿ ಪರಿಹರ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ಬೋಧಕರು ಈ ಸಮಾಜದ ಸಂಪತ್ತು. ಅವರ ನೆಮ್ಮದಿಯೇ ಸಮಾಜದ ನೆಮ್ಮದಿ" ಎಂದು ಸಚಿವರು ತಿಳಿಸಿದ್ದಾರೆ.
Koo App”ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿದೆ. ಈ ಸಂಬಂಧ ರಚಿಸಲಾಗಿದ್ದ ಸಮಿತಿಯ ಶಿಫಾರಸ್ಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಇದರಿಂದ ಅತಿಥಿ ಉಪನ್ಯಾಸಕರಿಗೆ ಅನುಕೂಲವಾಗಲಿದೆ”: ಮುಖ್ಯಮಂತ್ರಿ @bsbommai. - CM of Karnataka (@CMOKarnataka) 14 Jan 2022

ರಾಜ್ಯದಲ್ಲಿ ಸುಮಾರು 14 ಸಾವಿರ ಅತಿಥಿ ಉಪನ್ಯಾಸರು ವಿವಿಧ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿ ಅಧಿವೇಶನದ ಸಂದರ್ಭ ಸುವರ್ಣ ವಿಧಾನಸೌಧದ ಮುಂದೆಯು ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು.
ಆದರೆ ಬೇಡಿಕೆಗಳನ್ನು ಈಡೇರಿಸುವತ್ತ ಸರ್ಕಾರ ಸದನದಲ್ಲಿ ಚರ್ಚೆ ನಡೆಸಲಿಲ್ಲ. ಇದೆ ಕಾರಣಕ್ಕೆ ಅತಿಥಿ ಉಪನ್ಯಾಸಕರು ನಿತ್ಯ ಪ್ರತಿಭಟನೆ ನಡೆಸುತ್ತಿದ್ದರು. ಈ ಮಧ್ಯೆ ಅತಿಥಿ ಉಪನ್ಯಾಸಕ ಹರ್ಷ ಶಾನುಭೋಗ್ ಆತ್ಮಹತ್ಯೆ ಪ್ರಕರಣ ಹೋರಾಟದ ದಿಕ್ಕು ಬದಲಿಸಿತ್ತು.